More

    ಗ್ರಾಮೀಣದಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಶೀಘ್ರ ಮುಂಬಡ್ತಿ

    ಧಾರವಾಡ: ಆರೋಗ್ಯ ಸೇವೆಯಲ್ಲಿ ಗುಣಾತ್ಮಕವಾಗಿ ಅಮೂಲಾಗ್ರ ಬದಲಾವಣೆಗೆ ಚಿಂತಸಲಾಗಿದೆ. ಉತ್ತರ ಕರ್ನಾಟಕದ ಡಿಮ್ಹಾನ್ಸ್ ಆಸ್ಪತ್ರೆಯನ್ನು ಬೆಂಗಳೂರಿನ ನಿಮ್ಹಾನ್ಸ್ ಆಸ್ಪತ್ರೆಯೊಂದಿಗೆ ಸಂಯೋಜಿಸಿ ಮೇಲ್ದರ್ಜೆಗೇರಿಸಲು ಕ್ರಮ ಜರುಗಿಸಲಾಗುವುದು. ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಶೀಘ್ರ ಮುಂಬಡ್ತಿ ಹಾಗೂ ವೇತನ ಹೆಚ್ಚಳಕ್ಕೆ ಚಿಂತಿಸಲಾಗುತ್ತಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ ಹೇಳಿದರು.

    ನಗರದ ಧಾರವಾಡ ಮಾನಸಿಕ ಆರೋಗ್ಯ ಮತ್ತು ನರವಿಜ್ಞಾನ ಸಂಸ್ಥೆಯ (ಡಿಮ್ಹಾನ್ಸ್) ಆವರಣದಲ್ಲಿ ಶನಿವಾರ ಬೇಂದ್ರೆ ಬ್ಲಾಕ್ ನೂತನ ಕಟ್ಟಡ ಹಾಗೂ ಪೂರ್ಣ ಶರೀರದ ಸಿಟಿ ಸ್ಕ್ಯಾ ನ್ ಯಂತ್ರ, ಗಣಕೀಕೃತ ಗ್ರಂಥಾಲಯ ಉದ್ಘಾಟಿಸಿ ಅವರು ಮಾತನಾಡಿದರು.

    ಡಿಮ್ಹಾನ್ಸ್ ಉನ್ನತೀಕರಣದಿಂದ ಉತ್ತರ ಕರ್ನಾಟಕ ಹಾಗೂ ಹೈದ್ರಾಬಾದ್ ಕರ್ನಾಟಕದ ಜಿಲ್ಲೆಗಳ ಜನರಿಗೆ ಉತ್ತಮ ಮಾನಸಿಕ ಆರೋಗ್ಯ ಚಿಕಿತ್ಸೆ ಲಭ್ಯವಾಗಲಿದೆ. ಆರೋಗ್ಯವಂತ ಸಮುದಾಯವಿದ್ದಲ್ಲಿ ಮಾತ್ರ ಶಿಕ್ಷಣ, ಸಂಸ್ಕೃತಿ ಹಾಗೂ ಆರ್ಥಿಕ ಅಭಿವೃದ್ಧಿ ಸಾಧ್ಯವಾಗುತ್ತದೆ ಎಂದರು.

    ನೂತನವಾಗಿ ಆಯ್ಕೆಯಾಗುವ ವೈದ್ಯರು ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸಲು ಹಿಂಜರಿಕೆ ಪಡುತ್ತಾರೆ. ಆದ್ದರಿಂದ ಗ್ರಾಮೀಣ ಭಾಗದಲ್ಲಿ ಸೇವೆ ಸಲ್ಲಿಸುವ ವೈದ್ಯರಿಗೆ ಶೀಘ್ರ ಮುಂಬಡ್ತಿ ಹಾಗೂ ಅವರ ವೇತನದಲ್ಲಿ ಹೆಚ್ಚಳ ಮಾಡಲು ಚಿಂತಿಸಲಾಗುತ್ತಿದೆ ಎಂದರು.

    ಆರೋಗ್ಯ ಇಲಾಖೆಯಲ್ಲಿ ವೈದ್ಯರ, ಅರೆ ವೈದ್ಯಕೀಯ, ಆರೋಗ್ಯ ಕಾರ್ಯಕರ್ತೆಯರು, ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯ ಹೆಚ್ಚಳಕ್ಕೆ ಸರ್ಕಾರದ ಮಟ್ಟದಲ್ಲಿ ಕ್ರಮ ಕೈಗೊಳ್ಳಲಾಗುವುದು. ಸರ್ಕಾರಿ ಆಸ್ಪತ್ರೆಗಳ ಬಗ್ಗೆ ಸಾರ್ವಜನಿಕರಲ್ಲಿ ಉತ್ತಮ ಅಭಿಪ್ರಾಯ ಮೂಡಿಸಿ ವಿಶ್ವಾಸ ಗಳಿಸುವ ನಿಟ್ಟಿನಲ್ಲಿ ಕಾರ್ಯಕ್ರಮ ರೂಪಿಸಲಾಗುವುದು ಎಂದರು.

    ಕೇಂದ್ರ ಸಂಸದೀಯ ವ್ಯವಹಾರಗಳ, ಕಲ್ಲಿದ್ದಲು ಮತ್ತು ಗಣಿ ಸಚಿವ ಪ್ರಲ್ಹಾದ ಜೋಶಿ ಮಾತನಾಡಿ, ಡಿಮ್ಹಾನ್ಸ್ ಸಂಸ್ಥೆಯು ಕೇಂದ್ರ ಸರ್ಕಾರದಿಂದ ರಾಷ್ಟ್ರೀಯ ಮಾನಸಿಕ ಆರೋಗ್ಯ ಕಾರ್ಯಕ್ರಮದಡಿ ಬಿಡುಗಡೆಯಾದ ಅನುದಾನವನ್ನು ಕಡಿಮೆ ಅವಧಿಯಲ್ಲಿ ಪೂರ್ಣವಾಗಿ ಬಳಸಿಕೊಳ್ಳುವ ಮೂಲಕ ರಾಷ್ಟ್ರದಲ್ಲಿಯೇ ಪ್ರಥಮವಾಗಿದೆ. ಉತ್ತಮ ಕಟ್ಟಡ, ಮೂಲ ಸೌಕರ್ಯ ಹಾಗೂ ಆರೋಗ್ಯ ಸೌಲಭ್ಯಗಳನ್ನು ಕಲ್ಪಿಸುವುದರೊಂದಿಗೆ ಅನುದಾನವನ್ನು ಸಾರ್ಥಕವಾಗಿ ಬಳಸಿಕೊಂಡಿದೆ ಎಂದರು.

    ಡಿಮ್ಹಾನ್ಸ್ ನಿರ್ದೇಶಕ ಪ್ರೊ. ಮಹೇಶ ದೇಸಾಯಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಶಾಸಕ ಅಮೃತ ದೇಸಾಯಿ ಅಧ್ಯಕ್ಷತೆ ವಹಿಸಿದ್ದರು. ವಿಧಾನ ಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಕರ್ನಾಟಕ ಬಾಲವಿಕಾಸ ಅಕಾಡೆಮಿಯ ಅಧ್ಯಕ್ಷ ಈರಣ್ಣ ಜಡಿ, ಡಿಮ್ಹಾನ್ಸ್ ಪ್ರಭಾರ ವೈದ್ಯಕೀಯ ಅಧೀಕ್ಷಕ ಡಾ. ಶ್ರೀನಿವಾಸ ಕೋಸಗಿ ವೇದಿಕೆಯಲ್ಲಿದ್ದರು.

    ಜಿಲ್ಲಾಧಿಕಾರಿ ನಿತೇಶ ಪಾಟೀಲ, ಡಿಎಚ್​ಒ ಡಾ. ಯಶವಂತ ಮದೀನಕರ, ಜಿಲ್ಲಾ ಶಸ್ತ್ರಚಿಕಿತ್ಸಕ ಡಾ. ಶಿವಕುಮಾರ ಮಾನಕರ, ಡಿಮ್ಹಾನ್ಸ್ ಹಾಗೂ ಜಿಲ್ಲಾಸ್ಪತ್ರೆ ಮತ್ತು ಆರೋಗ್ಯ ಇಲಾಖೆಯ ವೈದ್ಯರು, ಪ್ರಾಧ್ಯಾಪಕರು, ಸಿಬ್ಬಂದಿ ಮತ್ತು ವೈದ್ಯಕೀಯ ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts