More

    ತಪ್ಪು ಮರುಕಳಿಸದಂತೆ ಎಚ್ಚರ ವಹಿಸಿ – ಸಚಿವೆ ಶಶಿಕಲಾ ಜೊಲ್ಲೆ

    ಬೆಳಗಾವಿ: ಕೋವಿಡ್ 2ನೇ ಅಲೆ ಸಂದರ್ಭದಲ್ಲಿ ಎದುರಾದ ಸಮಸ್ಯೆಗಳು 3ನೇ ಅಲೆಯಲ್ಲೂ ಮರುಕಳಿಸಬಾರದು. ಆ ನಿಟ್ಟಿನಲ್ಲಿ ಮಕ್ಕಳಿಗೆ ಯಾವುದೇ ತೊಂದರೆ ಆಗದಂತೆ ತುರ್ತು ಚಿಕಿತ್ಸೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಶಶಿಕಲಾ ಜೊಲ್ಲೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

    ನಗರದ ಜಿಪಂ ಸಭಾಂಗಣದಲ್ಲಿ ಕೋವಿಡ್ ಸಂಭಾವ್ಯ 3ನೇ ಅಲೆಯಿಂದ ಮಕ್ಕಳ ರಕ್ಷಣೆ ಹಾಗೂ ಆರೈಕೆಗೆ ಕೈಗೊಳ್ಳಬೇಕಾದ ಮುಂಜಾಗ್ರತಾ ಕ್ರಮಗಳ ಕುರಿತು ಬುಧವಾರ ಏರ್ಪಡಿಸಿದ್ದ ಜನಪ್ರತಿನಿಧಿಗಳ ಹಾಗೂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಜಿಲ್ಲಾಸ್ಪತ್ರೆ ಸೇರಿ ಎಲ್ಲ ತಾಲೂಕು ಆಸ್ಪತ್ರೆಗಳಲ್ಲಿ ಔಷಧ, ವೈದ್ಯಕೀಯ ಸಾಮಗ್ರಿ ಸೇರಿ ತುರ್ತು ಪರಿಸ್ಥಿತಿ ನಿರ್ವಹಣೆಗೆ ಸಿದ್ಧತೆ ಮಾಡಿಕೊಳ್ಳಬೇಕು. ಎರಡು ಮತ್ತು ಮೂರನೇ ಅಲೆಯಿಂದ ಬಾಧಿತರಾಗುವ ಮಕ್ಕಳಿಗೆ ಯಾವುದೇ ರೀತಿಯ ತೊಂದರೆಯಾಗದಂತೆ ಎಲ್ಲ ವೈದ್ಯಕೀಯ ಮತ್ತು ಊಟೋಪಚಾರದ ಸೌಕರ್ಯ ಒದಗಿಸಬೇಕು ಎಂದು ಸಲಹೆ ನೀಡಿದರು.

    ಕರೊನಾ ಸೋಂಕಿತ ಮಕ್ಕಳ ಆರೈಕೆಗಾಗಿ ಸುಸಜ್ಜಿತ ಮತ್ತು ಪ್ರತ್ಯೇಕ ಕೋವಿಡ್ ಕೇರ್ ಕೇಂದ್ರಗಳನ್ನು ಇಲಾಖೆಯ ವತಿಯಿಂದ ಆರಂಭಿಸಲಾಗುತ್ತಿದೆ. 2ನೇ ಅಲೆಯಲ್ಲಿ ರಾಜ್ಯದಲ್ಲಿ ಒಟ್ಟು 52 ಮಕ್ಕಳು ತಂದೆ-ತಾಯಿ ಕಳೆದುಕೊಂಡು ಅನಾಥರಾಗಿದ್ದಾರೆ. ಇಂತಹ ಮಕ್ಕಳ ಪೋಷಣೆ ಜವಾಬ್ದಾರಿಯನ್ನು ಇಲಾಖೆ ತೆಗೆದುಕೊಂಡಿದೆ.

    ಮುಖ್ಯಮಂತ್ರಿಗಳ ಬಾಲಸೇವಾ ಯೋಜನೆಯಡಿ ಈ ಮಕ್ಕಳಿಗೆ ಪ್ರತಿ ತಿಂಗಳು 3.5 ಸಾವಿರ ರೂ. ಉಚಿತ ಶಿಕ್ಷಣ, ಹೆಣ್ಣು ಮಗುವಿದ್ದರೆ 18 ವರ್ಷದ ಬಳಿಕ ಒಂದು ಲಕ್ಷ ರೂ.ಆರ್ಥಿಕ ನೆರವನ್ನು ಸರ್ಕಾರದ ವತಿಯಿಂದ ನೀಡಲು ನಿರ್ಧರಿಸಲಾಗಿದೆ. ಇಲಾಖೆಯಿಂದ ಅನಾಥ ಮಕ್ಕಳ ದತ್ತು ಸ್ವೀಕಾರ ಕೇಂದ್ರ ಆರಂಭಿಸಲಾಗಿದೆ. ಅದೇ ರೀತಿ ಏಕ ಪೋಷಕ ಮಕ್ಕಳ ನೋಂದಣಿ ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ತಿಳಿಸಿದರು.

    ಜಿಲ್ಲೆಯಲ್ಲಿ 600 ಬೆಡ್‌ಗಳ ವ್ಯವಸ್ಥೆ: ಜಿಪಂ ಸಿಇಒ ಎಚ್.ವಿ.ದರ್ಶನ ಮಾತನಾಡಿ, ಕೋವಿಡ್ 3ನೇ ಅಲೆಯ ತುರ್ತು ಸಂದರ್ಭದಲ್ಲಿ ಸಂಭವನೀಯ ಮಕ್ಕಳ ಆರೈಕೆಗಾಗಿ ಜಿಲ್ಲೆಯಲ್ಲಿ ವಿವಿಧ ವಸತಿ ನಿಲಯಗಳಲ್ಲಿ 600 ಬೆಡ್ ವ್ಯವಸ್ಥೆ ಮಾಡಲಾಗಿದೆ. ಅಲ್ಲದೆ, 766 ಆರೈಕೆ ಕೇಂದ್ರ ಗುರುತಿಸಲಾಗಿದೆ. ಜಿಲ್ಲೆಯಲ್ಲಿ ಮಕ್ಕಳಿಗಾಗಿ ಒಂದು ಕೋವಿಡ್ ಕೇರ್ ಕೇಂದ್ರ ಆರಂಭಿಸಲು ಕ್ರಮ ಕೈಗೊಳ್ಳಲಾಗಿದೆ. ಜಿಲ್ಲಾ ಆಸ್ಪತ್ರೆಯಲ್ಲಿ 75 ಆಕ್ಸಿಜನ್ ಬೆಡ್‌ಗಳ ಸಾಮಥ್ಯದ ಮಕ್ಕಳ ವಾರ್ಡ್ ಗುರುತಿಸಲಾಗಿದೆ. 9 ತಾಲೂಕು ಆಸ್ಪತ್ರೆ, 16 ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ 159 ಬೆಡ್‌ಗಳನ್ನು ಮಕ್ಕಳಿಗಾಗಿ ಗುರುತಿಸಲಾಗಿದೆ.

    139 ಪ್ರಾಥಮಿಕ ಆರೋಗ್ಯ ಕೇಂದ್ರಗಳಲ್ಲಿಯೂ ಮಕ್ಕಳ ಚಿಕಿತ್ಸೆಗಾಗಿ ವ್ಯವಸ್ಥೆ ಮಾಡಿಕೊಳ್ಳಲಾಗಿದೆ ಎಂದರು. ಸಂಸದರಾದ ಅಣ್ಣಾಸಾಹೇಬ ಜೊಲ್ಲೆ, ಮಂಗಲ ಅಂಗಡಿ, ಮಹಿಳಾ ಅಭಿವೃದ್ಧಿ ನಿಗಮದ ಅಧ್ಯಕ್ಷೆ ಶಶಿಕಲಾ ಟೆಂಗಳೆ, ಡಿಸಿ ಎಂ.ಜಿ.ಹಿರೇಮಠ, ಎಸ್‌ಪಿ ಲಕ್ಷ್ಮಣ ನಿಂಬರಗಿ, ಜಿಲ್ಲಾ ವೈದ್ಯಾಧಿಕಾರಿ ಡಾ.ಎಸ್.ವಿ.ಮುನ್ಯಾಳ, ಉಪ ನಿರ್ದೇಶಕ ಬಸವರಾಜ ವರವಟ್ಟಿ ಇದ್ದರು.

    ಬೆಳಗಾವಿ ದೊಡ್ಡ ಜಿಲ್ಲೆಯಾಗಿರುವುದರಿಂದ ಗ್ರಾಮೀಣ ಪ್ರದೇಶಗಳಲ್ಲಿ ತಾಯಿ-ಮಕ್ಕಳ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಬೇಕಿದೆ. ಜತೆಗೆ ಸೋಂಕು ತಡೆಗೆ ಮುಂಜಾಗ್ರತಾ ಕ್ರಮ ಹಾಗೂ ಲಸಿಕೆ ಕುರಿತು ತಿಳಿವಳಿಕೆ ಮೂಡಿಸುವ ಕೆಲಸ ಮಾಡಬೇಕು.
    | ಪ್ರೊ.ಸಾಬಣ್ಣ ತಳವಾರ ವಿಧಾನ ಪರಿಷತ್ ಸದಸ್ಯ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts