More

    ಬಿತ್ತನೆ ಬೀಜಕ್ಕೆ ಮುಗಿಬಿದ್ದ ರೈತರು

    ಹುಕ್ಕೇರಿ: ಕರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸರ್ಕಾರ ಹಗಲಿರುಳು ಶ್ರಮಿಸುತ್ತಿದ್ದರೆ, ಕೆಲವೆಡೆ ಕೋವಿಡ್ ನಿಯಂತ್ರಣ ಮಾರ್ಗಸೂಚಿ ಸ್ಪಷ್ಟ ಉಲ್ಲಂಘನೆಯಾಗುತ್ತಿರುವುದು ಜನರ ಆಕ್ರೋಶಕ್ಕೆ ಕಾರಣವಾಗುತ್ತಿದೆ. ಕರೊನಾ ನಿಯಂತ್ರಣಕ್ಕಾಗಿ ಸರ್ಕಾರ ಹಲವು ಮಾರ್ಗಸೂಚಿ ಪ್ರಕಟಿಸಿದೆ.

    ಶನಿವಾರ, ಭಾನುವಾರ ಜಿಲ್ಲಾಡಳಿತ ಸಂಪೂರ್ಣ ಲಾಕ್‌ಡೌನ್ ಘೋಷಿಸಿದೆ. ಆದರೆ, ಹುಕ್ಕೇರಿ ಪಟ್ಟಣ ಮತ್ತು ಗ್ರಾಮೀಣ ಭಾಗದಲ್ಲಿ ಮಾತ್ರ ಸರ್ಕಾರದ ನಿಯಮಗಳನ್ನು ಗಾಳಿಗೆ ತೂರಿ ಕೃಷಿ ಇಲಾಖೆ ಅಧಿಕಾರಿಗಳು ಬಿತ್ತನೆ ಬೀಜ, ರಸಗೊಬ್ಬರ ಮಾರಾಟಕ್ಕೆ ಅವಕಾಶ ಕಲ್ಪಿಸಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಎಡೆಮಾಡಿಕೊಟ್ಟಿದೆ.

    ಸರ್ಕಾರವು ರೈತರ ಅನುಕೂಲಕ್ಕಾಗಿ ಮತ್ತು ಕೋವಿಡ್ ನಿಯಂತ್ರಣ ಮಾರ್ಗಸೂಚಿಗಳ ಪಾಲನೆಗಾಗಿ ಹುಕ್ಕೇರಿ ತಾಲೂಕಿನ 3 ಹೋಬಳಿ ವ್ಯಾಪ್ತಿಯ 42 ಕೇಂದ್ರಗಳಲ್ಲಿ ಬಿತ್ತನೆ ಬೀಜ ಮಾರಾಟ ಮಾಡಲು ಅವಕಾಶ ಕಲ್ಪಿಸಿದೆ. ಆದರೆ, ರೈತರು ಮಾತ್ರ ಮಾಸ್ಕ್ ಧರಿಸದೆ, ದೈಹಿಕ ಅಂತರ ಕಾಪಾಡಿಕೊಳ್ಳದೆ ಬೀಜ ಖರೀದಿಸುತ್ತಿದ್ದಾರೆ. ಆದರೆ, ಕೃಷಿ ಇಲಾಖೆಯ ತಾಲೂಕುಮಟ್ಟದ ಅಧಿಕಾರಿಗಳು ಯಾವುದೇ ಮುಂಜಾಗ್ರತಾ ಕ್ರಮ ಕೈಗೊಳ್ಳುತ್ತಿಲ್ಲ. ಬಿತ್ತನೆ ಬೀಜ ಖರೀದಿಗಾಗಿ ರೈತ ಸಂಪರ್ಕ ಕೇಂದ್ರದಲ್ಲಿ ಗುಂಪು ಗುಂಪಾಗಿ ನಿಲ್ಲುತ್ತಿರುವ ರೈತರಿಗೆ ಅಧಿಕಾರಿಗಳು ತಿಳಿವಳಿಕೆ ನೀಡುತ್ತಿಲ್ಲ. ಅಲ್ಲದೆ, ಬಿತ್ತನೆ ಬೀಜ ದಾಸ್ತಾನು ಇರುವ ಬಗ್ಗೆಯೂ ರೈತರಿಗೆ ಮಾಹಿತಿ ನೀಡುತ್ತಿಲ್ಲ. ಹಾಗಾಗಿಯೇ ರೈತರು ಬಿತ್ತನೆ ಬೀಜದ ಕೊರತೆ ಇದೆ ಎಂದು ಭಾವಿಸಿ ಖರೀದಿಗೆ ಮುಗಿಬಿದ್ದಿದ್ದಾರೆ. ಕೃಷಿ ಇಲಾಖೆ ಅಧಿಕಾರಿಗಳ ತಪ್ಪಿನಿಂದಾಗಿ ಸಾಮಾನ್ಯ ಜನರು ಸಮಸ್ಯೆ ಎದುರಿಸಬೇಕಾಗಿದೆ ಎನ್ನುವ ಆರೋಪ ಕೇಳಿಬಂದಿದೆ.

    ಹಳ್ಳಿಗಳಲ್ಲಿ ಸೋಂಕು ಹರಡಿದರೆ ಯಾರು ಹೊಣೆ?: ಗ್ರಾಮೀಣ ಭಾಗದಲ್ಲಿ ಮೊದಲೇ ಕರೊನಾ ಸೋಂಕು ವ್ಯಾಪಕವಾಗಿ ಹರಡುತ್ತಿದೆ. ಹೀಗಿರುವಾಗ, ಬಿತ್ತನೆ ಬೀಜ ಖರೀದಿಗಾಗಿ ಬರುವ ರೈತರು ಮಾರ್ಗಸೂಚಿ ಪಾಲಿಸುತ್ತಿಲ್ಲ. ಒಂದುವೇಳೆ ಇವರು ಸೋಂಕು ತಗುಲಿಸಿಕೊಂಡು ಗ್ರಾಮಗಳಿಗೆ ತೆರಳಿದಾಗ, ಇತರರಿಗೂ ಹರಡಿದರೆ ಯಾರು ಹೊಣೆ ಎಂಬುದು ಸಾರ್ವಜನಿಕರ ಪ್ರಶ್ನೆ.

    ರೈತ ಸಂಪರ್ಕ ಕೇಂದ್ರಗಳಲ್ಲಿ ಕೋವಿಡ್ ನಿಯಂತ್ರಣದ ಮಾರ್ಗಸೂಚಿಗಳು ಪಾಲನೆಯಾಗದಿರುವ ಕುರಿತು ಮಾಹಿತಿ ಬಂದಿದೆ. ಸಂಬಂಧಿಸಿದ ತಾಲೂಕು ಕೃಷಿ ಅಧಿಕಾರಿಗೆ ಕಾರಣ ಕೇಳಿ ನೋಟಿಸ್ ಜಾರಿ ಮಾಡಲಾಗುವುದು. ರೈತ ಸಂಪರ್ಕ ಕೇಂದ್ರಕ್ಕೆ ಭೇಟಿ ನೀಡಿ ಪರಿಶೀಲಿಸಲಾಗುವುದು.
    | ಡಾ.ಡಿ.ಎಚ್.ಹೂಗಾರ, ತಹಸೀಲ್ದಾರ್

    ಬಿತ್ತನೆ ಬೀಜ, ರಸಗೊಬ್ಬರ ವಿತರಣೆ ಮಾಡುವ ಮುನ್ನ ರೈತ ಸಂಪರ್ಕ ಕೇಂದ್ರಗಳಲ್ಲಿ ಕೃಷಿ ಅಧಿಕಾರಿಗಳು ಮುಂಜಾಗ್ರತಾ ಕ್ರಮ ಕೈಗೊಂಡಿಲ್ಲ.
    ಈ ಕುರಿತು ರೈತರಿಗೆ ತಿಳಿವಳಿಕೆ ನೀಡಿಲ್ಲ. ತಾಲೂಕು ಅಧಿಕಾರಿಗಳ ತಪ್ಪಿನಿಂದಾಗಿ ಜನರು ಸಮಸ್ಯೆ ಎದುರಿಸಬೇಕಾದ ಪರಿಸ್ಥಿತಿ ಬಂದಿದೆ.
    | ಭೀಮಶಿ ಗೋರಖನಾಥ ಪುರಸಭೆ ಸದಸ್ಯ, ಹುಕ್ಕೇರಿ

    | ಬಾಬು ಸುಂಕದ ಹುಕ್ಕೇರಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts