More

    ಕೆಪಿಸಿಸಿ ಅಧ್ಯಕ್ಷ ಡಿಕೆಶಿ ಶಿರಸಿಗೆ ನಾಡಿದ್ದು

    ಶಿರಸಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ ನ. 28ರಂದು ಶಿರಸಿಗೆ ಆಗಮಿಸುತ್ತಿದ್ದು, ಪಕ್ಷ ಸಂಘಟನೆ ದೃಷ್ಟಿಯಿಂದ ಇದು ಉತ್ತಮ ಬೆಳವಣಿಗೆಯಾಗಿದೆ ಎಂದು ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ಭೀಮಣ್ಣ ನಾಯ್ಕ ಹೇಳಿದರು.

    ಈ ಕುರಿತು ನಗರದ ಕಾಂಗ್ರೆಸ್ ಕಚೇರಿಯಲ್ಲಿ ಬುಧವಾರ ಸುದ್ದಿಗೋಷ್ಠಿ ಯಲ್ಲಿ ಮಾತನಾಡಿದ ಅವರು, ಅಂದು ಬೆಳಗ್ಗೆ 9.30ರಿಂದ 10.30ರವರೆಗೆ ಪಕ್ಷದ ಮುಖಂಡರ ಭೇಟಿಗೆ ಅವಕಾಶ ನೀಡಲಿದ್ದಾರೆ. ನಂತರ ಕಾಂಗ್ರೆಸ್ ಕಚೇರಿಗೆ ಭೇಟಿ ನೀಡಿ ತದನಂತರ ಮಾರಿಕಾಂಬಾ ದೇವಾಲಯಕ್ಕೆ ತೆರಳಿ ದೇವಿ ದರ್ಶನ ಪಡೆದು ನಗರದ ತೋಟಗಾರ ಕಲ್ಯಾಣ ಮಂಟಪದಲ್ಲಿ ಆಯೋಜಿಸಿರುವ ಜಿಲ್ಲಾ ಕಾಂಗ್ರೆಸ್ ಸಮಿತಿ ಸಭೆಯಲ್ಲಿ ಪಾಲ್ಗೊಳ್ಳುವರು. ಅವರೊಂದಿಗೆ ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ, ಶಾಸಕ ಆರ್.ವಿ. ದೇಶಪಾಂಡೆ, ವಿಧಾನ ಪರಿಷತ್ ಸದಸ್ಯ ಎಸ್.ಎಲ್. ಘೊಟ್ನೇಕರ್, ಜಿಲ್ಲೆಯ ಮಾಜಿ ಶಾಸಕರು, ಪಕ್ಷದ 14 ಬ್ಲಾಕ್ ವ್ಯಾಪ್ತಿಯ ಅಧ್ಯಕ್ಷ, ಪದಾಧಿಕಾರಿಗಳು, ಮುಖಂಡರು ಭಾಗವಹಿಸಲಿದ್ದಾರೆ ಎಂದರು.

    ಕಾಂಗ್ರೆಸ್ ಪಕ್ಷದ ಜವಾಬ್ದಾರಿ ದೊಡ್ಡದಾಗಿದೆ. ಜಿಲ್ಲೆಯಲ್ಲಿ ಪಕ್ಷ ಸದೃಢವಾಗಿದೆ. ಕೆಪಿಸಿಸಿ ಸೂಚನೆಯಂತೆ ಪಕ್ಷ ಸಂಘಟಿಸುತ್ತೇವೆ ಎಂದ ಅವರು, ಜಿಲ್ಲೆಯಲ್ಲಿ ಅಭಿವೃದ್ಧಿ ನಿಂತ ನೀರಾಗಿದೆ. ರಾಜ್ಯ ಹೆದ್ದಾರಿಗಳು ಸಂಚಾರಕ್ಕೆ ಅಯೋಗ್ಯವಾಗಿವೆ. ಜನಸಾಮಾನ್ಯರ ಸಂಕಷ್ಟಗಳಿಗೆ ಸರ್ಕಾರ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿದರು.

    ಪಕ್ಷದ ಅಧ್ಯಕ್ಷರನ್ನು ಸಾಮಾನ್ಯ ಕಾರ್ಯಕರ್ತರಿಂದ ಹಿಡಿದು ಪ್ರತಿಯೊಬ್ಬರೂ ಭೇಟಿಯಾಗುವ ಹಕ್ಕು ಎಲ್ಲರಿಗೂ ಇದೆ. ಜಿಲ್ಲಾ ನಿಯೋಗವೆಂದರೆ ಶಾಸಕರು, ವಿಧಾನ ಪರಿಷತ್ ಸದಸ್ಯರು, ಪಕ್ಷದ ಪದಾಧಿಕಾರಿಗಳೆಲ್ಲ ಇರಬೇಕು. ಕೆಲ ದಿನಗಳ ಹಿಂದೆ ಪಕ್ಷದ ಅನೇಕರು ಅಧ್ಯಕ್ಷರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಮನೆ ಎಂದರೆ ಸಣ್ಣ ಪುಟ್ಟ ಗೊಂದಲ ಇದ್ದೆ ಇರುತ್ತವೆ. ಜಿಲ್ಲಾಧ್ಯಕ್ಷ ಸ್ಥಾನದ ಕುರಿತಂತೆ ವರಿಷ್ಠರು ತೀರ್ಮಾನ ಕೈಗೊಳ್ಳುತ್ತಾರೆ. ಪಕ್ಷದಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಎಂದು ಹೇಳಿದರು.

    ಈ ವೇಳೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜಗದೀಶ ಗೌಡ, ಪ್ರಮುಖರಾದ ಬಸವರಾಜ ದೊಡ್ಮನಿ, ದೀಪಕ ದೊಡ್ಡೂರ, ಎಸ್.ಕೆ. ಭಾಗ್ವತ, ಎಚ್.ಯು. ಪಠಾಣ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts