

ತಂದೆಯ ಮೇಲಿನ ಸೇಡಿನಿಂದ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದ ಅಪರಾಧಿಗಳಿಗೆ ಶಿಕ್ಷೆ ಪ್ರಕಟ
ಬೆಳಗಾವಿ: ಜಿಲ್ಲೆಯ ಕಟಕೋಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ ನೀಡಿದ ಅಪರಾಧಿಗಳಿಗೆ ತಲಾ 5 ವರ್ಷ ಕಾರಾಗೃಹ ಶಿಕ್ಷೆ ಹಾಗೂ 5 ಸಾವಿರ ರೂ. ದಂಢ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ.
ರಾಮದುರ್ಗ ತಾಲೂಕಿನ ಕುಳ್ಳೂರ ಗ್ರಾಮದ ನಿವಾಸಿಗಳಾದ ಲಕ್ಷ್ಮಣ ಭೀಮಪ್ಪ ಮಾದರ,ಸೋಮಪ್ಪ ಫಕೀರಪ್ಪ ಮಾದರ ಶಿಕ್ಷೆಗೆ ಒಳಗಾದ ಅಪರಾಧಿಗಳು.
ಘಟನೆ ವಿವರ:
2021ರಲ್ಲಿ ನಡೆದ ಗ್ರಾಮ ಪಂಚಾಯತಿ ಚುನಾವಣೆಯ ದ್ವೇಷದ ಹಿನ್ನೆಲೆ ಅಪರಾಧಿಗಳು ತಂದೆಯ ಮೇಲಿನ ಸಿಟ್ಟಿಗೆ ಅವರ ಮಗಳು ಅಪ್ರಾಪ್ತ ಬಾಲಕಿಯನ್ನು ಶಾಲೆಯಿಂದ ಬರುವಾಗ ಚಾಕು ತೊರಿಸಿ ,ಹೆದರಿಸಿ ಅಪಹರಣ ಮಾಡಿ,ಲೈಂಗಿಕ ಕಿರುಕುಳ ನೀಡಿದ ಕುರಿತು ಬಾಲಕಿ ತಂದೆ ಕಟಕೋಳ ಪೊಲೀಸ್ ಠಾಣೆಯಲ್ಲಿ 2021ರಲ್ಲಿ ದೂರು ದಾಖಲಿಸಿದರು.
ಪ್ರಕರಣ ದಾಖಲಿಸಿಕೊಂಡು ಕಟಕೋಳ ಪೊಲೀಸ್ ಠಾಣೆ ತನಿಖಾಧಿಕಾರಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಶಿಕ್ಷೆ ವಿಧಿಸಿ ತೀರ್ಪು ನೀಡಿದ್ದಾರೆ.ನೊಂದ ಬಾಲಕಿಗೆ ಜಿಲ್ಲಾ ಕಾನೂನು ಪ್ರಾಧಿಕಾರದಿಂದ 2 ಲಕ್ಷ.ರೂ ಪರಿಹಾರ ನೀಡುವಂತೆ ಆದೇಶಿಸಲಾಗಿದೆ.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್.ವಿ.ಪಾಟೀಲ ವಾದ ಮಂಡಿಸಿದ್ದರು.