

ಹಾಸನ: ಖ್ಯಾತ ವೈದ್ಯ ದಿ. ಡಾ.ಗುರುರಾಜ್ ಹೆಬ್ಬಾರ್ ಅವರ ಜನ್ಮದ ಅಂಗವಾಗಿ ಜ.1ರಂದು ನಗರದ ಸಂಜೀವಿನಿ ಆಸ್ಪತ್ರೆಯಲ್ಲಿ ಉಚಿತ ಆರೋಗ್ಯ, ರಕ್ತದಾನ ಶಿಬಿರ, ದೇಹ ದಾನ ಮತ್ತು ನೇತ್ರದಾನ ನೋಂದಣಿ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಕ್ಷೇತ್ರದ ಶಾಸಕ ಎಚ್.ಪಿ. ಸ್ವರೂಪ್ ತಿಳಿಸಿದರು.
ಡಾ. ಗುರುರಾಜ್ ಹೆಬ್ಬಾರ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್, ಸಂಜೀವಿನಿ ಸಹಕಾರಿ ಆಸ್ಪತ್ರೆ, ಹಿಮ್ಸ್ ಆಸ್ಪತ್ರೆ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಸೇರಿದಂತೆ ಇನ್ನೂ ಹತ್ತು ಹಲವು ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಈ ಆರೋಗ್ಯ ಶಿಬಿರ ಹಮ್ಮಿಕೊಳ್ಳುವ ಮೂಲಕ ಡಾ. ಹೆಬ್ಬಾರ್ ಅವರ ಹುಟ್ಟುಹಬ್ಬವನ್ನು ಅರ್ಥಪೂರ್ಣವಾಗಿ ಆಚರಿಸಲಾಗುತ್ತಿದೆ ಎಂದು ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಡಾ. ಹೆಬ್ಬಾರ್ ಅವರು ಸರಳ ಸಜ್ಜನಿಕೆಯ ವ್ಯಕ್ತಿಯಾಗಿ ಇಡೀ ಜಿಲ್ಲೆ ಅಲ್ಲದೆ ರಾಜ್ಯಮಟ್ಟದಲ್ಲಿ ಹೆಸರುವಾಸಿಯಾಗಿದ್ದರು. ಅವರ ಅಭಿಮಾನಿಗಳು, ಹಿತೈಷಿಗಳು ಹಾಗೂ ಸಂಘ-ಸಂಸ್ಥೆಗಳ ಸಹಯೋಗದಲ್ಲಿ ಅವರ ವಿಶೇಷ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. ಜಿಲ್ಲೆಯ ಜನರು ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ತಿಳಿಸಿದರು.
ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಸಭಾಪತಿ ಎಚ್.ಪಿ. ಮೋಹನ್ ಮಾತನಾಡಿ, ಕಾರ್ಯಕ್ರಮದ ಉದ್ಘಾಟನೆಯನ್ನು ರಾಜ್ಯ ವೈಜ್ಞಾನಿಕ ಸಂಶೋಧನಾ ಪರಿಷತ್ತಿನ ಉಪಾಧ್ಯಕ್ಷ ಹಾಗೂ ಖ್ಯಾತ ವೈದ್ಯ ಡಾ.ಆಂಜನಪ್ಪ ನೆರವೇರಿಸಲಿದ್ದು ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಿ.ಸತ್ಯಭಾಮಾ, ಒಕ್ಕಲಿಗರ ಸಂಘದ ಜಿಲ್ಲಾಧ್ಯಕ್ಷ ಜಿ.ಎಲ್. ಮುದ್ದೇಗೌಡ, ಡಿಎಚ್‌ಒ ಡಾ. ಅನಿಲ್ ಕುಮಾರ್ ಸೇರಿದಂತೆ ಹಲವು ಗಣ್ಯರು ಆಗಮಿಸಲಿದ್ದಾರೆ ಎಂದು ಹೇಳಿದರು.
ಡಾ. ಗುರುರಾಜ್ ಹೆಬ್ಬಾರ್ ಮೆಮೋರಿಯಲ್ ಚಾರಿಟೇಬಲ್ ಟ್ರಸ್ಟ್ ಅಧ್ಯಕ್ಷೆ ಡಾ. ಜಿ.ಪ್ರತಿಭಾ ಮಾತನಾಡಿ, ಹೆಬ್ಬಾರ್ ಅವರ ಹೆಸರಿನಲ್ಲಿ ರಾಜ್ಯಮಟ್ಟದ ಸೇವಾ ಪ್ರಶಸ್ತಿಯನ್ನು ನೀಡಲಾಗುತ್ತಿದ್ದು, ವೈದ್ಯಕೀಯ ಕ್ಷೇತ್ರದಲ್ಲಿ ಹಿಮ್ಸ್ ಆಸ್ಪತ್ರೆಯ ನಿವೃತ್ತ ಪ್ರಾಧ್ಯಾಪಕ ಡಾ. ಜಗದೀಶ್ ಹಾಗೂ ಸಮಾಜ ಸೇವೆ ಕ್ಷೇತ್ರದಲ್ಲಿ ಬೆಂಗಳೂರಿನ ನ್ಯೂ ಆರ್ಕ್ ಮಿಷನ್ ಆಫ್ ಇಂಡಿಯಾದ ಟಿ. ರಾಜು ಅವರನ್ನು ಸನ್ಮಾನಿಸಲಾಗುತ್ತಿದೆ ಎಂದು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಚೌವ್ಹಾಣ್, ಮಾಧವ್ ಶಣೈ ಸೇರಿದಂತೆ ಇತರರು ಇದ್ದರು.