More

    ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಿ

    ಗದಗ: ಬಹುಗ್ರಾಮ ಕುಡಿಯುವ ನೀರು ಯೋಜನೆಯಡಿ ಜಿಲ್ಲೆಯ ಪ್ರತಿ ಮನೆಮನೆಗೂ ಪೈಪ್​ಲೈನ್ ಅಳವಡಿಸಬೇಕು. ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ದುರಸ್ತಿಗೊಳಿಸಿ ಜಿಲ್ಲೆಯಲ್ಲಿ ನೀರಿನ ಸಮಸ್ಯೆ ಉಂಟಾಗದಂತೆ ಕ್ರಮ ಕೈಗೊಳ್ಳಬೇಕು ಎಂದು ಜಿಪಂ ಅಧ್ಯಕ್ಷ ಸಿದ್ಧಲಿಂಗೇಶ್ವರ ಪಾಟೀಲ ಹೇಳಿದರು.

    ನಗರದ ಜಿಪಂ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಜಿಲ್ಲಾ ನೀರು ಮತ್ತು ನೈರ್ಮಲ್ಯ ಮಿಷನ್ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಜಿಲ್ಲೆಯಲ್ಲಿರುವ ವಸತಿ ನಿಲಯಗಳಿಗೆ ಹಾಗೂ ಆಸ್ಪತ್ರೆಗಳಿಗೆ ನೀರಿನ ಅಗತ್ಯತೆ, ನೀರು ಸರಬರಾಜಿಗೆ ತಗಲುವ ವೆಚ್ಚದ ಕುರಿತು ಮಾ. 1ರೊಳಗೆ ಕ್ರಿಯಾಯೋಜನೆ ಸಲ್ಲಿಸಬೇಕು. ಸಣ್ಣ ಪುಟ್ಟ ಸಮಸ್ಯೆಗಳಿಂದ ಕೆಟ್ಟು ನಿಂತಿರುವ ಶುದ್ಧ ಕುಡಿಯುವ ನೀರಿನ ಘಟಕಗಳನ್ನು ಶೀಘ್ರವೇ ದುರಸ್ತಿಗೊಳಿಸಬೇಕು ಎಂದರು.

    ಜಿಪಂ ಉಪಾಧ್ಯಕ್ಷೆ ಮಲ್ಲಮ್ಮ ಬಿಚ್ಚೂರ ಮಾತನಾಡಿ, ಗಜೇಂದ್ರಗಡದ ಕಾಲಕಾಲೇಶ್ವರದಲ್ಲಿರುವ ಕಿತ್ತೂರು ರಾಣಿ ಚನ್ನಮ್ಮ ವಸತಿ ಶಾಲೆಯಲ್ಲಿ 250 ವಿದ್ಯಾರ್ಥಿಗಳು ವ್ಯಾಸಂಗ ಮಾಡುತ್ತಿದ್ದಾರೆ. ನೀರಿನ ಸಮಸ್ಯೆ ಉಂಟಾಗಿರುವುದರಿಂದ ಪ್ರತಿನಿತ್ಯ ಟ್ಯಾಂಕರ್ ಮೂಲಕ ನೀರು ಹಾಕಿಸಿಕೊಳ್ಳುತ್ತಿದ್ದಾರೆ. ಆದ್ದರಿಂದ ಕೂಡಲೇ ವಸತಿ ಶಾಲೆಯ ನೀರಿನ ಸಮಸ್ಯೆ ಬಗೆಹರಿಸಬೇಕು ಎಂದರು.

    ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಆನಂದ. ಕೆ., ಜಿಪಂ ಸ್ಥಾಯಿ ಸಮಿತಿ ಅಧ್ಯಕ್ಷ ಈರಪ್ಪ ನಾಡಗೌಡ್ರ, ಜಿಪಂ ಸದಸ್ಯ ಹನುಮಂತಪ್ಪ ಪೂಜಾರ ಮತ್ತಿತರರಿದ್ದರು.

    1 ಕೋಟಿ ರೂ. ಬಿಡುಗಡೆ: ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕುಡಿಯುವ ನೀರು ಪೂರೈಸಲು ಪೈಪ್​ಲೈನ್ ಅಳವಡಿಕೆ, ಪಂಪ್ ನಿರ್ಮಾಣ ಹಾಗೂ ನೀರಿನ ತೊಟ್ಟಿಗಳನ್ನು ನಿರ್ವಿುಸಲು ಜಿಪಂ ಅಧ್ಯಕ್ಷರ ವಿವೇಚನಾ ಅನುದಾನದಡಿ 1 ಕೋಟಿ ರೂ. ಬಿಡುಗಡೆಯಾಗಿದೆ. ಜಿಲ್ಲೆಯಾದ್ಯಂತ 432 ಶುದ್ಧ ಕುಡಿಯುವ ನೀರಿನ ಘಟಕಗಳಿದ್ದು, 378 ಘಟಕಗಳು ಚಾಲನೆಯಲ್ಲಿವೆ. 61 ನೀರಿನ ಘಟಕಗಳು ಕೆಟ್ಟು ನಿಂತಿವೆ. ಅದರಲ್ಲಿ 23 ಘಟಕಗಳು ತೀರಾ ಹದಗೆಟ್ಟಿದ್ದು, ಉಳಿದ ಘಟಕಗಳು ಪಂಪ್ ರಿಪೇರಿ, ವಿದ್ಯುತ್ ಸಮಸ್ಯೆಯಿಂದ ಬಂದ್ ಆಗಿವೆ. ಶುದ್ಧ ಕುಡಿಯುವ ನೀರಿನ ಘಟಕಗಳ ದುರಸ್ತಿಗೆ ಅನುದಾನದ ಅಗತ್ಯವಿದ್ದು, ಈಗಾಗಲೇ ಪ್ರಸ್ತಾವನೆ ಸಲ್ಲಿಸಲಾಗಿದೆ ಎಂದು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆ ಕಾರ್ಯನಿರ್ವಾಹಕ ಇಂಜಿನಿಯರ್ ಪಿ.ಎ. ಕನವಳ್ಳಿ ವಿವರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts