More

    ಪರೀಕ್ಷಾರ್ಥಿಗಳ ಕಾಳಜಿ ವಹಿಸಿ

    ಗದಗ: ದ್ವಿತೀಯ ಪಿಯುಸಿ ಇಂಗ್ಲಿಷ್ ಪರೀಕ್ಷೆ ಜೂ.18ರಂದು ಜರುಗಲಿದೆ. ಪರೀಕ್ಷೆಗೆ ಹಾಜರಾಗಲಿರುವ ವಿದ್ಯಾರ್ಥಿಗಳ ಆರೋಗ್ಯದ ಹಿತದೃಷ್ಟಿಯಿಂದ ಕೋವಿಡ್-19 ಸೋಂಕು ಹರಡದಂತೆ ಮುಂಜಾಗ್ರತೆ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ಎಂ.ಜಿ.ಹಿರೇಮಠ ಸೂಚಿಸಿದರು.

    ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಪಿಯುಸಿ ಪರೀಕ್ಷೆ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಪರೀಕ್ಷೆ ಸಂದರ್ಭದಲ್ಲಿ ಯಾವುದೇ ಲೋಪದೋಷವಾಗದಂತೆ ನೋಡಿಕೊಳ್ಳಬೇಕು ಎಂದರು.

    ಪರೀಕ್ಷೆಗೆ ಹಾಜರಾಗುವ ಪ್ರತಿಯೊಬ್ಬ ವಿದ್ಯಾರ್ಥಿಯನ್ನು ಪರೀಕ್ಷಾ ಕೇಂದ್ರದ ಪ್ರವೇಶ ದ್ವಾರದಲ್ಲಿಯೇ ಥರ್ಮಲ್ ಸ್ಕ್ರೀನಿಂಗ್​ಗೆ ಒಳಪಡಿಸಬೇಕು. ಅಲ್ಲದೆ, ವಿದ್ಯಾರ್ಥಿಗಳಿಗೆ ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ನಿರ್ದೇಶಿಸಬೇಕು. ಜಿಲ್ಲೆಯಲ್ಲಿರುವ 19 ಪರೀಕ್ಷಾ ಕೇಂದ್ರಗಳಲ್ಲೂ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು ಎಂದು ಹೇಳಿದರು.

    ಲಾಕ್​ಡೌನ್ ಕಾರಣದಿಂದಾಗಿ ಬೇರೆ ಜಿಲ್ಲೆಯ ಕೆಲ ವಿದ್ಯಾರ್ಥಿಗಳು ಜಿಲ್ಲೆಯಲ್ಲಿಯೇ ಉಳಿದುಕೊಂಡಿದ್ದು, ಸರ್ಕಾರದ ನಿರ್ದೇಶನದಂತೆ ಅವರೆಲ್ಲರಿಗೂ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಿಕೊಡಲಾಗಿದೆ ಎಂದರು.

    ಪರೀಕ್ಷೆಗೂ ಮುನ್ನ ಸ್ವಚ್ಛತೆ ಕಾಪಾಡಿಕೊಳ್ಳಬೇಕಲ್ಲದೆ, ಪರೀಕ್ಷಾರ್ಥಿಗಳು ಕುಳಿತುಕೊಳ್ಳಲು ಡೆಸ್ಕ್​ಗಳ ಕೊರತೆಯಾಗದಂತೆ ನಿಗಾ ವಹಿಸಬೇಕು. ಪರೀಕ್ಷಾ ಸಮಯದಲ್ಲಿ ಕಡ್ಡಾಯವಾಗಿ ಪರಸ್ಪರ ಅಂತರ ಕಾಯ್ದುಕೊಳ್ಳಬೇಕು. ಪ್ರತಿ ಪರೀಕ್ಷಾ ಕೇಂದ್ರಗಳಲ್ಲಿ ಹೆಚ್ಚುವರಿ ಎರಡು ಕೊಠಡಿಗಳ ವ್ಯವಸ್ಥೆ ಮಾಡಿಕೊಳ್ಳಬೇಕು. ವಿದ್ಯಾರ್ಥಿಗಳಲ್ಲಿ ಕೋವಿಡ್ ಭೀತಿ ಹೋಗಲಾಡಿಸುವುದರ ಜತೆಗೆ ಅವರಲ್ಲಿ ಆತ್ಮಸ್ಥೈರ್ಯ ಹೆಚ್ಚಿಸಬೇಕು ಎಂದು ಜಿಲ್ಲಾಧಿಕಾರಿ ಸಲಹೆ ನೀಡಿದರು.

    ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಎಚ್.ಎಸ್. ನಾಗೂರ ಮಾತನಾಡಿ, ಜಿಲ್ಲೆಯ 19 ಕೇಂದ್ರಗಳಲ್ಲಿ ಪರೀಕ್ಷೆಗಳು ಜರುಗಲಿವೆ. ಕೋವಿಡ್-19 ಸೋಂಕಿನ ಹಿನ್ನೆಲೆಯಲ್ಲಿ ಪರಸ್ಪರ ಅಂತರ ಕಾಯ್ದುಕೊಳ್ಳುವ ಉದ್ದೇಶದಿಂದ ಹೆಚ್ಚುವರಿ ಕೊಠಡಿ ಮತ್ತು ಆಸನಗಳ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.

    ಹೆಚ್ಚುವರಿ ಬಸ್ ಸೌಲಭ್ಯ, ಆರೋಗ್ಯ ಇಲಾಖೆಯ ಸಿಬ್ಬಂದಿಯನ್ನು ನಿಯೋಜಿಸುವ ಕುರಿತು ಚರ್ಚೆ ನಡೆಯಿತು.

    ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಸತೀಶಕುಮಾರ್ ಎಂ., ಗದಗ ತಹಸೀಲ್ದಾರ್ ಶ್ರೀನಿವಾಸ ಮೂರ್ತಿ ಕುಲಕರ್ಣಿ, ತಾಲೂಕು ಶಿಕ್ಷಣಾಧಿಕಾರಿಗಳು, ಪರೀಕ್ಷಾ ಕೇಂದ್ರಗಳ ಮುಖ್ಯ ಅಧೀಕ್ಷಕರು, ವಿವಿಧ ಇಲಾಖೆಯ ಅಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.

    ಜಿಲ್ಲಾಧಿಕಾರಿ ಹೇಳಿದ್ದು

    * ಪ್ರತಿ ವಿದ್ಯಾರ್ಥಿಯನ್ನು ಥರ್ಮಲ್ ಸ್ಕ್ರೀನಿಂಗ್​ಗೆ ಒಳಪಡಿಸಬೇಕು

    * ಕಡ್ಡಾಯವಾಗಿ ಮಾಸ್ಕ್ ಧರಿಸುವಂತೆ ವಿದ್ಯಾರ್ಥಿಗಳಿಗೆ ನಿರ್ದೇಶಿಸಬೇಕು.

    * 19 ಪರೀಕ್ಷಾ ಕೇಂದ್ರಗಳಲ್ಲೂ ಆರೋಗ್ಯ ಸಿಬ್ಬಂದಿಯನ್ನು ನಿಯೋಜಿಸಬೇಕು

    * ಸರ್ಕಾರದ ನಿರ್ದೇಶನದಂತೆ ಅನ್ಯ ಜಿಲ್ಲೆಯ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಅವಕಾಶ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts