More

    ಚಿಕ್ಕಬಳ್ಳಾಪುರ ಮಾದರಿ ಜಿಲ್ಲೆಯಾಗಿಸಲು ಶ್ರಮ

    ಚಿಕ್ಕಬಳ್ಳಾಪುರ: ಶಿಕ್ಷಣ, ಆರೋಗ್ಯ ಮತ್ತು ಉದ್ಯೋಗ ಸೃಷ್ಟಿಗೆ ಹೆಚ್ಚಿನ ಆದ್ಯತೆ ನೀಡುವ ಮೂಲಕ ಚಿಕ್ಕಬಳ್ಳಾಪುರವನ್ನು ಮಾದರಿ ಜಿಲ್ಲೆಯನ್ನಾಗಿ ರೂಪಿಸಲು ಪ್ರಾಮಾಣಿಕವಾಗಿ ಶ್ರಮಿಸುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ ಕೆ.ಸುಧಾಕರ್ ಭರವಸೆ ನೀಡಿದರು.

    ತಾಲೂಕಿನ ದೇವಸ್ಥಾನಹೊಸಹಳ್ಳಿಯಲ್ಲಿ ಶುಕ್ರವಾರ ಅಂಗನವಾಡಿ ಕೇಂದ್ರ ಉದ್ಘಾಟಿಸಿ ಮಾತನಾಡಿದ ಅವರು, ಅಂತರ್ಜಲಮಟ್ಟ ಕುಸಿತ ಮತ್ತು ಮಳೆಯ ಅಭಾವದಿಂದ ತತ್ತರಿಸಿರುವ ಜಿಲ್ಲೆಗೆ ಎಚ್.ಎನ್.ವ್ಯಾಲಿ ಮತ್ತು ಎತ್ತಿನಹೊಳೆಯ ಯೋಜನೆಗಳ ಮೂಲಕ ನೀರಾವರಿ ಸೌಲಭ್ಯ ಒದಗಿಸಲಾಗುತ್ತಿದೆ ಎಂದರು.

    600 ಕೋಟಿ ರೂ.ವೆಚ್ಚದಲ್ಲಿ ವೈದ್ಯಕೀಯ ಕಾಲೇಜು ನಿರ್ಮಾಣಕ್ಕೆ ಭೂಮಿಪೂಜೆ ನೆರವೇರಿದ್ದು ಕಾಮಗಾರಿ ಪ್ರಾರಂಭವಾಗಿದೆ. ಕೈಗಾರಿಕೆಗಳ ಸ್ಥಾಪನೆಗೆ ಭೂಮಿ ಗುರುತಿಸಿ, ವಲಯಗಳನ್ನು ಅಭಿವೃದ್ಧಿಪಡಿಸಲಾಗುವುದು ಎಂದು ಭರವಸೆಯಿತ್ತರು.

    ಜಿಪಂ ಅಧ್ಯಕ್ಷ ಎಂ.ಬಿ.ಚಿಕ್ಕನರಸಿಂಹಯ್ಯ, ಜಿಲ್ಲಾಧಿಕಾರಿ ಆರ್.ಲತಾ, ಸಿಇಒ ಬಿ.ಫೌಜೀಯಾ ತರನ್ನುಮ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಜಿ.ಕೆ.ಮಿಥುನ್‌ಕುಮಾರ್, ತಾಪಂ ಅಧ್ಯಕ್ಷ ರಾಮಸ್ವಾಮಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕ ನಾರಾಯಣಸ್ವಾಮಿ, ಸಣ್ಣ ನೀರಾವರಿ ಇಲಾಖೆ ಕಾರ್ಯಪಾಲಕ ಅಭಿಯಂತ ನರೇಂದ್ರಬಾಬು ಮತ್ತಿತರರು ಇದ್ದರು.

    ಅಭಿವೃದ್ಧಿ ಕಾಮಗಾರಿಗೆ ಚಾಲನೆ: ನಗರದ ಕಂದವಾರ ಕೆರೆಯಲ್ಲಿ 16 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ 2 ಪ್ರೋಟಿಂಗ್, ಚೀಗಟೇನಹಳ್ಳಿಯ ಮಾದರಿ ಸರ್ಕಾರಿ ಪ್ರೌಢಶಾಲೆಯಲ್ಲಿ ವಿವಿಧ ಅಭಿವೃದ್ಧಿ ಕೆಲಸ, ರೆಡ್ಡಿಗೊಲ್ಲವಾರಹಳ್ಳಿಯ ಉನ್ನತೀಕರಿಸಿದ ಮಾದರಿ ಅಂಗನವಾಡಿ ಕೇಂದ್ರ, ಅವುಲನಾಗೇನಹಳ್ಳಿಯಲ್ಲಿ ಘನತ್ಯಾಜ್ಯ ವಿಲೇವಾರಿ ಘಟಕ, ದೇವಸ್ಥಾನಹೊಸಹಳ್ಳಿ ಅಂಗನವಾಡಿ ಕೇಂದ್ರ ಉದ್ಘಾಟಿಸಲಾಯಿತು. ನಶಿಕುಂಟೆ ಹಾಗೂ ಹೊಸೂರಿನಲ್ಲಿ ಕಾಂಕ್ರಿಟ್ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಯಿತು.

    ಸಮಾಜಘಾತುಕ ಸಂಘಟನೆಗಳ ನಿಷೇಧ ತಪ್ಪಲ್ಲ: ಸಮಾಜಕ್ಕೆ ಹಾನಿ ಮಾಡುವ ಸಂಘಟನೆಗಳ ನಿಷೇಧ, ನಿರ್ಬಂಧ ತಪ್ಪಲ್ಲ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ ಕೆ.ಸುಧಾಕರ್ ಅಭಿಪ್ರಾಯಪಟ್ಟರು. ಬೆಂಗಳೂರಿನ ಡಿ.ಜೆ.ಹಳ್ಳಿ, ಕೆ.ಜಿ.ಹಳ್ಳಿ, ಕಾವರ್‌ಭೈರಸಂದ್ರ ಗಲಭೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸ್‌ಡಿಪಿಐ ಮತ್ತು ಪಿಎಫ್‌ಐ ಸಂಘಟನೆಗಳ ನಿಷೇಧಕ್ಕೆ ಸರ್ಕಾರ ಚಿಂತಿಸಿರುವ ವಿಚಾರದ ಬಗ್ಗೆ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದರು. ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಉದ್ದೇಶದಿಂದ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಬೇಕಾಗುತ್ತದೆ. ಯಾವುದೇ ಸಂಘಟನೆಯು ನಿರಂತರವಾಗಿ ಮಾರಕ ಚಟುವಟಿಕೆಯಲ್ಲಿ ತೊಡಗಿಸಿಕೊಂಡು ಅಶಾಂತಿಗೆ ಕಾರಣವಾಗಿದ್ದರೆ ನಿಷೇಧದ ತೀರ್ಮಾನ ಕೈಗೊಳ್ಳುವುದರಲ್ಲಿ ತಪ್ಪಿಲ್ಲ ಎಂದರು. ದೇಶದಲ್ಲಿ ಕರೊನಾ ಪ್ರಕರಣಗಳು ಹೆಚ್ಚಳವಾಗುತ್ತಿದ್ದರೂ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಸಾವಿನ ಪ್ರಮಾಣ ತುಂಬಾ ಕಡಿಮೆ ಇದೆ. ಬೇರೆ ಕಡೆ ಸರಾಸರಿ 3.6 ರಿಂದ 3.7 ಆಗಿದ್ದರೆ, ಇಲ್ಲಿ 1.7ರಿಂದ 1.8ರಷ್ಟಿದೆ, ನಿರ್ದಿಷ್ಟ ಲಸಿಕೆಗಾಗಿ ಡಿಸೆಂಬರ್‌ವರೆಗೂ ಕಾಯಬೇಕಾಗುವುದು ಅನಿವಾರ್ಯ ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts