More

    ಜ್ವರದ ನಡುವೆಯೇ ಮಗನ ಮದುವೆ

    ರಾಣೆಬೆನ್ನೂರ: ಕರೊನಾ ಸೋಂಕಿನಿಂದ ದಾವಣಗೆರೆ ಖಾಸಗಿ ಆಸ್ಪತ್ರೆಯಲ್ಲಿ ಮಂಗಳವಾರ ಮೃತಪಟ್ಟಿರುವ ಇಲ್ಲಿಯ ಮಾರುತಿ ನಗರದ 55 ವರ್ಷದ ವ್ಯಕ್ತಿಯ ಟ್ರಾವೆಲ್ ಹಿಸ್ಟರಿಗೆ ವಾಣಿಜ್ಯನಗರಿ ಜನ ಬೆಚ್ಚಿ ಬಿದ್ದಿದ್ದಾರೆ.

    ಈತ ಜೂ. 24ರಂದು ದಾವಣಗೆರೆಗೆ ಹೋಗಿ ಬಂದಿದ್ದ. ಜೂ. 29ರಂದು ನಿಗದಿಯಾಗಿದ್ದ ಮಗನ ಮದುವೆ ಅಂಗವಾಗಿ ಜೂ.25ರಿಂದ ಮನೆಯಲ್ಲಿಯೇ ಇದ್ದು ಮದುವೆ ಕಾರ್ಯಕ್ರಮದ ಸಿದ್ಧತೆಯಲ್ಲಿ ತೊಡಗಿದ್ದ. ನಿಗದಿಯಂತೆ 29ರಂದು ನಗರದ ಮೌನೇಶ್ವರ ಕಲ್ಯಾಣ ಮಂಟಪದಲ್ಲಿ ಮದುವೆ ನಡೆದಿದೆ. ಅದೇ ದಿನ ಸಂಜೆ ಜ್ವರ ಕಾಣಿಸಿಕೊಂಡಿದ್ದರಿಂದ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದಾನೆ.

    ಜು. 3ರಂದು ಮತ್ತೆ ಚಿಕಿತ್ಸೆಗಾಗಿ ಖಾಸಗಿ ಆಸ್ಪತ್ರೆಗೆ ತೆರಳಿದಾಗ ವೈದ್ಯರು, ಕೂಡಲೆ ಸರ್ಕಾರಿ ಆಸ್ಪತ್ರೆಯಲ್ಲಿ ಗಂಟಲ ದ್ರವ ಪರೀಕ್ಷೆ ಮಾಡಿಸುವಂತೆ ಸೂಚಿಸಿದ್ದಾರೆ. ಆದರೆ, ಆಸ್ಪತ್ರೆಗೆ ಹೋಗದೇ ಅದೇ ದಿನ ಮನೆಯಲ್ಲಿ ಸತ್ಯನಾರಾಯಣ ಪೂಜೆಯಲ್ಲಿ ಪಾಲ್ಗೊಂಡಿದ್ದಾನೆ. ಜು. 4ರಂದು ಬೆಳಗ್ಗೆ 10 ಗಂಟೆ ಸುಮಾರಿಗೆ ರಾಣೆಬೆನ್ನೂರ ಸರ್ಕಾರಿ ಆಸ್ಪತ್ರೆಗೆ ತೆರಳಿ ಗಂಟಲ ದ್ರವವನ್ನು ಪರೀಕ್ಷೆಗೆ ಕೊಟ್ಟಿದ್ದಾನೆ. ವರದಿ ಬರುವವರೆಗೂ ಮನೆಯಲ್ಲಿಯೇ ಇರಲು ವೈದ್ಯರು ತಿಳಿ ಹೇಳಿ ಕಳುಹಿಸಿದ್ದಾರೆ. ಆದರೆ, ಜು. 5ರಂದು ತಾಲೂಕಿನ ಅಸುಂಡಿ ಗ್ರಾಮಕ್ಕೆ ತೆರಳಿ ಖಾಸಗಿ ವೈದ್ಯರ ಬಳಿ ಚಿಕಿತ್ಸೆ ಪಡೆದಿದ್ದಾನೆ. ಆರೋಗ್ಯದಲ್ಲಿ ಚೇತರಿಕೆ ಕಾಣದ ಕಾರಣ ಜು. 6ರಂದು ದಾವಣಗೆರೆಯ ಖಾಸಗಿ ಆಸ್ಪತ್ರೆಗೆ ತೆರಳಿದ್ದಾನೆ. ಅಲ್ಲಿಯೂ ಕೋವಿಡ್ ಪರೀಕ್ಷೆ ನಡೆಸಲಾಗಿದೆ. ಅದೇ ದಿನ ಸಂಜೆ ವೇಳೆಗೆ ವರದಿ ಬಂದಿದ್ದು, ಸೋಂಕು ಇರುವುದು ದೃಢಪಟ್ಟಿದೆ. ಜು. 7ರಂದು ಬೆಳಗ್ಗೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾನೆ ಎಂದು ಆತನ ಟ್ರಾವೆಲ್ ಹಿಸ್ಟರಿಯಲ್ಲಿ ನಮೂದಿಸಲಾಗಿದೆ.

    ಶುರುವಾಗಿದೆ ಢವ ಢವ…

    ಮೃತ ವಾಸವಿದ್ದ ಮಾರುತಿ ನಗರವನ್ನು ಸೀಲ್​ಡೌನ್ ಮಾಡಲಾಗಿದೆ. ಮೃತನ ಜತೆ ಪ್ರಥಮ, ದ್ವಿತೀಯ ಸಂಪರ್ಕದಲ್ಲಿದ್ದ 99 ಜನರನ್ನು ಈಗಾಗಲೇ ಕ್ವಾರಂಟೈನ್ ಮಾಡಲಾಗಿದೆ. ಇದೀಗ ಆತನ ಮಗನ ಮದುವೆ ಹಾಗೂ ಸತ್ಯನಾರಾಯಣ ಪೂಜೆಯಲ್ಲಿ ಪಾಲ್ಗೊಂಡ ಎಲ್ಲರಿಗೂ ಢವ ಢವ ಶುರುವಾಗಿದೆ. ಆದ್ದರಿಂದ ಮೃತ ವ್ಯಕ್ತಿಯ ಸಂಪರ್ಕದಲ್ಲಿದ್ದವರು ಸ್ವಯಂ ಪ್ರೇರಣೆಯಿಂದ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಆರೋಗ್ಯ ಇಲಾಖೆ ಪ್ರಕಟಣೆ ತಿಳಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts