More

    ಚರ್ಮ ಗಂಟುರೋಗ ಹರಡದಂತೆ ಎಚ್ಚರಿಕೆ ವಹಿಸಿ

    ಮೈಸೂರು: ತಾಲೂಕಿನಲ್ಲಿ ಜಾನುವಾರಗಳಿಗೆ ಚರ್ಮ ಗಂಟುರೋಗ ಹರಡದಂತೆ ಅಗತ್ಯ ಮುನ್ನೆಚ್ಚರಿಕೆ ವಹಿಸಬೇಕು ಎಂದು ಮೈಸೂರು ತಾಲೂಕು ಪಂಚಾಯಿತಿ ಆಡಳಿತಾಧಿಕಾರಿಯೂ ಆದ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪ್ರೇಮ್‌ಕುಮಾರ್ ಸೂಚಿಸಿದರು.

    ಮೈಸೂರು ತಾಲೂಕು ಕಚೇರಿಯ ಸಭಾಂಗಣದಲ್ಲಿ ಶನಿವಾರ ತಾಲೂಕು ಮಟ್ಟದ ಪ್ರಗತಿ ಪರಿಶೀಲನಾ ಸಭೆ ನಡೆಸಿದರು.

    ಜಾನುವಾರಗಳ ಸಂರಕ್ಷಣೆಗೆ ಗಮನ ನೀಡಬೇಕು. ಈಗ ಎಲ್ಲೆಡೆ ಚರ್ಮ ಗಂಟುರೋಗ ಹರಡುತ್ತಿದೆ. ಆದ್ದರಿಂದ ಇದನ್ನು ತಡೆಯಲು ತ್ವರಿತವಾಗಿ ಕ್ರಮ ವಹಿಸಬೇಕು ಎಂದರು.
    ಇದಕ್ಕೆ ಪ್ರತಿಕ್ರಿಯಿಸಿದ ಪಶುಸಂಗೋಪನಾ ಇಲಾಖೆಯ ತಾಲೂಕು ಅಧಿಕಾರಿ, ಗಂಟು ರೋಗ ತಾಲೂಕಿನಲ್ಲಿ ನಿಯಂತ್ರಣದಲ್ಲಿ ಇದೆ. ಜಿಲ್ಲೆಯಲ್ಲಿ ಮೊದಲು ಕೆ.ಆರ್.ನಗರ ತಾಲೂಕಿನಲ್ಲಿ ಹರಡಿದೆ. ಇದೀಗ ಮೈಸೂರು ತಾಲೂಕಿನಲ್ಲೂ ಕಾಣಿಸಿಕೊಂಡಿದೆ. ರಾಸುಗಳಿಗೆ ಅಗತ್ಯ ಲಸಿಕೆ ಹಾಕಲಾಗುತ್ತಿದೆ. ಇದಕ್ಕಾಗಿ ಮತ್ತು ಆರೋಗ್ಯ ತಪಾಸಣೆಗಾಗಿ ಶಿಬಿರವನ್ನೂ ಆಯೋಜಿಸಲಾಗುತ್ತಿದೆ. ಇದರೊಂದಿಗೆ ಜಾನುವಾರುಗಳ ಜಾತ್ರೆಯನ್ನೂ ನಿರ್ಬಂಧಿಸಲಾಗಿದೆ ಎಂದು ತಿಳಿಸಿದರು.

    ಕಾನೂನು ಪದವಿ ಪಡೆದಿರುವ ವಿದ್ಯಾರ್ಥಿಗಳಿಗೆ ಕಾನೂನು ತರಬೇತಿ ಪಡೆಯಲು ಶಿಷ್ಯವೇತನ ನೀಡಲಾಗುತ್ತಿದೆ. ಆದರೆ, ಇವರು ಸರ್ಕಾರಿ ವಕೀಲರ ಬಳಿ ತರಬೇತಿಗೆ ಏಕೆ ಹೋಗುತ್ತಿಲ್ಲ? ಎಂದು ಪ್ರಶ್ನಿಸಿದರು.

    ಇವರೆಲ್ಲ ಹಿರಿಯ ವಕೀಲರಲ್ಲಿ ಮಾತ್ರ ತರಬೇತಿಗೆ ಸೇರಿಕೊಳ್ಳುತ್ತಿದ್ದಾರೆ. ಈ ಕುರಿತು ದೂರುಗಳು ಬಂದಿವೆ. ಸರ್ಕಾರಿ ವಕೀಲರ ಕಾರ್ಯವೈಖರಿ ತಿಳಿದುಕೊಳ್ಳಲು ಇವರಲ್ಲೂ ತರಬೇತಿ ಪಡೆದುಕೊಳ್ಳಬೇಕು. ಆದ್ದರಿಂದ ಸರ್ಕಾರಿ ವಕೀಲರಲ್ಲಿ ತರಬೇತಿ ಪಡೆಯಲು ವ್ಯವಸ್ಥೆ ಮಾಡಬೇಕು ಎಂದು ಅಧಿಕಾರಿಗಳಿಗೆ ಸಲಹೆ ನೀಡಿದರು.
    ಹಾಸ್ಟೆಲ್ ವಿದ್ಯಾರ್ಥಿಗಳಿಗೆ ಪಠ್ಯದೊಂದಿಗೆ ಪಠ್ಯೇತರ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಳ್ಳುವಂತಹ ಕಾರ್ಯಕ್ರಮ ರೂಪಿಸಬೇಕು ಎಂದು ಪ್ರೇಮ್‌ಕುಮಾರ್ ನಿರ್ದೇಶಿಸಿದರು.

    ಹಿಂದುಳಿದ ವರ್ಗಗಳ ಇಲಾಖೆ, ಸಮಾಜ ಕಲ್ಯಾಣ ಇಲಾಖೆ ಮತ್ತು ಅಲ್ಪ ಸಂಖ್ಯಾತರ ಕಲ್ಯಾಣ ಇಲಾಖೆ ವ್ಯಾಪ್ತಿಯಲ್ಲಿ ತಾಲೂಕಿನಲ್ಲಿ ನಡೆಯುತ್ತಿರುವ ಹಾಸ್ಟೆಲ್‌ಗಳಲ್ಲಿ ಹೆಣ್ಣು ಮಕ್ಕಳಿಗೆ ಈ ಹಿಂದೆ ಕರಾಟೆ ತರಬೇತಿ ನೀಡಲಾಗುತ್ತಿತ್ತು. ಈಗ ಅದರ ಸ್ಥಿತಿ ಗತಿ ಏನಾಗಿದೆ ಎಂಬುದರ ಬಗ್ಗೆ ಮಾಹಿತಿ ಇಲ್ಲ. ಸಾಂಸ್ಕೃತಿಕ ಕಾರ್ಯಕ್ರಮ ಸಹ ಆಯೋಜಿಸುವ ಮೂಲಕ ಮಕ್ಕಳ ಪ್ರತಿಭೆಗೆ ಉತ್ತೇಜನ ನೀಡಬೇಕು. ಇದರಿಂದ ಮಕ್ಕಳಿಗೆ ಹಾಸ್ಟೆಲ್‌ಗಳಲ್ಲಿ ಉತ್ತಮ ವಾತಾವರಣ ನಿರ್ಮಾಣವಾಗಲಿದೆ ಎಂದರು.
    ಆರೋಗ್ಯ ಇಲಾಖೆಗೆ ಸಂಬಂಧಿಸಿದಂತೆ ತಾಲೂಕು ವ್ಯಾಪ್ತಿಯಲ್ಲಿ ದುರಸ್ತಿಗೊಳ್ಳುತ್ತಿರುವ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಕುರಿತು ಆಡಳಿತಾಧಿಕಾರಿ ಪ್ರೇಮ್ ಕುಮಾರ್ ಮಾಹಿತಿ ಕೇಳಿದರು.


    ಆಗ ತಾಲೂಕು ಆರೋಗ್ಯಾಧಿಕಾರಿ, ಈ ಬಗ್ಗೆ ಮೈಸೂರು ನಿರ್ಮಿತಿ ಕೇಂದ್ರದಿಂದ ಯಾವುದೇ ಮಾಹಿತಿ ಸಿಕ್ಕಿಲ್ಲ. ಜತೆಗೆ, ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ನಮ್ಮೊಂದಿಗೆ ಪತ್ರ ವ್ಯವಹಾರ ನಡೆಸಿಲ್ಲ ಎಂದು ದೂರಿದರು. ಇದಕ್ಕೆ ಪ್ರತಿಕ್ರಿಯಿಸಿದ ಆಡಳಿತಾಕಾರಿ ಪ್ರೇಮ್‌ಕುಮಾರ್, ವಿವಿಧ ಇಲಾಖೆಯ ಅಕಾರಿಗಳೊಂದಿಗೆ ಸಮನ್ವಯ ಸಭೆ ನಡೆಸುವ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.


    ತಾಪಂ ಕಾರ್ಯನಿರ್ವಾಹಣಾಧಿಕಾರಿ ಎಚ್.ಡಿ. ಗಿರೀಶ್, ಸಹಾಯಕ ಲೆಕ್ಕಾಧಿಕಾರಿ ಪ್ರೇಮಾ ಸೇರಿದಂತೆ ತಾಲೂಕುಮಟ್ಟದ ಅಧಿಕಾರಿಗಳು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts