

ಬೆಂಗಳೂರು: ಇತ್ತೀಚೆಗೆ ನಟ ಉಪೇಂದ್ರ ಅವರು ನೀಡಿದ್ದ ಆಕ್ಷೇಪಾರ್ಹ ಹೇಳಿಕೆಯಿಂದಾಗಿ ಹಲಸೂರು ಗೇಟ್ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ 2ನೇ FIRಗೂ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಎರಡನೇ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ಗೆ ಸಲ್ಲಿಸಿದ್ದ ಅರ್ಜಿ ಅಂಗೀಕಾರವಾಗಿದ್ದು, ನ್ಯಾಯಮೂರ್ತಿ ಹೇಮಂತ ಚಂದನಗೌಡರ ಅವರ ಏಕಸದಸ್ಯ ಪೀಠ ಗುರುವಾರ ತಡೆಯಾಜ್ಞೆ ನೀಡಿರುವುದರಿಂದ ಉಪ್ಪಿ ನಿರಾಳರಾಗಿದ್ದಾರೆ. ಪ್ರಜಾಕೀಯ ವಾರ್ಷಿಕೋತ್ಸವ ಕಾರ್ಯಕ್ರಮದಲ್ಲಿ ನೇರಪ್ರಸಾರದಲ್ಲಿ ಮಾತನಾಡುವಾಗ ನೀಡಿದ್ದ ಆಕ್ಷೇಪಾರ್ಹ ಹೇಳಿಕೆ ದೊಡ್ಡ ಮಟ್ಟದಲ್ಲಿ ವಿವಾದಕ್ಕೆ ಕಾರಣವಾಗಿತ್ತು. ಅಲ್ಲದೇ ಉಪೇಂದ್ರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಎರಡು ಪ್ರತ್ಯೇಕ ಪ್ರಕರಣಗಳು ದಾಖಲಾಗಿದ್ದವು. ಉಪೇಂದ್ರ ನೀಡಿದ ಹೇಳಿಕೆಯಿಂದ ರೊಚ್ಚಿಗೆದ್ದ ದಲಿತ ಸಂಘಟನೆಗಳು, ಹೇಳಿಕೆ ಖಂಡಿಸಿ,ತೀವ್ರ ವಿರೋಧ ವ್ಯಕ್ತಡಿಸಿದ್ದವು. ನಮ್ಮ ಸಮುದಾಯದ ಬಗ್ಗೆ ಕೀಳಾಗಿ ಮಾತನಾಡುವ ಮೂಲಕ ನಮಗೆ ನೋವುಂಟು ಮಾಡಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದರು. ಅಲ್ಲದೇ ಈ ಸಂಬಂಧ ಸಮಾಜ ಕಲ್ಯಾಣ ಇಲಾಖೆ ಹಾಗೂ ದಲಿತ ಸಂಘಟನೆಗಳಿಂದ ಉಪೇಂದ್ರ ವಿರುದ್ಧ ದೂರುಗಳು ದಾಖಲಾಗಿದ್ದವು.