More

    ಪ್ರತಿ ತಾಲೂಕಿನಲ್ಲಿ ಟಾಸ್ಕ್‌ಪೋರ್ಸ್, ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಭರವಸೆ, ಜಿಲ್ಲಾಮಟ್ಟದ ಕುಡಿಯುವ ನೀರಿನ ಟಾಸ್ಕ್‌ಪೋರ್ಸ್ ಸಮಿತಿ ಸಭೆ

    ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಪ್ರತಿ ತಾಲೂಕಿನಲ್ಲಿ ತಹಸೀಲ್ದಾರ್ ನೇತೃತ್ವದಲ್ಲಿ ಟಾಸ್ಕ್‌ಪೋರ್ಸ್ ಸಮಿತಿ ಸಭೆ ನಡೆಸಿ ಶೀಘ್ರ ಹಣ ಬಿಡುಗಡೆಗೆ ಕ್ರಮಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಹೇಳಿದರು.

    ದೇವನಹಳ್ಳಿ ತಾಲೂಕು ಜಿಪಂ ಕಚೇರಿ ಸಭಾಂಗಣದಲ್ಲಿ ಹಮ್ಮಿಕೊಂಡಿದ್ದ ಜಿಲ್ಲಾಮಟ್ಟದ ಕುಡಿಯುವ ನೀರಿನ ಟಾಸ್ಕ್‌ಪೋರ್ಸ್ ಸಮಿತಿ ಸಭೆಯಲ್ಲಿ ಮಾತನಾಡಿದರು. ಬೇಸಿಗೆ ಆರಂಭವಾಗುವುದರಿಂದ ಜಿಲ್ಲೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಉಂಟಾಗುವ ಸಾಧ್ಯತೆಯಿರುವುದರಿಂದ ಅಧಿಕಾರಿಗಳು ಮುನ್ನೆಚ್ಚರಿಕೆವಹಿಸಬೇಕು ಎಂದರು.

    ಜಿಲ್ಲಾಡಳಿತದಿಂದ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ಅಗತ್ಯ ಅನುದಾನ ಬಿಡುಗಡೆ ಮಾಡಲಾಗುವುದು ಹಾಗೂ ಕುಡಿಯುವ ನೀರಿನ ಬವಣೆ ಕುರಿತು ಸರ್ಕಾರದ ಗಮನಕ್ಕೆ ತರಲಾಗುವುದು ಎಂದು ತಿಳಿಸಿದರು.

    ಜಿಲ್ಲೆಯಲ್ಲಿ ಶಾಶ್ವತ ನೀರಾವರಿ ಮೂಲಗಳು ಇಲ್ಲ. ನೀರಿನ ಸಮಸ್ಯೆ ನಿವಾರಣೆಗೆ, ಟ್ಯಾಂಕರ್ ಮೂಲಕ ಕುಡಿಯುವ ನೀರು ಸರಬರಾಜು ಮಾಡುವುದು ಅಪಾಯಕಾರಿ ಎಂದು ಸರ್ಕಾರ ತಿಳಿಸಿದೆ ಎಂದು ಜಿಪಂ ಅಧ್ಯಕ್ಷ ವಿ.ಪ್ರಸಾದ್ ಹೇಳಿದರು.

    ಕಳೆದ ಆರ್ಥಿಕ ವರ್ಷದಲ್ಲಿ ನೀರು ಸರಬರಾಜು ಮಾಡುವವರಿಗೆ ಅನುದಾನ ಬಿಡುಗಡೆ ಮಾಡದಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. ಈ ಬಗ್ಗೆ ಮುನ್ನೆಚ್ಚರಿಕೆ ವಹಿಸಬೇಕಿದೆ ಎಂದರು.

    ಜಿಪಂ ಸಿಇಒ ಎಂ.ಆರ್.ರವಿಕುಮಾರ್ ಮಾತನಾಡಿ, ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳನ್ನು ಗುರುತಿಸಲಾಗುತ್ತಿದ್ದು, ಅಂತಹ ಗ್ರಾಮಗಳಲ್ಲಿ ಸರ್ಕಾರಿ ಪ್ರದೇಶದಲ್ಲಿ ಕೊಳವೆಬಾವಿ ಕೊರೆಸಲು ಜಾಗ ಗುರುತಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದರು.
    14 ಮತ್ತು 15 ನೇ ಹಣಕಾಸು ಆಯೋಗದ ಅನುದಾನದಲ್ಲಿ ಪ್ರತಿ ಗ್ರಾಪಂಗಳಿಗೆ ಶೇ.25 ಹಣವನ್ನು ಕುಡಿಯುವ ನೀರು ಪೂರೈಕೆಗೆ ಬಳಸಲು ಅವಕಾಶವಿದೆ. ತಾಪಂ ಇಒ ಮತ್ತು ಪಿಡಿಒಗಳು ಈ ಮೂಲಕ ನೀರಿನ ಸಮಸ್ಯೆ ಬಗೆಹರಿಸಲು ಕ್ರಮಕೈಗೊಳ್ಳಬೇಕು ಎಂದರು.

    ಹೊಸಕೋಟೆಯ ದೊಡ್ಡಕೆರೆಯಲ್ಲಿ ನೀರಿನಮಟ್ಟ ಇಳಿಕೆಯಾಗುತ್ತಿದ್ದು, ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಶೀಘ್ರವೇ ಕೆರೆಗೆ ನೀರು ತುಂಬಿಸುವ ಕಾರ್ಯ ಮಾಡಬೇಕು ಹಾಗೂ ಜಿಲ್ಲಾಡಳಿತದ ವತಿಯಿಂದ ಕೊಳವೆಬಾವಿ ಕೊರೆಯಲು ಅನುಮತಿ ನೀಡಬೇಕು.
    ಶರತ್‌ಬಚ್ಚೇಗೌಡ
    ಹೊಸಕೋಟೆ ಶಾಸಕ

    ದೇವನಹಳ್ಳಿ ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ನಿವಾರಣೆಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವ ವ್ಯವಸ್ಥೆ ಮಾಡಬೇಕು ಹಾಗೂ ಅಗತ್ಯವಿರುವ ಅನುದಾನವನ್ನು ಬಿಡುಗಡೆ ಮಾಡಬೇಕು.
    ನಿಸರ್ಗ ನಾರಾಯಣಸ್ವಾಮಿ
    ದೇವನಹಳ್ಳಿ ಶಾಸಕ

    ದೊಡ್ಡಬಳ್ಳಾಪುರ ತಾಲೂಕಿನ 95 ಹಳ್ಳಿಗಳಲ್ಲಿ ನೀರಿನ ಸಮಸ್ಯೆ ಇದ್ದು, ನೀರು ಸರಬರಾಜಿಗೆ ಆರ್ಥಿಕ ಸಂಕಷ್ಟ ಎದುರಾಗಿದೆ, ಜಾನುವಾರುಗಳಿಗೂ ನೀರು ಸಿಗುತ್ತಿಲ್ಲ. ಈ ಕುರಿತು ಅಧಿಕಾರಿಗಳು ಸರ್ಕಾರದ ಗಮನಕ್ಕೆ ತಂದು ಕೊಳವೆಬಾವಿ ಕೊರೆಸಲು ಅನುಮತಿ ನೀಡುವ ಕೆಲಸ ಮಾಡಬೇಕು.
    ಟಿ.ವೆಂಕಟರಮಣಯ್ಯ
    ದೊಡ್ಡಬಳ್ಳಾಪುರ ಶಾಸಕ

    ಗ್ರಾಮೀಣ ಪ್ರದೇಶದಲ್ಲಿ ಕುಡಿಯುವ ನೀರಿನ ಸಮಸ್ಯೆ ಹೆಚ್ಚಾಗಿದ್ದು, ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುವಂತಾಗಿದೆ, ನಗರಸಭೆಯಿಂದ ಹಣಕಾಸು ನೆರವು ಸಿಗದಿರುವುದರಿಂದ ಶೀಘ್ರ ಅನುದಾನ ಬಿಡುಗಡೆ ಮಾಡಬೇಕು.
    ಡಾ.ಕೆ.ಶ್ರೀನಿವಾಸಮೂರ್ತಿ, ನೆಲಮಂಗಲ ಶಾಸಕ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts