More

    ಬೆಲೆ ಸಿಗದೆ ಚಿಂತೆಗೀಡಾದ ರೈತರು

    ಸಂತೋಷ ಮುರಡಿ ಮುಂಡರಗಿ

    ತಾಲೂಕಿನ ಪ್ರಮುಖ ಬೆಳೆಗಳಲ್ಲಿ ಒಂದಾದ ಗೋವಿನಜೋಳಕ್ಕೆ ಮಾರುಕಟ್ಟೆಯಲ್ಲಿ ಉತ್ತಮ ಬೆಲೆ ಸಿಗದೆ ರೈತರು ಸಂಕಷ್ಟ ಎದುರಿಸಬೇಕಾಗಿದೆ. ಒಂದೆಡೆ ಅತಿವೃಷ್ಟಿ ಮತ್ತೊಂದೆಡೆ ಬೆಳೆಗೆ ಉತ್ತಮ ಬೆಲೆ ಇಲ್ಲದಿರುವುದು ರೈತರನ್ನು ಚಿಂತೆಗೀಡು ಮಾಡಿದೆ.

    ತಾಲೂಕಿನಲ್ಲಿ ಮುಂಗಾರು ಹಂಗಾಮಿನಲ್ಲಿ ಖುಷ್ಕಿ ಮತ್ತು ನೀರಾವರಿ ಪ್ರದೇಶ ಸೇರಿ ಒಟ್ಟು 20,197 ಹೆಕ್ಟೇರ್ ಹಾಗೂ ಹಿಂಗಾರು ಹಂಗಾಮಿನಲ್ಲಿ ನೀರಾವರಿ ಭೂಮಿಯಲ್ಲಿ 2538 ಹೆಕ್ಟೇರ್ ಪ್ರದೇಶದಲ್ಲಿ ಗೋವಿನಜೋಳ ಬಿತ್ತನೆ ಮಾಡಲಾಗಿತ್ತು. ಮುಂಗಾರು ಹಂಗಾಮಿನ ಬೆಳೆಯನ್ನು ಬಹುತೇಕ ಮಾರಾಟ ಮಾಡಲಾಗಿದ್ದು, ಉತ್ತಮ ಬೆಲೆ ನಿರೀಕ್ಷೆಯಲ್ಲಿ ಕೆಲವರು ಇನ್ನೂ ಸಂಗ್ರಹಿಸಿಟ್ಟಿದ್ದಾರೆ.

    ಕಳೆದ ವರ್ಷ ಪಟ್ಟಣದ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಗೋವಿನಜೋಳಕ್ಕೆ 1600ರಿಂದ 1800ರೂ.ವರೆಗೆ ಮಾರಾಟಯಾಗಿತ್ತು. ಸದ್ಯ ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ 1280ರಿಂದ 1360 ರೂ.ವರೆಗೆ ಗೋವಿನಜೋಳ ಮಾರಾಟವಾಗುತ್ತಿದೆ. ಇದರಿಂದ ರೈತನಿಗೆ ಉತ್ತಮ ಬೆಲೆ ಸಿಗದೆ ಪರದಾಡುವಂತಾಗಿದೆ.

    ಖರೀದಿ ಕೇಂದ್ರ ಪ್ರಾರಂಭಿಸಿ: ಸರ್ಕಾರದಿಂದ ಪ್ರತಿ ಕ್ವಿಂಟಾಲ್ ಗೋವಿನಜೋಳಕ್ಕೆ 1850 ರೂ. ಬೆಂಬಲ ಬೆಲೆ ನಿಗದಿ ಮಾಡಲಾಗಿದೆ. ಆದರೆ, ಈವರೆಗೂ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆದಿಲ್ಲ. ಸರ್ಕಾರ ಖರೀದಿ ಕೇಂದ್ರ ಪ್ರಾರಂಭಿಸಬೇಕು ಎನ್ನುವುದು ರೈತರ ಒತ್ತಾಯವಾಗಿದೆ. ಬೆಂಬಲ ಬೆಲೆ ಖರೀದಿ ಕೇಂದ್ರವನ್ನು ಪ್ರಾರಂಭಿಸಿದರೆ ರೈತರಿಗೆ ನೆರವಾಗಲಿದೆ.

    ಗೋವಿನಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯುವ ಬಗ್ಗೆ ಎಪಿಎಂಸಿ ಕಾರ್ಯದರ್ಶಿ ಹಾಗೂ ಜಿಲ್ಲಾಧಿಕಾರಿ ಜತೆ ರ್ಚಚಿಸಿ ಸೂಕ್ತ ಕ್ರಮ ಕೈಗೊಳ್ಳಲಾಗುವುದು. | ಆಶಪ್ಪ ಪೂಜಾರಿ ತಹಸೀಲ್ದಾರ್ ಮುಂಡರಗಿ

    ರೈತರೆಲ್ಲ ಕಷ್ಟಪಟ್ಟು ಗೋವಿನಜೋಳ ಬೆಳೆದಿದ್ದಾರೆ. ಮಾರುಕಟ್ಟೆಯಲ್ಲಿ ಉತ್ತಮ ಬೆಲೆಗಾಗಿ ಕಾಯುವಂತಾಗಿದೆ. ಸರ್ಕಾರ ಗೋವಿನಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯುವ ಮೂಲಕ ರೈತರ ನೆರವಿಗೆ ಬರಬೇಕು. | ಶಿವಾನಂದ ಇಟಗಿ ರೈತ ಸಂಘದ ಜಿಲ್ಲಾಧ್ಯಕ್ಷ

    ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಈಗಾಗಲೇ ಗೋವಿನಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ ತೆರೆಯುವ ಕುರಿತು ಟಾಸ್ಕ್​ಫೋರ್ಸ್ ಸಭೆ ನಡೆಸಲಾಗಿದೆ. ಸಭೆಯ ವರದಿಯನ್ನು ಸರ್ಕಾರಕ್ಕೆ ಕಳುಹಿಸಲಾಗಿದೆ. ಸರ್ಕಾರದಿಂದ ಅನುಮೋದನೆ ದೊರೆತ ನಂತರ ಖರೀದಿ ಕೇಂದ್ರ ತೆರೆಯಲಾಗುತ್ತದೆ. | ಆರ್.ಎಸ್. ರಾಠೋಡ್ ಎಪಿಎಂಸಿ ಕಾರ್ಯದರ್ಶಿ ಮುಂಡರಗಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts