More

    ಬೀದಿ ನಾಯಿಗಳ ಹಾವಳಿ ನಿಯಂತ್ರಿಸಿ

    ಬೆಳಗಾವಿ: ನಗರದ ವಿವಿಧ ಬಡಾವಣೆಗಳಲ್ಲಿ ಬೀದಿನಾಯಿಗಳ ಹಾವಳಿ ಹೆಚ್ಚುತ್ತಿರುವುದರಿಂದ ಸಾರ್ವಜನಿಕರು ತೊಂದರೆ ಅನುಭವಿಸುವಂತಾಗಿದೆ. 15 ದಿನಗಳ ಒಳಗೆ ಸಮಸ್ಯೆ ಬಗೆಹರಿಸದಿದ್ದರೆ ಎಲ್ಲ ಬೀದಿ ನಾಯಿಗಳನ್ನು ಪಾಲಿಕೆ ಕಚೇರಿಯೊಳಗೆ ಬಿಡಬೇಕಾಗುತ್ತದೆ ಎಂದು ಶಾಸಕ ಅಭಯ ಪಾಟೀಲ ಎಚ್ಚರಿಸಿದ್ದಾರೆ.

    ಪಾಲಿಕೆ ಸಭಾಂಗಣದಲ್ಲಿ ಶುಕ್ರವಾರ ಹಮ್ಮಿಕೊಂಡಿದ್ದ ಅಧಿಕಾರಿಗಳೊಂದಿಗೆ ಸಭೆಯಲ್ಲಿ ಮಾತನಾಡಿದ ಅವರು, ಕ್ಷೇತ್ರದಲ್ಲಿ ಪ್ರವಾಸ ಕೈಗೊಂಡಿರುವ ಸಂದರ್ಭದಲ್ಲಿ ಜನರು ಬೀದಿನಾಯಿಗಳ ಹಾವಳಿ ಹೆಚ್ಚಾಗಿರುವ ಕುರಿತು ದೂರು ನೀಡುತ್ತಿದ್ದಾರೆ. ಹಾಗಾಗಿ, ಪಾಲಿಕೆ ಸಿಬ್ಬಂದಿ ಬೀದಿನಾಯಿಗಳ ಹಾವಳಿ ತಡೆಗಟ್ಟಲು ಈಗಿನಿಂದಲೇ ಕ್ರಮಕ್ಕೆ ಮುಂದಾಗಬೇಕು. ನಾಯಿಗಳ ಸ್ಥಳಾಂತರಕ್ಕೆ ಕ್ರಮ ವಹಿಸಬೇಕು ಎಂದರು.
    ಪಾಲಿಕೆ ವ್ಯಾಪ್ತಿಯ ವಾರ್ಡ್‌ಗಳಲ್ಲಿ ಜನರಿಗೆ ಸಮರ್ಪಕವಾಗಿ ಕುಡಿಯುವ ನೀರು ಪೂರೈಕೆಯಾಗುತ್ತಿಲ್ಲ. ಕೆಲವು ಕಡೆ ವಾರಕ್ಕೊಮ್ಮೆ ನೀರು ಪೂರೈಕೆ ಮಾಡಲಾಗುತ್ತಿದೆ. ಇದರಿಂದಾಗಿ ಜನರು ಕುಡಿಯುವ ನೀರಿಗಾಗಿ ಅಲೆದಾಡಬೇಕಾಗಿದೆ. ಕುಡಿಯುವ ನೀರು ಪೂರೈಕೆ ಕುರಿತು ವಿಚಾರಿಸಲು ಜನರು ಕರೆ ಮಾಡಿದರೆ ಏಕೆ ಸ್ಪಂದಿಸುತ್ತಿಲ್ಲ? ಎಂದು ಎಲ್ ಆ್ಯಂಡ್ ಟಿ ಕಂಪನಿ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ನಗರಕ್ಕೆ ಸಮರ್ಪಕವಾಗಿ ನೀರು ಪೂರೈಸಬೇಕು. ಇಲ್ಲದಿದ್ದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.

    ಹಲವು ದಿನಗಳಿಂದ ಜನರು ಕುಡಿಯುವ ನೀರು, ಬೀದಿ ದೀಪ ಸೇರಿ ಜನರ ವಿವಿಧ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಸಾರ್ವಜನಿಕರ ಕೆಲಸಗಳು ಪಾಲಿಕೆಯಲ್ಲಿ ಸಮಯಕ್ಕೆ ಸರಿಯಾಗಿ ಆಗುತ್ತಿಲ್ಲ. ಪಾಲಿಕೆ ಅಧಿಕಾರಿಗಳು ಜನರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು. ಯಾರಿಗೆ ಕೆಲಸ ಮಾಡಲು ಆಸಕ್ತಿ ಇಲ್ಲವೋ, ಅಂತಹವರು ವರ್ಗಾವಣೆ ಮಾಡಿಕೊಳ್ಳಬೇಕು. ಇಲ್ಲದಿದ್ದರೆ ಸರ್ಕಾರದ ಮೇಲೆ ಒತ್ತಡ ತಂದು ನಾವೇ ವರ್ಗಾವಣೆ ಮಾಡಿಸಬೇಕಾಗುತ್ತದೆ ಎಂದರು. ಶಾಸಕ ಅಭಯ ಪಾಟೀಲ ಪ್ರತಿ ಭಾನುವಾರ ದಕ್ಷಿಣ ಕ್ಷೇತ್ರದಲ್ಲಿ ಸೈಕಲ್ ಮೇಲೆ ಸಂಚರಿಸುವಾಗ ಜನರು ಹೇಳಿಕೊಂಡ ಸಮಸ್ಯೆಗಳನ್ನು ಸಭೆಯಲ್ಲಿ ಪ್ರಸ್ತಾಪಿಸಿದರು. ತ್ವರಿತವಾಗಿ ಸಮಸ್ಯೆ ಬಗೆಹರಿಸಬೇಕು. ಸರ್ಕಾರದ ಯೋಜನೆಗಳನ್ನು ಜನರಿಗೆ ಮುಟ್ಟಿಸುವ ಕೆಲಸ ಮಾಡಬೇಕು ಎಂದು ಸೂಚಿಸಿದರು. ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ ಮಾತನಾಡಿ, ಜನರ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಲು ಅಧಿಕಾರಿಗಳಿಗೆ ಸೂಚನೆ ನೀಡಲಾಗುವುದು. ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾಗದಂತೆ ಎಲ್ ಆ್ಯಂಡ್ ಟಿ ಕಂಪನಿ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗುವುದು ಎಂದರು. ಪಾಲಿಕೆ ಸದಸ್ಯರು, ಅಧಿಕಾರಿಗಳು ಇತರರು ಇದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts