More

    ಡಿಸಿ ಕಚೇರಿಗೆ ರೈತರ ದಿಗ್ಬಂಧನ

    ಮಂಡ್ಯ: ಪ್ರತಿ ಟನ್ ಕಬ್ಬಿಗೆ 4,500 ಹಾಗೂ ಪ್ರತಿ ಲೀಟರ್ ಹಾಲಿಗೆ 40 ರೂ.ನಂತೆ ವೈಜ್ಞಾನಿಕ ದರ ನಿಗದಿ ಮಾಡಬೇಕೆಂದು ಒತ್ತಾಯಿಸಿ ಗುರುವಾರ ರೈತ ಸಂಘ ಹಾಗೂ ವಿವಿಧ ಸಂಘಟನೆಗಳ ಕಾರ್ಯಕರ್ತರು ಡಿಸಿ ಕಚೇರಿಗೆ ದಿಗ್ಬಂಧನ ಹಾಕಿದರು.
    ನಗರದ ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆ ಎದುರು ಎತ್ತಿನಗಾಡಿ ಹಾಗೂ ಟ್ರ್ಯಾಕ್ಟರ್, ಕೋಳಿ ಮತ್ತು ನಾಯಿಯೊಂದಿಗೆ ಜಮಾಯಿಸಿದ ರೈತರು, ಹಸಿರು ಟವಲ್ ಬೀಸುತ್ತ ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆ ನಡೆಸಿದರು. ಪೊಲೀಸರು ಎರಡು ಬದಿಗಳಲ್ಲಿ ಅಳವಡಿಸಿದ ಬ್ಯಾರಿಕೇಡ್ ಭೇದಿಸಿ ಒಳನುಗ್ಗಿದ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿಯ ಮುಖ್ಯದ್ವಾರದ ಸುತ್ತ ಚೌಕಕಾರದಲ್ಲಿ ಅಳವಡಿಸಿದ ಬ್ಯಾರಿಕೇಡ್‌ಗಳನ್ನು ಪೊಲೀಸರ ಕೈಯಿಂದ ಕಿತ್ತು ರಸ್ತೆ ಬದಿಗೆ ಎಳೆದು ತಂದು ನಿಲ್ಲಿಸಿದರು.
    ರಾಜ್ಯ ಸರ್ಕಾರ ರೈತ ವಿರೋಧಿ ಧೋರಣೆ ಅನುಸರಿಸುತ್ತಿದೆ. ಕಳೆದ 109 ದಿನಗಳಿಂದ ಅನಿರ್ದಿಷ್ಟಾವಧಿ ಧರಣಿ ನಡೆಸುತ್ತಿದ್ದರೂ ಬೇಡಿಕೆಗೆ ಸ್ಪಂದಿಸಲಿಲ್ಲ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಭರವಸೆ ನೀಡಿದಂತೆ ನಡೆದುಕೊಳ್ಳಲಿಲ್ಲ. ಇದೊಂದು ವಚನಭ್ರಷ್ಟ ಸರ್ಕಾರ. ರೈತರನ್ನು ಶೋಷಣೆ ಮಾಡುತ್ತಿದೆ. ಇಂತಹ ಸರ್ಕಾರಕ್ಕೆ ಮುಂದಿನ ದಿನಗಳಲ್ಲಿ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಅಗತ್ಯ ವಸ್ತುಗಳ ಬೆಲೆಯನ್ನು ಏರಿಕೆ ಮಾಡಿಕೊಂಡು ಜನಸಾಮಾನ್ಯರನ್ನು ಸುಲಿಗೆ ಮಾಡುತ್ತಿದೆ. ರಾಜ್ಯ ಸರ್ಕಾರದಲ್ಲಿ ಭ್ರಷ್ಟಾಚಾರ ತಾಂಡವವಾಡುತ್ತಿದೆ. ರಾಜ್ಯದಲ್ಲಿ ಸರ್ಕಾರ ಇದೆಯೋ, ಇಲ್ಲವೋ ಎನ್ನುವ ಅನುಮಾನ ಕಾಡುತ್ತಿದೆ. ಇನ್ನು ಜಿಲ್ಲೆಯಲ್ಲಿ ಜ್ವಲಂತ ಸಮಸ್ಯೆಗಳಿವೆ. ಆದರೂ ಯಾವ ಶಾಸಕರೂ ಸದನದ ಒಳಗಾಗಲಿ ಅಥವಾ ಹೊರಗಾಗಲಿ ಮಾತನಾಡುತ್ತಿಲ್ಲ ಎಂದು ಶಾಸಕರ ವಿರುದ್ಧ ಘೋಷಣೆ ಕೂಗಿ ಅಸಮಾಧಾನ ವ್ಯಕ್ತಪಡಿಸಿದರು.
    ರಾಜ್ಯ ರೈತ ಸಂಘದ ಅಧ್ಯಕ್ಷ ಬಡಗಲಪುರ ನಾಗೇಂದ್ರ, ಜಿಲ್ಲಾಧ್ಯಕ್ಷ ಎ.ಎಲ್.ಕೆಂಪೂಗೌಡ, ರಾಜ್ಯ ಸಂಘಟನಾ ಕಾರ್ಯದರ್ಶಿ ಎಸ್.ಸಿ.ಮಧುಚಂದನ್, ಪ್ರಧಾನ ಕಾರ್ಯದರ್ಶಿ ರವಿಕಿರಣ್ ಪೂಣಚ್ಚ, ಯುವ ನಾಯಕ ದರ್ಶನ್ ಪುಟ್ಟಣ್ಣಯ್ಯ, ರೈತ ಸಂಘದ ವರಿಷ್ಠೆ ಸುನೀತಾ ಪುಟ್ಟಣ್ಣಯ್ಯ, ಪ್ರಸನ್ನ ಎನ್.ಗೌಡ, ತಗ್ಗಹಳ್ಳಿ ಪ್ರಸನ್ನ, ನೇತ್ರಾವತಿ, ಶ್ರೀನಿವಾಸ್, ವಿಜಯಕುಮಾರ್, ಪಿ.ಡಿ.ರಮೇಶ್, ಶಶಿಧರ್ ಅಜ್ಜಹಳ್ಳಿ, ಬೊಮ್ಮೇಗೌಡ ಇತರರಿದ್ದರು.

    ಪೊಲೀಸರ ಸರ್ಪಗಾವಲು: ರೈತ ಸಂಘ ಜಿಲ್ಲಾಧಿಕಾರಿ ಕಚೇರಿಗೆ ದಿಗ್ಬಂಧನಕ್ಕೆ ಕರೆ ಕೊಟ್ಟಿದ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆ ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸ್ ಸಿಬ್ಬಂದಿಯನ್ನು ನಿಯೋಜಿಸಿತ್ತು. ರೈತರು ಬ್ಯಾರಿಕೇಡ್ ಭೇದಿಸಿ ಒಳನುಗ್ಗುವ ವೇಳೆ ಪೊಲೀಸರು ಹಾಗೂ ರೈತರ ನಡುವೆ ಮಾತಿನ ಚಕಮಕಿ ನಡೆಯಿತು. ಪರಿಣಾಮ ಕೆಲ ಕಾಲ ಬಿಗುವಿನ ವಾತಾವರಣ ಸೃಷ್ಟಿಯಾಯಿತು. ರಾಜ್ಯ ಮಹಿಳಾ ಘಟಕದ ಪ್ರಧಾನ ಕಾರ್ಯದರ್ಶಿ ಮೈಸೂರಿನ ನೇತ್ರಾವತಿ ಅವರು ಸರ್ ಎಂ.ವಿಶ್ವೇಶ್ವರಯ್ಯ ಪ್ರತಿಮೆಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಟ್ರ್ಯಾಕ್ಟರ್ ಚಲಾಯಿಸಿ ಗಮನ ಸೆಳೆದರು. ಅಂತಿಮವಾಗಿ ತಮ್ಮ ಮನವಿಯನ್ನು ಜಿಲ್ಲಾಧಿಕಾರಿ ಡಾ.ಎಚ್.ಎನ್.ಗೋಪಾಲಕೃಷ್ಣ ಅವರಿಗೆ ಸಲ್ಲಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts