More

    ಗುಡಿಸಲು ಕುಟುಂಬಗಳ ಪಟ್ಟಿ ಸಿದ್ಧಪಡಿಸಿ

    ಬೆಳಗಾವಿ: ಮಹಾನಗರ ಪಾಲಿಕೆ ವ್ಯಾಪ್ತಿಯ ಪ್ರದೇಶಗಳಲ್ಲಿ ಗುಡಿಸಲು ಕಟ್ಟಿಕೊಂಡು ಬದುಕು ಸಾಗಿಸುತ್ತಿರುವ ಕುಟುಂಬಗಳ ಪಟ್ಟಿ ಸಿದ್ಧಪಡಿಸಿ ಸಲ್ಲಿಸಬೇಕು ಎಂದು ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚನೆ ನೀಡಿದರು.

    ರುಕ್ಮಿಣಿ ನಗರಕ್ಕೆ ಬುಧವಾರ ಭೇಟಿ ನೀಡಿ ಸ್ಥಳೀಯ ನಿವಾಸಿಗಳ ಅಹವಾಲು ಆಲಿಸಿದ ಬಳಿಕ ಮಾತನಾಡಿದ ಅವರು, ಗುಡಿಸಲಿನಲ್ಲಿ ವಾಸಿಸುತ್ತಿರುವ ಎಲ್ಲರಿಗೂ
    ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆ ನಿರ್ಮಿಸಿಕೊಡಲು ಕ್ರಮ ಕೈಗೊಳ್ಳಲಾಗುವುದು ಎಂದು ಜನರಿಗೆ ಭರವಸೆ ನೀಡಿದರು.

    ಕೊಳೆಗೇರಿ ಅಭಿವೃದ್ಧಿ ಮಂಡಳಿ ಅಧಿಕಾರಿಗಳು ಕೂಡಲೇ ಗುಡಿಸಲುಗಳಲ್ಲಿ ವಾಸಿಸುತ್ತಿರುವ 400 ಕುಟುಂಬಗಳ ಪಟ್ಟಿ ಸಿದ್ಧಪಡಿಸಿ ಪ್ರಧಾನ ಮಂತ್ರಿ ಆವಾಸ್ ಯೋಜನೆಗೆ ಮತ್ತು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಬೇಕು. ಈ ವಿಚಾರವಾಗಿ ಕೂಡಲೇ ಸಭೆ ನಡೆಸಿ ಮಾಹಿತಿ ಒದಗಿಸಬೇಕು. ಈ ವಿಷಯದಲ್ಲಿ ನಿರ್ಲಕ್ಷೃ ವಹಿಸಿದರೆ ಕ್ರಮ ಕೈಗೊಳ್ಳಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು.

    ರುಕ್ಮಿಣಿ ನಗರಕ್ಕೆ ಸಮಯಕ್ಕೆ ಸರಿಯಾಗಿ ಕುಡಿಯುವ ನೀರು ಪೂರೈಸಬೇಕು. ಬೇಸಿಗೆ ಕಾಲದಲ್ಲಿ ಸಮಸ್ಯೆ ಉಂಟಾಗದಂತೆ ಮುಂಜಾಗ್ರತಾ ಕ್ರಮ ಕೈಗೊಳ್ಳಬೇಕು. ಸ್ಥಳೀಯ ನಿವಾಸಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಸಕಾಲದಲ್ಲಿಯೇ ನಿವಾರಣೆ ಮಾಡಬೇಕು. ಅಲ್ಲದೆ, ಹಕ್ಕುಪತ್ರ ವಿತರಣೆ ಮತ್ತು ನಿವೇಶನ ಹಂಚಿಕೆ ಕುರಿತು ಸಂಬಂಧಿಸಿದ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ನಡೆಸಬೇಕು. ಮಹಾನಗರ ಪಾಲಿಕೆಯವರು ಕೂಡಲೇ ಅಭಿವೃದ್ಧಿ ಕಾಮಗಾರಿ ಕೈಗೊಳ್ಳಬೇಕು ಎಂದು ಡಿಸಿ ಹಿರೇಮಠ ಸೂಚಿಸಿದರು.

    ಕೊಳೆಗೇರಿ ಅಭಿವೃದ್ಧಿ ಮಂಡಳಿಯ ಕಾರ್ಯನಿರ್ವಾಹಕ ಇಂಜಿನಿಯರ್ ಎಂ.ಎಲ್. ಲಮಾಣಿ ಮಾತನಾಡಿ, ಮಹಾನಗರ ಪಾಲಿಕೆ ವತಿಯಿಂದ ಜಾಗ ನೀಡಿದರೆ ಆದಷ್ಟು ಬೇಗ ಪ್ರಧಾನ ಮಂತ್ರಿ ಆವಾಸ್ ಯೋಜನೆಯಡಿ ಮನೆಗಳನ್ನು ನಿರ್ಮಿಸಿ ಕೊಡಲಾಗುವುದು. ಈಗಾಗಲೇ ಈ ಪ್ರದೇಶಕ್ಕೆ ಮೂಲ ಸೌಕರ್ಯ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದರು. ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ, ಕಾರ್ಯನಿರ್ವಾಹಕ ಇಂಜಿನಿಯರ್ ಕೆ.ಶಂಭುಲಿಂಗಪ್ಪ ಇತರರಿದ್ದರು.

    ರೇಲ್ವೆ ಗೇಟ್ ಕಾಮಗಾರಿ ಪೂರ್ಣಗೊಳಿಸಿ

    ನಗರದ 3ನೇ ರೈಲ್ವೆ ಗೇಟ್ ಕಾಮಗಾರಿ ನಿಧಾನವಾಗಿ ಸಾಗಿದ್ದು, ಸ್ಥಳೀಯ ನಿವಾಸಿಗಳು, ವಾಹನ ಸವಾರರು ಸಮಸ್ಯೆ ಎದುರಿಸುತ್ತಿದ್ದಾರೆ. ಹಾಗಾಗಿ ನಿಗದಿತ ಸಮಯದಲ್ಲಿಯೇ ಕೆಲಸ ಪೂರ್ಣಗೊಳಿಸಬೇಕು. ಕಾಮಗಾರಿ ಗುಣಮಟ್ಟದ ಕುರಿತು ಅಧಿಕಾರಿಗಳು ಪರಿಶೀಲನೆ ನಡೆಸಬೇಕು. ಅರ್ಧದಲ್ಲಿಯೇ ಉಳಿದಿರುವ ರಸ್ತೆ ಅಗಲೀಕರಣ ಕಾಮಗಾರಿಯನ್ನೂ ಪೂರ್ಣಗೊಳಿಸಬೇಕು ಎಂದು ಸ್ಥಳದಲ್ಲಿದ್ದ ರೈಲ್ವೆ, ಪಾಲಿಕೆ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಎಂ.ಜಿ. ಹಿರೇಮಠ ಸೂಚನೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts