More

    ದೇಶವನ್ನು ದುರ್ಬಲಗೊಳಿಸುತ್ತಿದೆ ಬಿಜೆಪಿ: ಕಾಗೋಡು ತಿಮ್ಮಪ್ಪ

    ಸಾಗರ: ಭಾರತ ವಿವಿಧತೆಯಲ್ಲಿ ಏಕತೆ ಸಾಧಿಸಿದೆ. ಆದರೆ ಬಿಜೆಪಿ ಸರ್ಕಾರ ದೇಶವನ್ನು ದುರ್ಬಲಗೊಳಿಸುತ್ತಿದ್ದು, ಭಾರತ್ ಜೋಡೋ ಮೂಲಕ ರಾಹುಲ್ ಗಾಂಧಿ ಅವರು ದೇಶದ ಐಕ್ಯತೆ, ಸಮಗ್ರತೆಯನ್ನು ಸದೃಢಗೊಳಿಸುವ ಕೆಲಸವನ್ನು ಅತ್ಯಂತ ವ್ಯವಸ್ಥಿತವಾಗಿ ಮುನ್ನಡೆಸಿದ್ದಾರೆ ಎಂದು ಮಾಜಿ ಸಚಿವ ಕಾಗೋಡು ತಿಮ್ಮಪ್ಪ ಬಣ್ಣಿಸಿದರು.
    ಗಾಂಧಿ ಮಂದಿರದಲ್ಲಿ ಸೋಮವಾರ ಬ್ಲಾಕ್ ಕಾಂಗ್ರೆಸ್ ಹಮ್ಮಿಕೊಂಡಿದ್ದ ಭಾರತ್ ಜೋಡೋ ಯಾತ್ರೆ ಸಮಾರೋಪದ ಅಂಗವಾಗಿ ಧ್ವಜಾರೋಹಣ ನೆರವೇರಿಸಿ ಮಹಾತ್ಮ ಗಾಂಧೀಜಿ ಪುಣ್ಯಸ್ಮರಣೆ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
    ರಾಹುಲ್‌ಗಾಂಧಿ ನಡೆಸಿದ ಭಾರತ್ ಜೋಡೋ ಯಾತ್ರೆ ಐತಿಹಾಸಿಕ ದಾಖಲೆ ಸೃಷ್ಟಿಸಿದೆ. ದೇಶಕ್ಕೆ ಸಮರ್ಥ ನಾಯಕತ್ವ ನೀಡುವ ಶಕ್ತಿ ರಾಹುಲ್ ಗಾಂಧಿ ಅವರಿಗೆ ಇದೆ. ಕಾಂಗ್ರೆಸ್ ಪಕ್ಷ ನೀಡಿದ ಅನೇಕ ಕಾರ್ಯಕ್ರಮಗಳನ್ನು ಬಿಜೆಪಿ ಸರ್ಕಾರ ಮೂಲೆಗುಂಪು ಮಾಡಿದೆ. ದುಡಿಯುವ ಕೈಗೆ ಕೆಲಸ ನೀಡುವ ಉದ್ಯೋಗಖಾತ್ರಿ ಯೋಜನೆಗೆ ಕೇಂದ್ರ ಸರ್ಕಾರ ಅನುದಾನ ಬಿಡುಗಡೆ ಮಾಡದೆ ಗ್ರಾಮೀಣ ನಿರುದ್ಯೋಗ ಸೃಷ್ಟಿಯಾಗಲು ಕಾರಣವಾಗಿದೆ.
    ಮಾಜಿ ಶಾಸಕ ಹಾಗೂ ಕೆಪಿಸಿಸಿ ವಕ್ತಾರ ಗೋಪಾಲಕೃಷ್ಣ ಬೇಳೂರು ಮಾತನಾಡಿ, ರಾಹುಲ್ ಗಾಂಧಿ ಅವರು ಕನ್ಯಾಕುಮಾರಿಯಿಂದ ಕಾಶ್ಮೀರದವರೆಗೆ ನಡೆಸಿದ ಪಾದಯಾತ್ರೆಯಲ್ಲಿ ಅಭೂತಪೂರ್ವ ಬೆಂಬಲ ದೊರೆತಿದೆ. ದೇಶದ ಮಹತ್ವವನ್ನು ಪರಿಚಯಿಸುವಲ್ಲಿ ಭಾರತ್ ಜೋಡೋ ಯಾತ್ರೆ ಮಹತ್ತರವಾದ ಕೆಲಸ ಮಾಡಿದೆ. ಬಿಜೆಪಿಯವರಿಗೆ ಗಾಂಧೀಜಿ ಬಗ್ಗೆ ಗೌರವ ಇಲ್ಲ, ಜನತೆ ಎಲ್ಲವನ್ನೂ ಗಮನಿಸುತ್ತಿದ್ದಾರೆ. ಸರಿಯಾದ ಸಂದರ್ಭದಲ್ಲಿ ತಕ್ಕ ಉತ್ತರ ನೀಡುತ್ತಾರೆ ಎಂದರು.
    ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್.ಜಯಂತ್ ಮಾತನಾಡಿ, ಗಾಂಧೀಜಿ ತಮ್ಮ ಬದುಕಿನುದ್ದಕ್ಕೂ ಸತ್ಯ, ಅಹಿಂಸೆ ಪ್ರತಿಪಾದಿಸುತ್ತ ಉಪವಾಸದ ಮೂಲಕವೇ ಸತ್ಯದ ಪ್ರತಿಪಾದನೆಯ ಚಳವಳಿಗಳನ್ನು ನಡೆಸಿ ದೇಶದ ಗಮನ ಸೆಳೆದರು. ಭಾರತ್ ಜೋಡೋ ಯಾತ್ರೆ ಸಮಗ್ರತೆ ಮತ್ತು ಐಕ್ಯತೆಯ ಪ್ರತೀಕ ಎಂದು ಹೇಳಿದರು.
    ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಡಾ. ರಾಜನಂದಿನಿ ಕಾಗೋಡು ಮಾತನಾಡಿ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ವರ ತತ್ವಾದರ್ಶವನ್ನು ಎಲ್ಲರೂ ಪಾಲಿಸಬೇಕು. ಭಾರತ್ ಜೋಡೋ ಯಾತ್ರೆ ಯಶಸ್ಸಿಗೆ ಸಹಕಾರ ನೀಡಿದ ಎಲ್ಲರನ್ನೂ ಕಾಂಗ್ರೆಸ್ ಕೃತಜ್ಞತೆಯಿಂದ ಸ್ಮರಿಸುತ್ತದೆ ಎಂದು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts