More

    ನಾಯಕತ್ವವಿಲ್ಲದೇ ಸೊರಗಿದ ಕಾಂಗ್ರೆಸ್ ಪಕ್ಷ:ಎಂಎಲ್ಸಿ ಚಲವಾದಿ ನಾರಾಯಣಸ್ವಾಮಿ

    ಹಾಸನ: ದೇಶ ಮತ್ತು ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ನಾಯಕತ್ವ ಇಲ್ಲದೆ ಸೊರಗೆ ಹೋಗಿದೆ. ಆ ಹಿನ್ನೆಲೆಯಲ್ಲಿ ರಾಜ್ಯದಲ್ಲಿ 28 ಕ್ಷೇತ್ರಗಳಲ್ಲೂ ಎನ್‌ಡಿಎ ಅಭ್ಯರ್ಥಿಗಳು ಗೆಲುವು ಸಾಧಿಸಲಿದ್ದಾರೆ ಎಂದು ವಿಧಾನ ಪರಿಷತ್ ಸದಸ್ಯ ಚಲವಾದಿ ನಾರಾಯಣಸ್ವಾಮಿ ಭವಿಷ್ಯ ನುಡಿದರು.
    ನಗರದ ಖಾಸಗಿ ಹೋಟೆಲ್‌ನಲ್ಲಿ ಮಂಗಳವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಕೇಂದ್ರದಲ್ಲಿ ಆಡಳಿತ ನಡೆಸಿದ ಸಂದರ್ಭದಲ್ಲಿ ದಲಿತ ಸಮುದಾಯಕ್ಕೆ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ. ಆದರೆ ದಲಿತರನ್ನು ಕಾಂಗ್ರೆಸ್‌ನವರು ಕೇವಲ ವೋಟ್ ಬ್ಯಾಂಕ್‌ಗಾಗಿ ಬಳಸಿಕೊಳ್ಳುತ್ತಿದ್ದರು. ಇವರ ಮೊಸಳೆ ಕಣ್ಣೀರಿಗೆ ಜನ ಈ ಬಾರಿ ಬೆರಗಾಗುವುದಿಲ್ಲ. ನರೇಂದ್ರ ಮೋದಿ ಅವರು ಮೂರನೇ ಬಾರಿಗೆ ಪ್ರಧಾನಿಯಾಗುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
    ಕಾಂಗ್ರೆಸ್ ಅಂಬೇಡ್ಕರ್‌ಗೆ ಅಪಮಾನ ಮಾಡಿದ್ದಲ್ಲದೆ ಅವರ ಸೋಲಿಗೂ ಕಾರಣವಾಯಿತು. ಬಿಜೆಪಿ ಎಂದೂ ಕೂಡ ದಲಿತರು, ಅಂಬೇಡ್ಕರ್ ಹಾಗೂ ಸಂವಿಧಾನದ ವಿರೋಧಿಯಾಗಿ ನಡೆದುಕೊಂಡಿಲ್ಲ. ಕಾಂಗ್ರೆಸ್ ಈ ರೀತಿ ಅಪಪ್ರಚಾರಗಳನ್ನು ಮಾಡುತ್ತ ಜನರಿಗೆ ತಪ್ಪು ಸಂದೇಶವನ್ನು ತಲುಪಿಸುತ್ತಿದೆ ಎಂದು ಕಿಡಿಕಾರಿದರು.
    ಬಿಜೆಪಿ ಅಧಿಕಾರಕ್ಕೆ ಬಂದರೆ ಸಂವಿಧಾನವನ್ನು ತಿದ್ದುಪಡಿ ಮಾಡುವುದಿಲ್ಲ ಎಂದು ಈಗಾಗಲೇ ಪ್ರಧಾನಿ ಮೋದಿ ಅವರೇ ಸ್ಪಷ್ಟಪಡಿಸಿದ್ದಾರೆ. ದೇಶದ ಭದ್ರತೆ ದೃಷ್ಟಿಯಿಂದ ಹಾಗೂ ಅಭಿವೃದ್ಧಿ ದೃಷ್ಟಿಯಿಂದ ಈ ಬಾರಿ ಹೆಚ್ಚು ಸ್ಥಾನ ಬಿಜೆಪಿ ಗೆಲ್ಲಲಿದೆ. ಕಾಂಗ್ರೆಸ್‌ನವರು ಈ ಬಾರಿ ಹೆಚ್ಚು ಸ್ಥಾನ ಗೆಲ್ಲುತ್ತೇವೆ ಎಂಬ ಭ್ರಮೆಯಲ್ಲಿದ್ದಾರೆ. ಗ್ಯಾರಂಟಿಗಳು ಈ ಬಾರಿ ಕೈ ಹಿಡಿಯುವುದಿಲ್ಲ. ಹಾಗೂ ಮೋದಿಯವರನ್ನು ತೆಗಳುವುದರಿಂದ ಹೆಚ್ಚು ಮತ ಬರುತ್ತದೆ ಎಂಬ ನಂಬಿಕೆ ಸುಳ್ಳಾಗಲಿದೆ. ಮೋದಿ ಅವರ ಪಾರದರ್ಶಕ ಆಡಳಿತ, ಅವರು ಜಾರಿಗೆ ತಂದಂತಹ ಕಾನೂನುಗಳು ಮತ್ತು ದೇಶದ ಅಭಿವೃದ್ಧಿಗೆ ಹೆಚ್ಚಿನ ಒತ್ತು ನೀಡುವ ಮೂಲಕ ಇಡೀ ಪ್ರಪಂಚ ತನ್ನತ್ತ ತಿರುಗಿ ನೋಡುವಂತೆ ಮಾಡಿದ್ದಾರೆ. ಮುಂದಿನ 50 ವರ್ಷ ಕಾಂಗ್ರೆಸ್ ಅಧಿಕಾರಕ್ಕೆ ಬರುವುದಿಲ್ಲ. ಅಲ್ಲಿಯವರೆಗೆ ಆ ಪಕ್ಷ ಇರುತ್ತದೆಯೋ ಇಲ್ಲವೋ ಗೊತ್ತಿಲ್ಲ ಎಂದು ವ್ಯಂಗ್ಯವಾಡಿದರು.
    ಜಿಲ್ಲೆಯಲ್ಲಿ ಕೆಲವು ಸಣ್ಣಪುಟ್ಟ ಸಮಸ್ಯೆಗಳಿದ್ದು ಅವುಗಳನ್ನು ಬಗೆಹರಿಸಲಾಗುವುದು .ಅಲ್ಲದೆ ಜಿಲ್ಲೆಯಲ್ಲಿರುವಂತಹ ದಲಿತರು ಹಾಗೂ ಹಿಂದುಳಿದ ವರ್ಗದವರು ಈ ಬಾರಿ ಎನ್‌ಡಿಎ ಅಭ್ಯರ್ಥಿಗೆ ಹೆಚ್ಚಿನ ಮತ ನೀಡುವ ಮೂಲಕ ದೇಶದ ಅಭಿವೃದ್ಧಿಗೆ ನೀವೆಲ್ಲರೂ ಸಹಕರಿಸಬೇಕು ಎಂದು ಮನವಿ ಮಾಡಿದರು
    ಸುದ್ದಿಗೋಷ್ಠಿಯಲ್ಲಿ ಬಿಜೆಪಿ ಮುಖಂಡರಾದ ಸಿ.ವಿ. ರಾಜಪ್ಪ ಚಂದ್ರು, ಜೆಡಿಎಸ್ ಮುಖಂಡರಾದ ಕ್ರಾಂತಿ ಪ್ರಸಾದ್ ತ್ಯಾಗಿ, ಕೆ.ಟಿ. ಮಂಜಯ್ಯ, ಆರ್‌ಪಿಐ ರಾಜ್ಯಾಧ್ಯಕ್ಷ ಸತೀಶ್ ಸೇರಿದಂತೆ ಇನ್ನಿತರರು ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts