More

    ಪಂಚಮಸಾಲಿ 2ಎ ಮೀಸಲಾತಿಗೆ ದೀಪಾವಳಿ ಗಡುವು

    ಬೆಳಗಾವಿ / ಮೂಡಲಗಿ: ಪಂಚಮಸಾಲಿ 2ಎ ಮೀಸಲಾತಿ ನಿಮಿತ್ತ ಅ.7ರಂದು ಮೂಡಲಗಿ ತಾಲೂಕಿನ ಕಲ್ಲೋಳ್ಳಿಯಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯಮೃತ್ಯುಂಜಯ ಸ್ವಾಮೀಜಿ ತಿಳಿಸಿದರು.

    ನಗರದ ಗಾಂಧಿಭವನದಲ್ಲಿ ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಪಂಚಮಸಾಲಿ 2ಎ ಮೀಸಲಾತಿಗಾಗಿ ಹಳ್ಳಿ ಹಳ್ಳಿಗೆ ತೆರಳಿ ಜನರಲ್ಲಿ ಜಾಗೃತಿ ಮೂಡಿಸಲಾಗುತ್ತಿದೆ. ಈ ವೇಳೆ ಆಯಾ ಕ್ಷೇತ್ರದ ಶಾಸಕರು ಹೋರಾಟಕ್ಕೆ ಸಂಪೂರ್ಣ ಬೆಂಬಲ ನೀಡುವುದಾಗಿ ಭರವಸೆ ನೀಡಿದ್ದಾರೆ. ಅವರೆಲ್ಲರೂ ಅಧಿವೇಶನದಲ್ಲಿ ನಮ್ಮ ಪರವಾಗಿ ಧ್ವನಿ ಎತ್ತಬೇಕು ಎಂದು ಒತ್ತಾಯಿಸಿದರು.

    ಬೆಳಗಾವಿ ಜಿಲ್ಲೆಯ 18 ವಿಧಾನಸಭಾ ಕ್ಷೇತ್ರಗಳಲ್ಲಿ ಪಂಚಮಸಾಲಿ ಮತದಾರರು ಅಧಿಕ ಸಂಖ್ಯೆಯಲ್ಲಿದ್ದಾರೆ. ಈ ಹಿನ್ನೆಲೆಯಲ್ಲಿ ಅ.7ರಂದು ಮೂಡಲಗಿ ಪಟ್ಟಣದಲ್ಲಿ ಬೃಹತ್ ಪಂಚಮಸಾಲಿ ಮೀಸಲಾತಿ ಹೋರಾಟ ಹಮ್ಮಿಕೊಳ್ಳಲಾಗಿದೆ. ವಿವಿಧ ಭಾಗಗಳಿಂದ ಸಾವಿರಾರು ಜನರು ಹೋರಾಟದಲ್ಲಿ ಭಾಗವಹಿಸುವ ಮೂಲಕ ಶಕ್ತಿ ಪ್ರದರ್ಶನ ಮಾಡಲಿದ್ದಾರೆ. ಪಂಚಮಸಾಲಿ ಸಮಾಜದ ಜನರಲ್ಲಿ ಮೀಸಲಾತಿ ಕುರಿತು ನಿರಂತರ ತಿಳಿವಳಿಕೆ ನೀಡುತ್ತಿರುವ ಪರಿಣಾಮ ಹೋರಾಟಗಳಲ್ಲಿ ಸ್ವಯಂ ಪ್ರೇರಣೆಯಿಂದ ಭಾಗವಹಿಸುತ್ತಿದ್ದಾರೆ ಎಂದು ತಿಳಿಸಿದರು.

    ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು ಅ.7ರಂದು ಎಸ್‌ಸಿ, ಎಸ್‌ಟಿ ಮೀಸಲಾತಿ ಸಂಬಂಧ ಸರ್ವ ಪಕ್ಷಗಳ ಸಭೆ ಕರೆದಿದ್ದಾರೆ. ಅದೇ ಸಭೆಯಲ್ಲಿ ಪಂಚಮಸಾಲಿ 2ಎ ಮೀಸಲಾತಿ ಕುರಿತು ನಿರ್ಣಯ ಕೈಗೊಳ್ಳುವ ವಿಶ್ವಾಸ ಇದೆ. ಮೀಸಲಾತಿ ಹೋರಾಟದ ಪಾದಯಾತ್ರೆ ಬಳಿಕ ಎಲ್ಲರೂ ಜಾಗೃತರಾಗಿದ್ದಾರೆ. ದೀರ್ಘಕಾಲದ ಹೋರಾಟ ಇದೀಗ ಜನಪ್ರತಿನಿಧಿಗಳ ಮೇಲೆ ಪ್ರಭಾವ ಬೀರುತ್ತಿದೆ. ಹಾಗಾಗಿ ಎಲ್ಲರೂ ಬೆಂಬಲ ವ್ಯಕ್ತಪಡಿಸುತ್ತಿರುವುದು ಹೋರಾಟಕ್ಕೆ ಮತ್ತಷ್ಟು ಶಕ್ತಿ ಬಂದಂತಾಗಿದೆ ಎಂದರು.
    ಸಿಎಂ ಬಸವರಾಜ ಬೊಮ್ಮಾಯಿ ಅವರು ಪಂಚಮಸಾಲಿ 2ಎ ಮೀಸಲಾತಿ ಯಾವ ನಿಯಮ ಅಡಿಯಲ್ಲಿ ನೀಡಲಾಗುತ್ತಿದೆ, ಮೀಸಲಾತಿ ನೀಡಲು ಬರುತ್ತದೆ ಇಲ್ಲವೋ ಎಂಬುದರ ಕುರಿತು ಸ್ಪಷ್ಟಪಡಿಸಬೇಕು. ಭರವಸೆಯಲ್ಲಿ ದಿನ ಕಳೆಯಬಾರದು ಎಂಬ ಉದ್ದೇಶದಿಂದ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ನೇತೃತ್ವದಲ್ಲಿ ಸಭೆಗಳನ್ನು ನಡೆಸಲಾಗುತ್ತಿದೆ. ಸರ್ಕಾರ ದೀಪಾವಳಿ ಒಳಗಾಗಿ ಮೀಸಲಾತಿ ಬಗ್ಗೆ ಸ್ಪಷ್ಟ ನಿರ್ಧಾರ ತಿಳಿಸಬೇಕು. ಇಲ್ಲದಿದ್ದರೆ ಅಂತಿಮ ಹೋರಾಟಕ್ಕೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂದು ಎಚ್ಚರಿಸಿದರು.

    ಪಾಲಿಕೆ ಸದಸ್ಯ ಹನುಮಂತ ಕೊಂಗಾಲಿ, ಆರ್.ಕೆ.ಪಾಟೀಲ, ರುದ್ರಣ್ಣ ಚಂದರಗಿ, ಬಿ.ಐ. ಪಾಟೀಲ ಸೇರಿ ಇತರರಿದ್ದರು.

    ಮೂಡಲಗಿ ವರದಿ: ಕೂಡಲ ಸಂಗಮ ಲಿಂಗಾಯತ ಪಂಚಮಸಾಲಿ ಪೀಠದ ಪ್ರಥಮ ಜಗದ್ಗುರು ಬಸವಜಯ ಮೃಂತ್ಯುಜಯ ಸ್ವಾಮೀಜಿ ನೇತೃತ್ವದಲ್ಲಿ ಜರುಗಲಿರುವ ಸಮಾವೇಶದಲ್ಲಿ ಪಂಚಮಸಾಲಿ ಮೀಸಲಾತಿ ಹೋರಾಟ ಸ್ವಾಗತ ಸಮಿತಿ ಅಧ್ಯಕ್ಷ ಬಸವನಗೌಡ ಪಾಟೀಲ ಯತ್ನಾಳ, ಪಂಚಮಸಾಲಿ ಮೀಸಲಾತಿ ಹೋರಾಟ ಸ್ವಾಗತ ಸಮಿತಿ ಗೌರವಾಧ್ಯಕ್ಷ ಈರಣ್ಣ ಕಡಾಡಿ, ಅ.ಭಾ.ಲಿಂ.ಪಂಚಮಸಾಲಿ ಮಹಾಸಭಾ ಕೂಡಲಸಂಗಮ ರಾಷ್ಟ್ರೀಯ ಅಧ್ಯಕ್ಷ ವಿಜಯಾನಂದ ಕಾಶಪ್ಪನವರ, ಕೋಶಾಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ, ಮಹಾಪ್ರಧಾನ ಕಾರ್ಯದರ್ಶಿ ಎಚ್.ಎಸ್.ಶಿವಶಂಕರ, ಮಾಜಿ ಸಚಿವ ವಿನಯ ಕುಲಕರ್ಣಿ, ಎ.ಬಿ. ಪಾಟೀಲ, ವಿಧಾನ ಪರಿಷತ್ ಸದಸ್ಯ ಪ್ರಕಾಶ ಹುಕ್ಕೇರಿ, ಶಾಸಕರಾದ ಮಹಾಂತೇಶ ದೊಡಗೌಡರ, ಗಣೇಶ ಹುಕ್ಕೇರಿ, ಮಹೇಶ ಕುಮಟಳ್ಳಿ, ಮಾಜಿ ಶಾಸಕ ರಾಜು ಕಾಗೆ, ಶಶಿಕಾಂತ ನಾಯಕ್, ರಾಜ್ಯ ಪಂಚಮಸಾಲಿ ರೈತ ಘಟಕ ಅಧ್ಯಕ್ಷ ಅಮರೇಶ ನಾಗೂರ, ಅ.ಭಾ.ಲಿಂ.ಪಂಚಮಸಾಲಿ ಮಹಾಸಭಾ ಬೆಳಗಾವಿ ಘಟಕ ಜಿಲ್ಲಾಧ್ಯಕ್ಷ ಆರ್.ಕೆ. ಪಾಟೀಲ, ರಾಜ್ಯ ಸಾಮಾಜಿಕ ಜಾಲತಾಣ ಅಧ್ಯಕ್ಷ ದೀಪಕ ಜುಂಜರವಾಡ, ಮೂಡಲಗಿ ತಾಲೂಕು ಯುವ ಘಟಕ ಅಧ್ಯಕ್ಷ ಸಂಗಮೇಶ ಕೌಜಲಗಿ ಮೀಸಲಾತಿ ಹೋರಾಟ ಸಮಿತಿ ತಾಲೂಕು ಅಧ್ಯಕ್ಷ ಮಲ್ಲು ಗೋಡಿಗೌಡರ, ತಾಲೂಕು ಘಟಕ ಮೂಡಲಗಿ ಅಧ್ಯಕ್ಷ ಬಸಗೌಡ ಪಾಟೀಲ ಭಾಗವಹಿಸಲಿದ್ದಾರೆ ಎಂದು ಕಾರ್ಯಾಧ್ಯಕ್ಷ ನಿಂಗಪ್ಪ ಫಿರೋಜಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts