More

    ನ್ಯುಮೋನಿಯಾ ತಡೆಗೆ ಉಚಿತ ಲಸಿಕೆ, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾಹಿತಿ, ಜಿಲ್ಲಾಮಟ್ಟದ ಕಾರ್ಯಾಗಾರ

    ಬೆಂಗಳೂರು ಗ್ರಾಮಾಂತರ: ರಾಷ್ಟ್ರೀಯ ಆರೋಗ್ಯ ಅಭಿಯಾನದಡಿ ನ್ಯುಮೋನಿಯಾ ತಡೆಗಟ್ಟಲು ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ, ಸರ್ಕಾರಿ ಆಸ್ಪತ್ರೆಯಲ್ಲಿ ಉಚಿತವಾಗಿ ಲಸಿಕೆ ನೀಡಲಾಗುವುದು ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ತಿಳಿಸಿದರು.

    ವಿಶ್ವ ಆರೋಗ್ಯ ಸಂಸ್ಥೆ, ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಸಹಯೋಗದಲ್ಲಿ ದೇವನಹಳ್ಳಿ ತಾಲೂಕಿನ ಜಿಲ್ಲಾಡಳಿತ ಭವನದಲ್ಲಿರುವ ಜಿಪಂ ಕಚೇರಿ ಸಭಾಂಗಣದಲ್ಲಿ ಗುರುವಾರ ಹಮ್ಮಿಕೊಂಡಿದ್ದ ನ್ಯುಮೋಕಾಕಲ್ ಕಾಂಜುಗೇಟ್ ಲಸಿಕೆ(ಪಿಸಿವಿ) ಪರಿಚಯಕ್ಕಾಗಿ ಜಿಲ್ಲಾಮಟ್ಟದ ಕಾರ್ಯಾಗಾರದಲ್ಲಿ ಮಾತನಾಡಿದರು.

    ಈ ಹಿಂದೆ ಕೇವಲ ಖಾಸಗಿ ಆಸ್ಪತ್ರೆಯಲ್ಲಿ ಮಾತ್ರ ಲಭ್ಯವಾಗುತ್ತಿದ್ದ ಈ ಲಸಿಕೆ, ಪ್ರಸ್ತುತ ಅಗತ್ಯವಿರುವ ಎಲ್ಲ ಮಕ್ಕಳಿಗೂ ಉಚಿತವಾಗಿ ದೊರೆಯುವ ವ್ಯವಸ್ಥೆ ಮಾಡಲಾಗಿದೆ. ಜಿಲ್ಲೆಯ ನಾಲ್ಕು ತಾಲೂಕುಗಳಲ್ಲಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ನ್ಯುಮೋಕಾಕಲ್ ಕಾಂಜುಗೇಟ್ ಲಸಿಕೆ ಕುರಿತು ಉಪನ್ಯಾಸ ಕಾರ್ಯಾಗಾರ ಏರ್ಪಡಿಸುವ ಮೂಲಕ ಸೂಕ್ತ ಮಾಹಿತಿ ನೀಡಬೇಕು ಎಂದು ಸಲಹೆ ನೀಡಿದರು.

    ಲಸಿಕೆ ಅಭಿಯಾನ: ಸಾರ್ವಜನಿಕರೊಂದಿಗೆ ಹೆಚ್ಚು ಒಡನಾಟ ಹೊಂದಿರುವ ಬೀದಿ ಬದಿ ವ್ಯಾಪಾರಿಗಳು ಸೇರಿ ಕೋವಿಡ್ ಲಸಿಕೆಯ ಎರಡನೇ ಡೋಡ್ ಪಡೆಯದೇ ಇರುವವರನ್ನು ಗುರುತಿಸಿ, ವಿಶೇಷ ಅಭಿಯಾನದ ಮೂಲಕ ಆದ್ಯತೆ ಮೇರೆಗೆ ಲಸಿಕೆ ನೀಡಬೇಕು ಹಾಗೂ ಜಿಲ್ಲೆಯಲ್ಲಿ ಕೋವಿಡ್ ಪರೀಕ್ಷೆ ಹೆಚ್ಚಿಸುವ ಮೂಲಕ ಸೋಂಕಿನ ಮೂರನೇ ಅಲೆ ತಡೆಗೆ ಅಗತ್ಯ ಕ್ರಮ ಕೈಗೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

    ಆರೋಗ್ಯ ಇಲಾಖೆ ಸೇವೆಗೆ ಮೆಚ್ಚುಗೆ: ಕೋವಿಡ್ ಮೊದಲ ಹಾಗೂ ಎರಡನೇ ಅಲೆ ನಿಯಂತ್ರಿಸುವಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳು ಹಾಗೂ ಸಿಬ್ಬಂದಿ ಯಶಸ್ವಿಯಾಗಿದ್ದು, ಅವರ ಸೇವೆ ಶ್ಲಾಘನೀಯವಾಗಿದೆ ಎಂದು ಜಿಪಂ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಎಂ.ಆರ್. ರವಿಕುಮಾರ್ ಮೆಚ್ಚುಗೆ ವ್ಯಕ್ತಪಡಿಸಿದರು. 75ನೇ ಸ್ವಾತಂತ್ರ್ಯ ದಿನಾಚರಣೆಯಲ್ಲಿ ಕೋವಿಡ್ ನಿಯಂತ್ರಣಕ್ಕೆ ತರುವಲ್ಲಿ ಪ್ರಮುಖ ಪಾತ್ರ ವಹಿಸಿರುವ ವೈದ್ಯರು ಹಾಗೂ ಸಿಬ್ಬಂದಿ ಕುರಿತು ಮಾತನಾಡಬೇಕು ಎಂದು ಕೇಂದ್ರ ಸರ್ಕಾರ ಸೂಚನೆ ನೀಡಿರುವುದು ಆರೋಗ್ಯ ಇಲಾಖೆಗೆ ಸೂಚಿಸಿದ ಗೌರವವ ಎಂದರು.

    ಪಾಲಕರು ಅತಂಕಪಡಬೇಕಿಲ್ಲ: ನ್ಯುಮೋನಿಯಾ ತಡೆಗಟ್ಟಲು ಸರ್ಕಾರದಿಂದಲೇ ಉಚಿತವಾಗಿ ಲಸಿಕೆ ನೀಡಲಾಗುತ್ತಿದ್ದು, ಪಾಲಕರು ಆತಂಕ ಪಡದೆ ಮಕ್ಕಳಿಗೆ ಲಸಿಕೆ ಹಾಕಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ವಿಜಯಾ ಇ.ರವಿಕುಮಾರ್ ತಿಳಿಸಿದರು. ಈ ಬಗ್ಗೆ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ ಕಾರ್ಯಾಗಾರ ನಡೆಸಲಾಗುತ್ತಿದ್ದು ಅಗತ್ಯ ಕ್ರಮಕೈಗೊಳ್ಳಲಾಗಿದೆ ಎಂದು ತಿಳಿಸಿದರು.

    ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ತಿಪ್ಪೆಸ್ವಾಮಿ ಪಿಸಿವಿ ಲಸಿಕೆ ಕುರಿತು ಮಾಹಿತಿ ನೀಡಿದರು.
    ಡಬ್ಲ್ಲ್ಯುಎಚ್‌ಒ ಆರೋಗ್ಯ ಸಲಹೆಗಾರ ಡಾ.ಶ್ರೀನಿವಾಸ್, ಜಿಲ್ಲಾ ಹಿರಿಯ ವೈದ್ಯಾಧಿಕಾರಿ ಡಾ.ಶ್ರೀನಿವಾಸ್, ದೊಡ್ಡಬಳ್ಳಾಪುರ ಉಪವಿಭಾಗಾಧಿಕಾರಿ ಅರುಳ್‌ಕುಮಾರ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts