More

    ತ್ವರಿತವಾಗಿ ಕೆರೆ ಒತ್ತುವರಿ ತೆರವುಗೊಳಿಸಿ

    ಗದಗ: ಜಿಲ್ಲೆಯಲ್ಲಿ ಒತ್ತುವರಿಯಾಗಿರುವ ಕೆರೆ, ರಾಜ ಕಾಲುವೆ ಹಾಗೂ ಖಾಲಿ ಜಾಗಗಳ ಒತ್ತುವರಿ ತೆರವು ಕಾರ್ಯ ತ್ವರಿತವಾಗಿ ಆಗಬೇಕು. ಒತ್ತುವರಿ ತೆರವುಗೊಳಿಸಿರುವ ಕೆರೆಗಳ ಪಕ್ಕದಲ್ಲಿ ಅರಣ್ಯ ಇಲಾಖೆಯ ಸಹಕಾರದೊಂದಿಗೆ ಸಸಿಗಳನ್ನು ನೆಟ್ಟು ಹಸರೀಕರಣಕ್ಕೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಸುಂದರೇಶ ಬಾಬು ಹೇಳಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಆಯೋಜಿಸಿದ್ದ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಜಿಲ್ಲೆಯ ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಒತ್ತುವರಿಯಾಗಿರುವ ಕೆರೆಗಳನ್ನು ತೆರವುಗೊಳಿಸಬೇಕು. ಕೆರೆಯ ಸುತ್ತಲೂ ಸ್ವಚ್ಛತೆ ಕಾಪಾಡುವುದರ ಜತೆಗೆ ಖಾಲಿ ಇರುವ ಜಾಗದಲ್ಲಿ ಸಸಿಗಳನ್ನು ನೆಡಬೇಕು. ನಗರದ ಉದ್ಯಾನಗಳ ಸೌಂದರ್ಯ ಹೆಚ್ಚಿಸಲು ಸ್ಥಳೀಯ ಅರಣ್ಯಾಧಿಕಾರಿಗಳೊಂದಿಗೆ ರ್ಚಚಿಸಿ ಯೋಜನೆ ಸಿದ್ಧಪಡಿಸಬೇಕು ಎಂದರು.

    ತೆರವುಗೊಳಿಸಿರುವ ಕೆರೆಗಳು ಪುನಃ ಒತ್ತುವರಿ ಆಗದಂತೆ ಗಡಿ ಗುರುತಿಸಬೇಕು. ಕೆರೆಗಳಿಗೆ ಕೊಳಚೆ ನೀರು ಸೇರಿಕೊಳ್ಳದಂತೆ ಕ್ರಮ ವಹಿಸಬೇಕು. ಜಿಲ್ಲೆಯಲ್ಲಿರುವ ನಗರ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿಯ ಉದ್ಯಾನಗಳ ಸ್ಥಿತಿಗತಿಯ ಬಗ್ಗೆ ಮಾಹಿತಿ ಕಲೆ ಹಾಕಬೇಕಲ್ಲದೆ, ಸ್ಥಳೀಯ ಜನರ ಸಹಭಾಗಿತ್ವದೊಂದಿಗೆ ಅವುಗಳ ಪುನಶ್ಚೇತನಕ್ಕಾಗಿ ಕ್ರಿಯಾ ಯೋಜನೆ ತಯಾರಿಸಿ ಸಲ್ಲಿಸಬೇಕು ಎಂದರು.

    ನರಗುಂದ ಹಾಗೂ ಶಿರಹಟ್ಟಿ ಪಟ್ಟಣಗಳಲ್ಲಿ ನಿರ್ವಿುಸಲಾದ ಇಂದಿರಾ ಕ್ಯಾಂಟೀನ್​ಗಳನ್ನು ಕೂಡಲೇ ಸಾರ್ವಜನಿಕ ಉಪಯೋಗಕ್ಕೆ ನೀಡಲು ನಿರ್ದೇಶನ ನೀಡಿದರು. ಉಪ ಅರಣ್ಯ ಸಂರಕ್ಷಣಾಧಿಕಾರಿ ಸೂರ್ಯಸೇನ್, ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನ ನಿರ್ದೇಶಕ ರುದ್ರೇಶ ಎಸ್.ಎನ್., ಗದಗ-ಬೆಟಗೇರಿ ನಗರಸಭೆ ಪೌರಾಯುಕ್ತ ರಮೇಶ ಜಾಧವ ಮತ್ತಿತರರು ಸಭೆಯಲ್ಲಿ ಉಪಸ್ಥಿತರಿದ್ದರು.

    ಸಕಾಲಕ್ಕೆ ತೆರಿಗೆ ವಸೂಲಿಯಾಗಲಿ: ನಗರಸಭೆ, ಪುರಸಭೆ ಹಾಗೂ ಪಟ್ಟಣ ಪಂಚಾಯಿತಿಗಳು ಸಾರ್ವಜನಿಕರಿಂದ ಸಕಾಲಕ್ಕೆ ತೆರಿಗೆ ವಸೂಲಿ ಮಾಡಬೇಕು ಎಂದು ಜಿಲ್ಲಾಧಿಕಾರಿ ಸುಂದರೇಶ ಬಾಬು ಹೇಳಿದರು. ವರ್ಷದಿಂದ ವರ್ಷಕ್ಕೆ ಸ್ಥಳೀಯ ಸಂಸ್ಥೆಗಳ ಆದಾಯದ ಮೂಲಗಳನ್ನು ಹೆಚ್ಚಿಸಬೇಕು. ಟ್ರೇಡ್ ಲೈಸೆನ್ಸ್ ಪಡೆಯದ ವ್ಯಾಪಾರಸ್ಥರನ್ನು ಟ್ರೇಡ್ ಲೈಸೆನ್ಸ್ ವ್ಯಾಪ್ತಿಗೊಳಪಡಿಸಬೇಕು. ಕಸ ವಿಂಗಡಣೆಯಲ್ಲಿ ಶೇ. 100ರಷ್ಟು ಗುರಿ ಸಾಧಿಸಬೇಕು. ಒಳಚರಂಡಿ, ಸ್ವಚ್ಛತೆ, ಬೀದಿ ದೀಪ ನಿರ್ವಹಣೆ, ನೀರಿನ ವ್ಯವಸ್ಥೆ ಸೇರಿದಂತೆ ಇನ್ನುಳಿದ ಮೂಲ ಸೌಲಭ್ಯಗಳನ್ನು 6 ತಿಂಗಳೊಳಗಾಗಿ ಅಭಿವೃದ್ಧಿ ಪಡಿಸಬೇಕು ಎಂದು ಸೂಚಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts