More

    ತಪ್ಪದೇ ತಮ್ಮ ಹಕ್ಕನ್ನು ಚಲಾಯಿಸಿ

    ಬಾಗಲಕೋಟೆ: ಜಿಲ್ಲೆಯ ಎಲ್ಲಾ ಅರ್ಹ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಭಾಗವಹಿಸಿ, ತಪ್ಪದೇ ತಮ್ಮ ಹಕ್ಕನ್ನು ಚಲಾಯಿಸುವ ನಿಟ್ಟಿನಲ್ಲಿ ಪ್ರಜಾಪ್ರಭುತ್ವದ ಹಬ್ಬದಲ್ಲಿ ಪಾಲ್ಗೊಳ್ಳಬೇಕು ಎಂದು ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಹೇಳಿದರು.

    ಜಿಲ್ಲಾಡಳಿತ ಭವನದ ಆವರಣದಲ್ಲಿ ಮಂಗಳವಾರ ಜಿಲ್ಲಾಡಳಿತ,ಜಿಲ್ಲಾ ಪಂಚಾಯತ ಹಾಗೂ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಿದ್ದ ಮತದಾನ ಜಾಗೃತಿಗಾಗಿ ಹಾಪ್ ಮ್ಯಾರಥಾನ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರುವ ಮೂಲಕ ಚಾಲನೆ ನೀಡಿ ಮಾತನಾಡಿದ ಅವರು ಜಿಲ್ಲೆಯ ಎಲ್ಲಾ ಅರ್ಹ ಮತದಾರರು ಇದೇ ಮೇ ೭ ರಂದು ನಡೆಯುವ ಮತದಾನ ದಿನ ಮತಗಟ್ಟೆಗೆ ತೆರಳಿ ತಮ್ಮ ಮತದಾನದ ಹಕ್ಕು ಚಲಾಯಿಸಿ ಪ್ರಜಾಪ್ರಭುತ್ವ ಸದೃಢಗೊಳಿಸಬೇಕು. ಜಿಲ್ಲಾ ಸ್ವೀಪ್ ಸಮಿತಿಯು ಮತದಾನ ಜಾಗೃತಿ ಹಾಗೂ ಅರಿವು ಮೂಡಿಸುವುದಕ್ಕಾಗಿ ವಿವಿಧ ಕಾರ್ಯಕ್ರಮಗಳ ರೂಪಿಸಿಕೊಂಡು ಮತದಾರರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ ಎಂದರು.

    ಜಿಲ್ಲಾ ಸ್ವೀಪ್ ಸಮಿತಿಯ ನೋಡಲ್ ಅಧಿಕಾರಿಗಳು ಆದ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶಶಿಧರ್ ಕುರೇರ ಮಾತನಾಡಿ, ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಪಾಲ್ಗೊಂಡು ಮತದಾನ ಮಾಡಬೇಕು. ವಿದ್ಯಾರ್ಥಿಗಳು ತಮ್ಮ ಕುಟುಂಬ ವರ್ಗದವರಿಗೂ ಹಾಗೂ ನೆರೆಹೊರೆಯವರಿಗೂ ಮತದಾನದ ಮಹತ್ವದ ಕುರಿತು ತಿಳಿಸುವ ಮೂಲಕ ಮತದಾನ ಮಾಡುವ ನಿಟ್ಟಿನಲ್ಲಿ ಪ್ರೇರೇಪಿಸಬೇಕು. ಲೋಕಸಭಾ ಸಾರ್ವತ್ರಿಕ ಚುನಾವಣೆಯಲ್ಲಿ ಜಿಲ್ಲೆಯಲ್ಲಿ ನೂರಕ್ಕೆ ನೂರರಷ್ಟು ಮತದಾನವಾಗುವ ನಿಟ್ಟಿನಲ್ಲಿ ಜಿಲ್ಲಾದ್ಯಂತ ಮತದಾನ ಜಾಗೃತಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗುತ್ತಿದೆ ಎಂದು ಹೇಳಿದರು.

    ಜಿಲ್ಲಾಡಳಿತ ಭವನದ ಆವರಣದಿಂದ ಆರಂಭವಾದ ಮ್ಯಾರಥಾನ್ ನವನಗರದ ಬಸ್ ನಿಲ್ದಾಣ, ಎಲ್.ಐಸಿ ವೃತ್ತ, ನಗರಸಭೆ ಮಾರ್ಗವಾಗಿ, ಸರ್ಕಾರಿ ಆಸ್ಪತ್ರೆ ವೃತ್ತ, ಆಸ್ಪತ್ರೆ ಹಿಂಭಾಗದ ಸೆಕ್ಟರ್ ೧೨, ವೇದಾಂತ ಆಫೀಸ್ ಅಟೋಮೇಶನ್ ಕ್ರಾಸ್ ಮೂಲಕ ಸಂಚರಿಸಿ, ಜಿಲ್ಲಾ ಕ್ರೀಡಾಂಗಣಕ್ಕೆ ಮುಕ್ತಾಯವಾಯಿತು. ಮಾರ್ಗದುದ್ದಕ್ಕೂ ಮತದಾನ ಮಹತ್ವ ಸಾರುವ ಘೋಷಣೆಗಳನ್ನು ಕೂಗಲಾಯಿತು. ನೆರದ ಎಲ್ಲರಿಗೂ ಪ್ರತಿಜ್ಞಾವಿಧಿ ಬೋಧಿಸಲಾಯಿತು. ಮ್ಯಾರಥಾನ್‌ನಲ್ಲಿ ಭಾಗವಹಿಸಿ ವಿಜೇತರಾದ ಕ್ರೀಡಾಪಟುಗಳಿಗೆ ಪದಕ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.

    ಕಾರ್ಯಕ್ರಮದಲ್ಲಿ ಜಿ.ಪಂ ಯೋಜನಾ ನಿರ್ದೇಶಕ ಶಶಿಕಾಂತ ಶಿವಪುರೆ, ಕ್ರೀಡಾ ಇಲಾಖೆಯ ಸಹಾಯ ನಿರ್ದೇಶಕ ಗುರುಪಾದ ಡೂಗನವರ, ಕ್ರೀಡಾಪಟುಗಳು, ವಿವಿಧ ಶಾಲಾ-ಕಾಲೇಜಿನ ವಿದ್ಯಾರ್ಥಿಗಳು, ವಿವಿಧ ಇಲಾಖೆಯ ಅಧಿಕಾರಿ, ಸಿಬ್ಬಂದಿ ಹಾಗೂ ಸಾರ್ವಜನಿಕರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts