More

    ನೆರೆ ಸಂತ್ರಸ್ತರಿಗೆ ಪರಿಹಾರ ವಿತರಣೆ ಆರಂಭ

    ಶಿವಮೊಗ್ಗ: ಮಲೆನಾಡಿನಲ್ಲಿ ಉತ್ತಮ ಮಳೆಯಿಂದ ರೈತರು ಸಂತೃಪ್ತರಾಗಿದ್ದಾರೆ. ಆದರೆ ಉತ್ತರ ಕರ್ನಾಟಕ ಭಾಗದಲ್ಲಿ ಅತಿವೃಷ್ಟಿಯಿಂದ ಬೆಳೆ ನಾಶವಾಗಿ ಜನ ಸಂಕಷ್ಟಕ್ಕೊಳಗಾಗಿದ್ದು ನೆರೆ ಸಂತ್ರಸ್ತರಿಗೆ ಪರಿಹಾರ ನೀಡುವ ಕೆಲಸ ಆರಂಭಿಸಲಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

    ಜಿಲ್ಲೆಗೆ ಕರೊನಾ ಕಾಲಿಟ್ಟ ಬಳಿಕ ಮೊದಲ ಬಾರಿಗೆ ತವರಿಗೆ ಬಂದ ಬಳಿಕ ಶಿಕಾರಿಪುರದಲ್ಲಿ ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪ್ರಧಾನಿ ನರೇಂದ್ರ ಮೋದಿ ಅವರು ಹೆಚ್ಚಿನ ಪರಿಹಾರ ನೀಡುವ ಭರವಸೆ ನೀಡಿದ್ದಾರೆ. ಸಂತ್ರಸ್ತರ ನೆರವಿಗೆ ಶಕ್ತಿಮೀರಿ ಪ್ರಯತ್ನಿಸುತ್ತೇನೆ. ಉತ್ತರ ಕರ್ನಾಟಕದಲ್ಲಿ ಮಳೆ ಕಡಿಮೆಯಾಗಿ ಜನರಿಗೆ ಉತ್ತಮ ಬೆಳೆ ಹಾಗೂ ನೆಮ್ಮದಿ ಸಿಗುವಂತಾಗಬೇಕು ಎಂದು ದೇವರಲ್ಲಿ ಪ್ರಾರ್ಥಿಸುತ್ತೇನೆ ಎಂದರು.

    ಉಪಚುನಾವಣೆ ಗೆಲುವು ಖಚಿತ: ಶಿರಾ ಮತ್ತು ಆರ್.ಆರ್.ನಗರ ಉಪಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ನೂರಕ್ಕೆ ನೂರು ಗೆಲ್ಲುತ್ತಾರೆ. ದೊಡ್ಡ ಅಂತರದಿಂದ ಗೆಲ್ಲುವ ಬಗ್ಗೆ ಯೋಚನೆ ಮಾಡುತ್ತಿದ್ದೇವೆ. ಮೂರು ದಿನದಿಂದ ಬಿಜೆಪಿ ರಾಜ್ಯ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಶಿರಾದಲ್ಲೇ ಇದ್ದಾರೆ. ವಿಜಯೇಂದ್ರ ಮುಂದಾಳತ್ವದಲ್ಲಿ ಚುನಾವಣಾ ಪ್ರಚಾರ ನಡೆಯುತ್ತಿದೆ. ಅಲ್ಲಿ ಬಿಜೆಪಿ ಅಭ್ಯರ್ಥಿ ಠೇವಣಿ ಪಡೆಯುವುದಿಲ್ಲ ಎಂದುಕೊಂಡಿದ್ದೆವು. ಇಂದಿನ ಸ್ಥಿತಿ ನೋಡಿದರೆ ಶಿರಾದಲ್ಲಿ ನಾವು ಗೆಲ್ಲುವುದು ಖಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.

    ಜಿಲ್ಲೆಯ ಸಮಗ್ರ ಅಭಿವೃದ್ಧಿಗೆ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಏನು ಕೆಲಸ ಮಾಡಬೇಕೋ ಅದನ್ನು ಮಾಡುತ್ತಿದ್ದಾರೆ. ಶಿಕಾರಿಪುರ ತಾಲೂಕಿಗೆ ಇನ್ಮುಂದೆ ಹೆಚ್ಚಿನ ಅಭಿವೃದ್ಧಿ ಕಾಮಗಾರಿಗಳ ಅಗತ್ಯವಿಲ್ಲ. ಶಿವಮೊಗ್ಗದಲ್ಲಿ ವಿಮಾನ ನಿಲ್ದಾಣವಾದರೆ ಜಿಲ್ಲೆಗೆ ಕೈಗಾರಿಕೆಗಳು ಬರಲು ಅನುಕೂಲವಾಗಲಿದೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts