More

    ಚಿಕ್ಕಬಳ್ಳಾಪುರದಲ್ಲಿ ಉನ್ನತ ಶಿಕ್ಷಣ ಹಾಗೂ ಆರೋಗ್ಯ ಸೇವೆಯ ಕಾರಿಡಾರ್ ಅಭಿವೃದ್ಧಿ, ಸಚಿವ ಡಾ.ಸುಧಾಕರ್ ಭರವಸೆ

    ಚಿಕ್ಕಬಳ್ಳಾಪುರ: ಜಿಲ್ಲೆಯನ್ನು ಉನ್ನತ ಶಿಕ್ಷಣ ಹಾಗೂ ಆರೋಗ್ಯ ಸೇವೆಯ ಕಾರಿಡಾರ್ ಆಗಿ ಅಭಿವೃದ್ಧಿಪಡಿಸುವ ಜತೆಗೆ ಮುಂದಿನ ದಿನಗಳಲ್ಲಿ ಆಯುಷ್ ಆಸ್ಪತ್ರೆ ಮತ್ತು ಕಾಲೇಜು ಆರಂಭಕ್ಕೂ ಚಾಲನೆ ನೀಡುವುದಾಗಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಾ.ಕೆ.ಸುಧಾಕರ್ ಭರವಸೆಯಿತ್ತರು.

    ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಬುಧವಾರ ಕಲಿಕಾ ನಿರ್ವಹಣಾ ವ್ಯವಸ್ಥೆಯಡಿ ಪ್ರಥಮ ಪಿಯು ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್, ಪಿಸಿ ವಿತರಿಸಿ ಮಾತನಾಡಿದರು. ಜಿಲ್ಲೆಯ ಬಹುದಿನಗಳ ಕನಸಾಗಿದ್ದ ಮೆಡಿಕಲ್ ಕಾಲೇಜು ಆರಂಭಕ್ಕೆ ಸಿದ್ಧತೆಗಳು ನಡೆದಿವೆ. ಈಗಾಗಲೇ ಕ್ಯಾಂಪಸ್ ನಿರ್ಮಾಣ ಭರದಿಂದ ಸಾಗಿದ್ದು, ಮುಂದಿನ ಶೈಕ್ಷಣಿಕ ವರ್ಷದ ಜೂನ್ ಅಥವಾ ಸೆಪ್ಟೆಂಬರ್ ವೇಳೆಗೆ ಉದ್ಘಾಟಿಸಲಾಗುವುದು ಎಂದರು.

    ಇದೇ ಕ್ಯಾಂಪಸ್‌ನಲ್ಲಿ ನರ್ಸಿಂಗ್, ಪ್ಯಾರಾ ಮೆಡಿಕಲ್, ಫಾರ್ಮಸಿ ಕೋರ್ಸ್, ಇಂಜಿನಿಯರಿಂಗ್, ಪಾಲಿಟೆಕ್ನಿಕ್ ಸಹಿತ ಉನ್ನತ ಶಿಕ್ಷಣದ ಎಲ್ಲ ಕೋರ್ಸ್‌ಗಳ ಆರಂಭಕ್ಕೂ ಕ್ರಮ ಕೈಗೊಳ್ಳುವುದಾಗಿ ಪ್ರಕಟಿಸಿದ ಸುಧಾಕರ್, ಶಿಕ್ಷಣಕ್ಕೆ ದಾಖಲಾಗುವ ಶೇ.75 ಮಂದಿಯಾದರೂ ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವಂತಾಗಲು ಅಗತ್ಯ ಸವಲತ್ತುಗಳನ್ನು ಒದಗಿಸಿ ಜಿಲ್ಲೆಯನ್ನು ಮಾದರಿ ಶಿಕ್ಷಣ ಮತ್ತು ಆರೋಗ್ಯ ಕ್ಷೇತ್ರದ ಕಾರಿಡಾರ್ ಆಗಿ ರೂಪಿಸುವುದಾಗಿ ಅಭಯವಿತ್ತರು.

    ಮಾವು ಬೆಳೆ ಮತ್ತು ಮಾರುಕಟ್ಟೆ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ವಿ.ನಾರಾಯಣಸ್ವಾಮಿ, ನಗರಸಭೆ ಅಧ್ಯಕ್ಷ ಆನಂದರೆಡ್ಡಿ, ಜಿಲ್ಲಾಧಿಕಾರಿ ಆರ್.ಲತಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮಿಥುನ್‌ಕುಮಾರ್ ಹಾಗೂ ಇತರರಿದ್ದರು.

    ಕಾಲೇಜುಗಳ ಅಭಿವೃದ್ಧಿಗೆ ಕ್ರಮ: ನಗರದ ಕಾಲೇಜುಗಳ ಅಭಿವೃದ್ಧಿಗೆ 6.67 ಕೋಟಿ ರೂ.ಅನುದಾನ ನೀಡಲಾಗಿದೆ. ಪ್ರಯೋಗಾಲಯ, ಹೆಚ್ಚುವರಿ ಕೊಠಡಿಗಳು, ಶೌಚಗೃಹ ನಿರ್ಮಾಣಕ್ಕೆ ಹಣ ನೀಡಲಾಗಿದೆ. ಹಾಗೆಯೇ ಜಿಲ್ಲೆಯ ಪ್ರಥಮ ಮಹಿಳಾ ಕಾಲೇಜು ನಿರ್ಮಾಣಕ್ಕೂ ಡಿಎಂಎಫ್ ನಿಧಿಯಲ್ಲಿ ಅನುದಾನ ನೀಡುವಂತೆ ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಈಗಾಗಲೇ ಆರಂಭಗೊಂಡಿರುವ ಮಹಿಳಾ ಕಾಲೇಜು ಕಟ್ಟಡ ಕಾಮಗಾರಿ ಇದೇ ವರ್ಷ ಪೂರ್ಣಗೊಂಡು ಉದ್ಘಾಟನೆ ಆಗಲಿದೆ ಎಂದು ಸಚಿವ ಸುಧಾಕರ್ ವಿಶ್ವಾಸ ವ್ಯಕ್ತಪಡಿಸಿದರು.

    4,200 ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್: ಕರೊನಾ ಹಿನ್ನೆಲೆಯಲ್ಲಿ ಕಳೆದ ಒಂದೂವರೆ ವರ್ಷದಿಂದ ಶೈಕ್ಷಣಿಕ ಕ್ಷೇತ್ರಕ್ಕೆ ಹಿನ್ನಡೆಯಾಗಿದೆ. ಇದನ್ನು ಗಮನದಲ್ಲಿರಿಸಿಕೊಂಡು ಗುಣಮಟ್ಟದ ಶಿಕ್ಷಣ ಒದಗಿಸುವ ನಿಟ್ಟಿನಲ್ಲಿ ಸರ್ಕಾರ, ಪ್ರಥಮ ಪಿಯುಸಿ ವಿದ್ಯಾರ್ಥಿಗಳಿಗೆ ಟ್ಯಾಬ್ಲೆಟ್ ಪಿಸಿಗಳನ್ನು ನೀಡುತ್ತಿದೆ. ಜಿಲ್ಲೆಯಲ್ಲಿ 4,200 ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

    ಆದ್ಯತೆ ಮೇರೆಗೆ ಲಸಿಕೆ: ಅಂತಾರಾಷ್ಟ್ರೀಯ ಯೋಗ ದಿನದಂದು ನಡೆದ ಲಸಿಕಾ ಮೇಳದಲ್ಲಿ ಜಿಲ್ಲೆಯಲ್ಲಿ ನಿಗದಿತ ಗುರಿಗಿಂತಲೂ 40 ಸಾವಿರಕ್ಕೂ ಹೆಚ್ಚು ಮಂದಿಗೆ ಲಸಿಕೆ ನೀಡಿರುವುದಕ್ಕೆ ಜಿಲ್ಲಾಧಿಕಾರಿ, ಡಿಎಚ್‌ಒ, ನರ್ಸ್‌ಗಳು ಹಾಗೂ ಇತರ ಸಿಬ್ಬಂದಿಯನ್ನು ಅಭಿನಂದಿಸಿದ ಸುಧಾಕರ್, ಮುಂದಿನ ದಿನಗಳಲ್ಲಿ ಜಿಲ್ಲೆಯ ಎಲ್ಲ ಜನರಿಗೆ ಆದ್ಯತೆ ಮೇರೆಗೆ ಲಸಿಕೆ ನೀಡಲು ಕ್ರಮ ಕೈಗೊಳ್ಳಲು ಜಿಲ್ಲಾಡಳಿತಕ್ಕೆ ಸೂಚನೆ ನೀಡಿದರು.

    250 ಮಾದರಿ ಪಿಎಚ್‌ಸಿ ನಿರ್ಮಾಣ: ರಾಜ್ಯದ ಆರೋಗ್ಯ ಕ್ಷೇತ್ರದ ಸುಧಾರಣೆಗೆ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಲಾಗಿದೆ. ಕೆಳ ಹಂತದ ಚಿಕಿತ್ಸಾ ವ್ಯವಸ್ಥೆ ಸುಧಾರಿಸುವ ನಿಟ್ಟಿನಲ್ಲಿ 250 ಮಾದರಿ ಪ್ರಾಥಮಿಕ ಚಿಕಿತ್ಸಾ ಕೇಂದ್ರಗಳನ್ನು ನಿರ್ಮಿಸಲಾಗುತ್ತಿದೆ. ಹೊಸದಾಗಿ ವೈದ್ಯರು, ನರ್ಸ್ ಮತ್ತು ಇತರ ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಸಚಿವರು ತಿಳಿಸಿದರು.

    ಕರೊನಾ ಸಂಭಾವ್ಯ ಮೂರನೇ ಅಲೆಯನ್ನು ಸಮರ್ಥವಾಗಿ ಎದುರಿಸಲು ಸಿದ್ಧತೆ ನಡೆಸಲಾಗಿದೆ. ಪ್ರತಿ ಜಿಲ್ಲೆಯಲ್ಲೂ 50ರಿಂದ 60 ಹಾಸಿಗೆಗಳನ್ನು ಮಕ್ಕಳ ಚಿಕಿತ್ಸೆಗೆ ಸಿದ್ಧಪಡಿಸಲಾಗುತ್ತಿದ್ದು ಇದರ ಜತೆಗೆ ವಿಶೇಷ ನಿಗಾ ಘಟಕಗಳನ್ನೂ ಸ್ಥಾಪಿಸಲಾಗುವುದು
    ಡಾ.ಕೆ.ಸುಧಾಕರ್, ಆರೋಗ್ಯ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts