More

    ಬಿತ್ತನೆ ಬೀಜ ವಿತರಣೆ ತ್ವರಿತವಾಗಲಿ – ಸಚಿವ ಸತೀಶ ಜಾರಕಿಹೊಳಿ

    ಬೆಳಗಾವಿ: ಮಳೆಗಾಲ ಆರಂಭಗೊಳ್ಳುತ್ತಿರುವುದರಿಂದ ಜಿಲ್ಲೆಯಲ್ಲಿ ರೈತರಿಗೆ ಬೀಜ-ಗೊಬ್ಬರ ವಿತರಣೆ ಕಾರ್ಯ ಆರಂಭಿಸಬೇಕು ಎಂದು ಲೋಕೋಪಯೋಗಿ ಸಚಿವ ಸತೀಶ ಜಾರಕಿಹೊಳಿ ಸೂಚಿಸಿದರು.

    ಜಿಲ್ಲೆಯ ಅಭಿವೃದ್ಧಿ ಕುರಿತು ಸುವರ್ಣ ವಿಧಾನಸೌಧದಲ್ಲಿ ಮಂಗಳವಾರ ಏರ್ಪಡಿಸಿದ್ದ ಎಲ್ಲ ಇಲಾಖೆಯ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಬೀಜ ಖರೀದಿಗೆ ರೈತರು ಅಲೆಯುವುದನ್ನು ತಪ್ಪಿಸಲು ಆದಷ್ಟು ಸಮೀಪದ ಬೀಜ ಕೇಂದ್ರಗಳಲ್ಲೇ ಲಭಿಸುವಂತೆ ಕ್ರಮ ಕೈಗೊಳ್ಳಬೇಕು. ರೈತರ ಆತ್ಮಹತ್ಯೆ ಪ್ರಕರಣಗಳಿಗೆ ಸಂಬಂಧಿಸಿದಂತೆ ಪರಿಹಾರ ಬಾಕಿ ಇದ್ದರೆ ಕೂಡಲೇ ಬಿಡುಗಡೆ ಮಾಡಬೇಕು. ಆತ್ಮಹತ್ಯೆ ವರದಿಯಾದ ಕೂಡಲೇ ಮರಣೋತ್ತರ ಪರೀಕ್ಷೆ ನಡೆಸಿ ಪರಿಹಾರ ಬಿಡುಗಡೆಗೊಳಿಸಬೇಕು ಎಂದು ಸಲಹೆ ನೀಡಿದರು.

    ಶಿಥಿಲ ಕಟ್ಟಡ ತೆರವಾಗಲಿ: ವಿಪತ್ತು ಸಂದರ್ಭದಲ್ಲಿ ಜಾನುವಾರು ಮೃತಪಟ್ಟಾಗ ಅವುಗಳ ಮಾಲೀಕರಿಗೆ ಅಧಿಕಾರಿಗಳು ಸ್ವತಃ ಮನೆಗೆ ತೆರಳಿ ಪರಿಹಾರ ವಿತರಿಸಬೇಕು. ಪರಿಹಾರ ಪಡೆಯುವ ಪ್ರಕ್ರಿಯೆ ಗೊತ್ತಿಲ್ಲದಿರುವುದರಿಂದ ಅನೇಕ ಜನರು ಪರಿಹಾರ ಪಡೆಯಲು ಮುಂದಾಗುತ್ತಿಲ್ಲ. ಆದ್ದರಿಂದ ಅಧಿಕಾರಿಗಳೇ ಆಸಕ್ತಿ ವಹಿಸಿ ಪರಿಹಾರ ನೀಡಬೇಕು. ಶಾಲೆಗಳು ಆರಂಭಗೊಳ್ಳುತ್ತಿರುವುದರಿಂದ ಅತಿಥಿ ಶಿಕ್ಷಕರ ನೇಮಕ ಪ್ರಕ್ರಿಯೆ ಆರಂಭಿಸಬೇಕು. ಶಿಥಿಲಗೊಂಡಿರುವ ಶಾಲಾ ಕಟ್ಟಡ ತೆರವುಗೊಳಿಸಬೇಕು ಎಂದರು.

    ಉತ್ತಮ ಆಡಳಿತ ನಮ್ಮ ಗುರಿ: ಜಿಲ್ಲೆಯ ಪ್ರತಿಯೊಂದು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಅಗತ್ಯ ಔಷಧಗಳ ದಾಸ್ತಾನು ಇರಬೇಕು. ಬೆಳಗಾವಿಯ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಅಗತ್ಯವಿರುವ ಯಂತ್ರೋಪಕರಣಗಳನ್ನು ಒದಗಿಸಿ ಆದಷ್ಟು ಬೇಗ ಉದ್ಘಾಟನೆಗೆ ಕ್ರಮ ಕೈಗೊಳ್ಳಲಾಗುವುದು. ಜಿಲ್ಲೆಯ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ಅತಿ ಹೆಚ್ಚು ಬಿಪಿಎಲ್ ಕಾರ್ಡ್ ಇರುವ ಕಡೆಗಳಲ್ಲಿ ಪಡಿತರ ಅಂಗಡಿ ಆರಂಭಿಸಲು ಪರವಾನಗಿ ನೀಡಬೇಕು. ಜಿಲ್ಲೆಯಲ್ಲಿ ಕುಡಿಯುವ ನೀರು ಪೂರೈಕೆ ಯೋಜನೆಗಳನ್ನು ಕಾಲಮಿತಿಯಲ್ಲಿ ಪೂರ್ಣಗೊಳಿಸಬೇಕು.

    ಹೊಸ ಸರಕಾರದ ಆಶಯದ ಪ್ರಕಾರ ಅಧಿಕಾರಿಗಳು ಕೆಲಸ ಮಾಡಬೇಕು. ಜನರಿಗೆ ಉತ್ತಮ ಆಡಳಿತ ನೀಡಬೇಕು ಎಂಬುದು ಸರಕಾರದ ಆದ್ಯತೆಯಾಗಿದೆ. ಅಧಿಕಾರಿಗಳು ಚುರುಕಿನಿಂದ ಕೆಲಸ ಮಾಡಬೇಕು. ಕ್ರಿಯಾಶೀಲ ಅಧಿಕಾರಿಗಳಿಗೆ ಕೆಲಸ ಮಾಡಲು ಪ್ರೋತ್ಸಾಹ ನೀಡಲಾಗುವುದು ಎಂದರು.

    ಪೀಠೋಪಕರಣ ಒದಗಿಸಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ಅಂಗವಿಕಲರು, ಹಿರಿಯ ನಾಗರಿಕರ ಸಬಲೀಕರಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಮಾತನಾಡಿ, ಜಿಲ್ಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ರೈತರ ಕುಟುಂಬಗಳಿಗೆ ಪರಿಹಾರ ಬಿಡುಗಡೆಗೆ ಸಂಬಂಧಿಸಿದಂತೆ ಕೆಲ ತಾಂತ್ರಿಕ ಕಾರಣಗಳು ಅಡ್ಡಿಯಾಗುತ್ತಿದ್ದು, ಇಂತಹ ಸಂದರ್ಭಗಳಲ್ಲಿ ತ್ವರಿತವಾಗಿ ಕ್ರಮವಾಗಬೇಕು. ಶಾಲೆಗಳು ಆರಂಭಗೊಳ್ಳುತ್ತಿರುವುದರಿಂದ ಅಗತ್ಯವಿರುವ ಶಾಲೆಗಳಿಗೆ ಡೆಸ್ಕ್ ಮತ್ತಿತರ ಪೀಠೋಪಕರಣ ಒದಗಿಸಬೇಕು ಎಂದು ಅಧಿಕಾರಿಗಳಿಗೆ ತಿಳಿಸಿದರು.

    ನೀರು ಪೂರೈಕೆಗೆ ಕ್ರಮವಾಗಲಿ: ಸಾಂಬ್ರಾದಲ್ಲಿ 3,500 ಬಿಪಿಎಲ್ ಕಾರ್ಡ್‌ದಾರರಿದ್ದು, ಹೆಚ್ಚುವರಿ ಪಡಿತರ ಅಂಗಡಿ ಆರಂಭಿಸಬೇಕು. ಅಂಗನವಾಡಿ ಕೇಂದ್ರಗಳ ಸ್ಥಾಪನೆಗೆ ನಿವೇಶನ ಅಗತ್ಯವಿರುವ ಮಾಹಿತಿಯನ್ನು ಕೂಡಲೇ ಪಡೆದು ತಕ್ಷಣ ನಿವೇಶನ ಒದಗಿಸಲು ಕ್ರಮ ಕೈಗೊಳ್ಳಬೇಕು. ಸಂಭವನೀಯ ಪ್ರವಾಹ ನಿರ್ವಹಣೆಗೆ ಅಗತ್ಯ ಸಿದ್ಧತೆ ಮಾಡಿಕೊಳ್ಳಬೇಕು. ಚಂದನ ಹೊಸೂರ, ಬೆಕ್ಕಿನಕೇರಿ, ಬೆನಕನಹಳ್ಳಿ ಸೇರಿ ಕೆಲವು ಗ್ರಾಮಗಳಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗಿದ್ದು, ಅಧಿಕಾರಿಗಳು ಟ್ಯಾಂಕರ್ ಮೂಲಕ ಕುಡಿಯುವ ಪೂರೈಸಲು ಕ್ರಮ ಕೈಗೊಳ್ಳಬೇಕು ಎಂದರು.

    ಬೈಲಹೊಂಗಲ ಶಾಸಕ ಮಹಾಂತೇಶ ಕೌಜಲಗಿ ಮಾತನಾಡಿ, ಪಿಕೆಪಿಎಸ್ ಮೂಲಕ ಬಿತ್ತನೆ ಬೀಜ ವಿತರಣೆಗೆ ಕ್ರಮ ಕೈಗೊಳ್ಳಬೇಕು. ಸಿಡಿಲು ಬಡಿದು ರೈತರ ಬಣಿವೆ ಸುಟ್ಟಾಗ ನೈಸರ್ಗಿಕ ವಿಪತ್ತು ಮಾರ್ಗಸೂಚಿಯಡಿ ಕೂಡಲೇ ಪರಿಹಾರ ಬಿಡುಗಡೆ ಮಾಡಬೇಕು. ರೇಷ್ಮೆ ಇಲಾಖೆ ಜಂಟಿ ನಿರ್ದೇಶಕರ ಕಚೇರಿಯನ್ನು ಬೆಳಗಾವಿಯಿಂದ ಹಾವೇರಿ ಜಿಲ್ಲೆಗೆ ಸ್ಥಳಾಂತರಿಸಲಾಗಿದೆ. ಆ ಕಚೇರಿಯನ್ನು ಮತ್ತೆ ಬೆಳಗಾವಿಗೆ ಸ್ಥಳಾಂತರಿಸಬೇಕು ಎಂದು ಸಚಿವರನ್ನು ಒತ್ತಾಯಿಸಿದರು.

    ಜಿಲ್ಲಾಧಿಕಾರಿ ನಿತೇಶ ಪಾಟೀಲ ಮಾತನಾಡಿ, ಜಿಲ್ಲೆಯ ರೈತ ಸಂಪರ್ಕ ಕೇಂದ್ರಗಳು ಸೇರಿ 170 ಕೇಂದ್ರಗಳ ಮೂಲಕ ಬಿತ್ತನೆ ಬೀಜ ವಿತರಿಸಲಾಗುತ್ತಿದೆ ಎಂದರು. ಬೆಳಗಾವಿ ಉತ್ತರ ಶಾಸಕ ಆಸೀಫ್ (ರಾಜು) ಸೇಠ್, ಶಿಕ್ಷಕರ ಕೊರತೆ ಇರುವ ಕಡೆಗಳಲ್ಲಿ ಕೂಡಲೇ ಅತಿಥಿ ಶಿಕ್ಷಕರನ್ನು ಭರ್ತಿ ಮಾಡಬೇಕು ಎಂದರು.

    ಕುಡಚಿ ಶಾಸಕ ಮಹೇಂದ್ರ ತಮ್ಮಣ್ಣವರ, ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಸವದತ್ತಿ ಶಾಸಕ ವಿಶ್ವಾಸ ವೈದ್ಯ, ಕಿತ್ತೂರು ಶಾಸಕ ಬಾಬಾಸಾಹೇಬ ಪಾಟೀಲ, ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಡಾ.ಸಾಬಣ್ಣ ತಳವಾರ ಸಭೆಯಲ್ಲಿದ್ದರು. ನೂತನ ಸಚಿವರನ್ನು ಜಿಲ್ಲಾಡಳಿತದ ಪರವಾಗಿ ಸನ್ಮಾನಿಸಲಾಯಿತು. ಜಿಪಂ ಸಿಇಒ ಹರ್ಷಲ್ ಭೋಯರ್, ಡಿಸಿಪಿ ಸ್ನೇಹಾ ಹಾಗೂ ಎಲ್ಲ ಇಲಾಖೆಗಳ ಜಿಲ್ಲಾಮಟ್ಟದ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

    ಬೆಳಗಾವಿ ನಗರದ ಕುಡಿಯುವ ನೀರು ಪೂರೈಕೆ ಸೇರಿ ಇತರ ಪ್ರಮುಖ ವಿಷಯಗಳ ಕುರಿತು ಪ್ರತ್ಯೇಕವಾಗಿ ಸಭೆ ನಡೆಸಿ ಅಗತ್ಯ ಕ್ರಮ ತೆಗೆದುಕೊಳ್ಳಲಾಗುವುದು. ಹೊಸ ಸರ್ಕಾರದ ಆಶಯದ ಪ್ರಕಾರ ಅಧಿಕಾರಿಗಳು ಕೆಲಸ ಮಾಡಬೇಕು.
    | ಸತೀಶ ಜಾರಕಿಹೊಳಿ, ಲೋಕೋಪಯೋಗಿ ಸಚಿವ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts