More

    ಜಿಲ್ಲಾಸ್ಪತ್ರೆಗೆ ಅಗತ್ಯ ಸೌಲಭ್ಯ ಕಲ್ಪಿಸಲು ಕ್ರಮ

    ಕೋಲಾರ: ಜಿಲ್ಲೆಯ ಎಸ್‌ಎನ್‌ಆರ್ ಆಸ್ಪತ್ರೆಗೆ ಅವಶ್ಯಕ ಇರುವ ಎಲ್ಲ ಸೌಲಭ್ಯ ಕಲ್ಪಿಸಲಾಗುವುದು ಎಂದು ಶಾಸಕ ಕೆ.ಶ್ರೀನಿವಾಸಗೌಡ ಹೇಳಿದರು.

    ಜಿಲ್ಲಾಸ್ಪತ್ರೆಗೆ ಸೋಮವಾರ ಭೇಟಿ ನೀಡಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಕರೊನಾ ಸೋಂಕಿತರ ಹಾಗೂ ಹೊರ ರೋಗಿಗಳ ಯೋಗಕ್ಷೇಮ ವಿಚಾರಿಸಿದ ನಂತರ ಸುದ್ದಿಗಾರರ ಜತೆ ಮಾತನಾಡಿ, ಆಸ್ಪತ್ರೆಯಲ್ಲಿ ಉತ್ತಮ ಚಿಕಿತ್ಸೆ ಸಿಗುತ್ತಿರುವುದಕ್ಕೆ ಕರೊನಾ ಸೋಂಕಿತರು ಬಹುಬೇಗ ಚೇತರಿಕೆ ಕಾಣುತ್ತಿರುವುದೇ ಸಾಕ್ಷಿ. ಆಸ್ಪತ್ರೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಎಲ್ಲ ವೈದ್ಯರು ಹಾಗೂ ಆರೋಗ್ಯ ಇಲಾಖೆಯ ಸಿಬ್ಬಂದಿ ಸೇವೆ ಶ್ಲಾಘನೀಯ ಎಂದರು.

    ಆಸ್ಪತ್ರೆಯಲ್ಲಿ ಸಾಕಷ್ಟು ಸುಧಾರಣೆ ಆಗಬೇಕಿದೆ, ಕೆಲ ಕೊರತೆಗಳಿವೆ. ಇವುಗಳನ್ನು ನೀಗಿಸುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲಾಗುವುದು ಎಂದರು.

    ವಿಧಾನಪರಿಷತ್ ಸದಸ್ಯ ಇಂಚರ ಗೋವಿಂದರಾಜು ಮಾತನಾಡಿ, ಬೇರೆ ಜಿಲ್ಲೆಗಳಿಗೆ ಹೋಲಿಸಿದರೆ ಜಿಲ್ಲೆಯಲ್ಲಿ ಸೋಂಕಿತರ ಪ್ರಮಾಣ ಕಡಿಮೆಯಿದೆ ಎಂದರು. ಜಿಲ್ಲೆಯ ಜನಸಂಖ್ಯೆಗೆ ಹೋಲಿಸಿದರೆ ಜಿಲ್ಲಾಸ್ಪತ್ರೆ ಸಾಕಾಗುತ್ತಿಲ್ಲ, ಸಾಧ್ಯವಾದರೆ ಸರ್ಕಾರದೊಂದಿಗೆ ಚರ್ಚಿಸಿ ಆಸ್ಪತ್ರೆ ಮೇಲ್ದರ್ಜೆಗೆ ಏರಿಸಲು ಪ್ರಯತ್ನಿಸಲಾಗುವುದು ಎಂದರು.

    ಡಿಎಚ್‌ಒ ಡಾ.ಎಸ್.ವಿಜಯಕುಮಾರ್ ಮಾತನಾಡಿ, ಕರೊನಾಗೆ ತುತ್ತಾಗಿ ಜಿಲ್ಲಾಸ್ಪತ್ರೆಗೆ ದಾಖಲಾದ ಸೋಂಕಿತರಿಗೆ ಉತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

    ಜಿಲ್ಲಾಸ್ಪತ್ರೆಯಲ್ಲಿ 300 ಹಾಸಿಗೆ, ಸಂಭ್ರಮ್ ಆಸ್ಪತ್ರೆಯಲ್ಲಿ 500 ಹಾಸಿಗೆ ಹಾಗೂ ಮೆಡಿಕಲ್ ಕಾಲೇಜಿನಲ್ಲಿ ಹಾಸಿಗೆ ಮೀಸಲಿಡಲಾಗಿದೆ. ಜಿಲ್ಲೆಯ ಪ್ರತಿ ತಾಲೂಕು ಆಸ್ಪತ್ರೆಗಳಲ್ಲಿ 50 ಹಾಸಿಗೆ ಕಾಯ್ದಿರಿಸಿ ಅಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ. ಜಿಲ್ಲೆಯ ಕೆಲ ಮುರಾರ್ಜಿ ದೇಸಾಯಿ ವಸತಿ ಶಾಲೆಗಳನ್ನು ಕೋವಿಡ್ ಕೇರ್ ಸೆಂಟರ್‌ಗಳನ್ನಾಗಿ ಪರಿವರ್ತಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದರು.

    ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಎಸ್.ಜಿ.ನಾರಾಯಣಸ್ವಾಮಿ ಮಾತನಾಡಿ, ಶವಾಗಾರಕ್ಕೆ ಸುಸಜ್ಜಿತ ಶೈತ್ಯಾಗಾರದ ವ್ಯವಸ್ಥೆ ಮತ್ತು ಆಧುನಿಕ ಸೌಲಭ್ಯ ಹೊಂದಿರುವ ಬಟ್ಟೆತೊಳೆಯುವ ಯಂತ್ರ ಅವಶ್ಯಕವಾಗಿದ್ದು, ತಮ್ಮ ನಿಧಿಯಿಂದ ನೀಡುವಂತೆ ಶಾಸಕರಿಗೆ ಮನವಿ ಮಾಡಿದರು.
    ನಗರಸಭೆ ಸದ್ಯಸರಾದ ರಾಕೇಶ್, ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ. ನಾರಾಯಣಸ್ವಾಮಿ ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts