More

    ಪ್ರತಿಯೊಬ್ಬರಿಗೂ ಕಾನೂನು ಅರಿವು ಅಗತ್ಯ

    ಗದಗ: ಪ್ರತಿಯೊಬ್ಬರಿಗೂ ಕಾನೂನು ಅರಿವು ಮೂಡಿಸುವುದು ಕಾನೂನು ಸೇವಾ ಪ್ರಾಧಿಕಾರದ ಉದ್ದೇಶವಾಗಿದೆ. ಅರೆಕಾಲಿಕ ಕಾನೂನು ಸ್ವಯಂ ಸೇವಕರು ಪ್ರಾಮಾಣಿಕವಾಗಿ ಕಾರ್ಯನಿರ್ವಹಿಸಬೇಕು ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ಬಸವರಾಜ ಹೇಳಿದರು.
    ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಜಿಲ್ಲಾ ವಕೀಲರ ಸಂಘದ ಆಶ್ರಯದಲ್ಲಿ ನಗರದ ಜಿಲ್ಲಾ ನ್ಯಾಯಾಲಯದ ಎ.ಡಿ.ಆರ್. ಕಟ್ಟಡದಲ್ಲಿ ಶನಿವಾರ ಆಯೋಜಿಸಿದ್ದ ಕಾನೂನು ಸೇವೆಗಳ ಪ್ರಾಧಿಕಾರ ಹಾಗೂ ಎಲ್ಲ ತಾಲೂಕು ಕಾನೂನು ಸೇವಾ ಸಮಿತಿಗಳಿಗೆ ಸೇವೆ ಸಲ್ಲಿಸಲು ಹೊಸದಾಗಿ ನಿಯೋಜನೆಗೊಂಡಿರುವ ಅರೆಕಾಲಿಕ ಕಾನೂನು ಸ್ವಯಂ ಸೇವಕರ ತರಬೇತಿ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
    ಅರೆಕಾಲಿಕ ಸ್ವಯಂ ಸೇವಕರು ಗ್ರಾಮೀಣ ಪ್ರದೇಶದಲ್ಲಿ, ಹಿಂದುಳಿದ ಪ್ರದೇಶಗಳ ಜನರಿಗೆ ಕಾನೂನಿನ ಅರಿವು ಮೂಡಿಸಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಯೋಜನೆಗಳು ಅರ್ಹ ಫಲಾನುಭವಿಗಳಿಗೆ ಪಾರದರ್ಶಕವಾಗಿ ತಲುಪುವಂತೆ ಕಾರ್ಯನಿರ್ವಹಿಸಬೇಕು. ಸ್ವಯಂ ಪ್ರೇರಿತ ಕಾನೂನು ಸೇವಕರು ಯಾವುದೇ ಶುಲ್ಕ, ಸಂಭಾವನೆ ಅಥವಾ ಸಂಬಳವನ್ನು ನಿರೀಕ್ಷಿಸದೇ ತಮ್ಮ ಸುತ್ತಲಿನ ಪ್ರದೇಶದಲ್ಲಿರುವ ಶೋಷಿತ ಹಾಗೂ ತುಳಿತಕ್ಕೊಳಗಾದ ಜನರ ಸೇವೆ ಮಾಡಬೇಕು ಎಂದರು.
    ರಾಷ್ಟ್ರಮಟ್ಟದಿಂದ ಹಿಡಿದು ತಾಲೂಕು ಮಟ್ಟದವರೆಗೆ ಕಾನೂನು ಸೇವಾ ಪ್ರಾಧಿಕಾರ, ಸಮಿತಿಗಳು ಕಾರ್ಯನಿರ್ವಹಿಸುತ್ತಿವೆ. ನ್ಯಾಯಾಲಯಗಳಲ್ಲಿ ಪ್ರಕರಣ ದಾಖಲಿಸಿ ಪ್ರಕರಣ ನಡೆಸಲು ಆರ್ಥಿಕ ತೊಂದರೆ ಅನುಭವಿಸುತ್ತಿರುವ ಜನರಿಗೆ ಉಚಿತ ಕಾನೂನು ಅರಿವು, ಸಲಹೆ ನೀಡುವುದರ ಜತೆಗೆ ಅವರ ಪ್ರಕರಣವನ್ನು ಉಚಿತವಾಗಿ ನಡೆಸಲು ಇರುವ ಪ್ರಾಧಿಕಾರದ ವ್ಯವಸ್ಥೆಯ ಬಗ್ಗೆ ಜನರಿಗೆ ಅರಿವು ಮೂಡಿಸಲಾಗುತ್ತಿದೆ. ಸಮಾಜದ ಕಟ್ಟಕಡೆಯ ವ್ಯಕ್ತಿಗೆ, ಅಸಹಾಯಕರಿಗೆ ಉಚಿತ ಕಾನೂನು ಅರಿವು ಮತ್ತು ನೆರವು ತಲುಪುವಂತೆ ನೋಡಿಕೊಳ್ಳುವುದು ಪಿಎಲ್​ವಿಗಳ ಕರ್ತವ್ಯವಾಗಿದೆ ಎಂದು ಬಸವರಾಜ ಹೇಳಿದರು.
    ಅಧ್ಯಕ್ಷತೆ ವಹಿಸಿದ್ದ ಅಪರ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶ ರಾಜೇಶ್ವರ ಮಾತನಾಡಿ, ಸಾರ್ವಜನಿಕರಿಗೆ ತಮ್ಮ ಮಕ್ಕಳನ್ನು ಕಡ್ಡಾಯವಾಗಿ ಶಾಲೆಗೆ ಕಳುಹಿಸುವಂತೆ ತಿಳಿವಳಿಕೆ ನೀಡಬೇಕು. ಕೆಳವರ್ಗದಲ್ಲಿರುವವರನ್ನು ಮುಖ್ಯ ವಾಹಿನಿಗೆ ತರುವುದು, ಜನರ ಸಮಸ್ಯೆಗಳು ಇದ್ದರೆ ಅವರಿಗೆ ಕಾನೂನು ಸೇವೆಗಳ ಪ್ರಾಧಿಕಾರಕ್ಕೆ ಸಂರ್ಪಸಲು ತಿಳಿಸಬೇಕು ಎಂದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts