More

    ಚೆಕ್‌ಪೋಸ್ಟ್ ತಪಾಸಣೆ ಬಿಗಿಗೊಳಿಸಲು ಜಿಲ್ಲಾಧಿಕಾರಿ ಸೂಚನೆ

    ಹಾಸನ: ಲೋಕಸಭಾ ಚುನಾವಣಾ ಪ್ರಯುಕ್ತ ಜಿಲ್ಲೆಯಾದ್ಯಂತ ಕಾರ್ಯಾಚರಿಸುತ್ತಿರುವ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣಾ ಕಾರ್ಯವನ್ನು ಕಟ್ಟುನಿಟ್ಟಾಗಿ ಮಾಡುವಂತೆ ಜಿಲ್ಲಾಧಿಕಾರಿ ಸಿ. ಸತ್ಯಭಾಮಾ ಅಧಿಕಾರಿಗಳಿಗೆ ಸೂಚಿಸಿದರು.
    ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಂಗಳವಾರ ಲೋಕಸಭಾ ಚುನಾವಣೆ ಸಂಬಂಧ ವಿಧಾನಸಭಾ ಕ್ಷೇತ್ರಗಳ ಹಂತದಲ್ಲಿ ಪೂರ್ವಭಾವಿ ಸಿದ್ಧತೆಗಳನ್ನು ಪರಿಶೀಲಿಸಿ ಮಾತನಾಡಿದರು, ಚೆಕ್‌ಪೋಸ್ಟ್‌ಗಳು ದಿನದ 24 ಗಂಟೆಯೂ ಕಾರ್ಯಾಚರಿಸಲಿದ್ದು, 3 ಪಾಳಿಯಲ್ಲಿ ಅಧಿಕಾರಿಗಳು, ಸಿಬ್ಬಂಧಿಗಳು ಕರ್ತವ್ಯ ನಿರ್ವಹಿಸಲಿದ್ದಾರೆ. ಜಿಲ್ಲೆಯಾದ್ಯಂತ ಒಂದೇ ತೆರನಾದ ಮಾದರಿಯ ಚೆಕ್‌ಪೋಸ್ಟ್‌ಗಳನ್ನು ಸ್ಥಾಪಿಸಲಾಗಿದ್ದು, ಅಗತ್ಯ ಸೌಲಭ್ಯಗಳನ್ನು ಒದಗಿಸಲಾಗಿದೆ. ಈ ನಿಟ್ಟಿನಲ್ಲಿ ಸಂಶಯಾಸ್ಪದ ಸಂಚಾರಗಳ ಮೇಲೆ ನಿಗಾ ವಹಿಸುವಂತೆ ಅವರು ಸೂಚಿಸಿದರು.
    ಸಾರ್ವಜನಿಕರು 50 ಸಾವಿರ ರೂಪಾಯಿವರೆಗೆ ದಾಖಲೆ ಇಲ್ಲದೆ ಸಾಗಿಸಬಹುದು. ಇದಕ್ಕಿಂತ ಹೆಚ್ಚಿನ ನಗದು ಹಣ ಸಾಗಿಸಲು ಕಡ್ಡಾಯವಾಗಿ ದಾಖಲೆ ಇರಬೇಕು. ಈ ನಿಟ್ಟಿನಲ್ಲಿ ಚೆಕ್‌ಪೋಸ್ಟ್ ತಪಾಸಣೆ ಚುರುಕುಗೊಳಿಸಲು ಅವರು ತಿಳಿಸಿದರು.
    ಆನೆ ಹಾವಳಿ ಇರುವ ಪ್ರದೇಶಗಳಲ್ಲಿ ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣಾ ತಂಡದೊಂದಿಗೆ ಅರಣ್ಯ ಇಲಾಖೆಯ ಸಿಬ್ಬಂದಿಗಳನ್ನು ಹೆಚ್ಚುವರಿಯಾಗಿ ನಿಯೋಜಿಸಲು ಸೂಚಿಸಲಾಗಿದೆ. ಚುನಾವಣೆ ಸಂದರ್ಭದಲ್ಲಿ ಆನೆ ಹಾವಳಿಯಿಂದ ಯಾವುದೇ ಮತದಾರರು ಮತದಾನ ಪ್ರಕ್ರಿಯೆಯಿಂದ ವಂಚಿತರಾಗದಂತೆ ಎಲ್ಲ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿಗಳು ಹೇಳಿದರು.
    ಪ್ರತಿ ವಿಧಾನಸಭಾ ಕ್ಷೇತ್ರದ ಸೂಕ್ಷ್ಮ ಮತ್ತು ಸಂಭಾವ್ಯ ಚುನಾವಣಾ ಅಕ್ರಮ ನಡೆಯುವ ಸಾಧ್ಯತೆಗಳಿರುವ ಮತಗಟ್ಟೆಗಳನ್ನು ಗುರುತಿಸಿ ನಿಗಾ ಇಡಬೇಕು. ಕುಡಿಯುವ ನೀರಿನ ಸಮಸ್ಯೆಗಳು ಎದುರಾದರೆ ತಕ್ಷಣವೇ ಆಯಾ ಗ್ರಾಮ ಪಂಚಾಯತ್, ನಗರ ಸ್ಥಳೀಯ ಸಂಸ್ಥೆಗಳು ಪರಿಹರಿಸಬೇಕು ಎಂದು ಸತ್ಯಭಾಮಾ ತಿಳಿಸಿದರು.
    ಾದರಿ ನೀತಿ ಸಂಹಿತೆ ಪಾಲನೆಗೆ ನೇಮಿಸಲಾಗಿರುವ ಎಲ್ಲ ಅಧಿಕಾರಿ, ಸಿಬ್ಬಂಧಿಗಳು ನಿರಂತರವಾಗಿ ಕಾರ್ಯಚರಿಸಬೇಕು. ಮಾದರಿ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ಪ್ರತಿ ತಾಲೂಕಿನಲ್ಲಿ ಕಂಟ್ರೋಲ್ ರೂಂ ತೆರೆಯಬೇಕು. ಸಿ ವಿಜಿಲ್ ಮೊಬೈಲ್ ಆ್ಯಪ್ ಮೂಲಕ ಸಾರ್ವಜನಿಕರು ಯಾವುದೇ ಚುನಾವಣಾ ಅಕ್ರಮಗಳ ಬಗ್ಗೆ ಅಥವಾ ನೀತಿ ಸಂಹಿತಿ ಉಲ್ಲಂಘನೆ ಸೇರಿದಂತೆ ದೂರುಗಳನ್ನು ಸಲ್ಲಿಸಿದರೆ, ಕಾಲಮಿತಿಯಲ್ಲಿ ಇತ್ಯರ್ಥಪಡಿಸಲಾಗುವುದು. ಸಾರ್ವಜನಿಕರಲ್ಲಿ ಇದರ ಬಗ್ಗೆ ಜಾಗೃತಿ ಮೂಡಿಸಲು ಜಿಲ್ಲಾಧಿಕಾರಿಗಳು ತಿಳಿಸಿದರು.
    ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಬಿ.ಆರ್. ಪೂರ್ಣಿಮಾ, ಅಪರ ಜಿಲ್ಲಾಧಿಕಾರಿ ಕೆ.ಟಿ. ಶಾಂತಲಾ, ವಿವಿಧ ವಿಧಾನಸಭಾ ಕ್ಷೇತ್ರಗಳ ಸಹಾಯಕ ಚುನಾವಣಾಧಿಕಾರಿಗಳು, ತಹಶೀಲ್ದಾರ್‌ಗಳು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts