More

    ಬೆಳಗಾವಿಯಲ್ಲಿ ಅಧಿವೇಶನ ನಡೆಸಿ – ಬಸವರಾಜ ಹೊರಟ್ಟಿ

    ಬೆಳಗಾವಿ: ಉತ್ತರ ಕರ್ನಾಟಕದ ಶಕ್ತಿಸೌಧವಾಗಿರುವ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಅಧಿವೇಶನ ನಡೆಸುವ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರಿಗೆ ಪತ್ರ ಬರೆದಿದ್ದೇನೆ ಎಂದು ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

    ನಗರದ ಪ್ರವಾಸಿ ಮಂದಿರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, 2018ರ ಡಿಸೆಂಬರ್ ಬಳಿಕ ಈವರೆಗೂ ಬೆಳಗಾವಿಯಲ್ಲಿ ಅಧಿವೇಶನ ನಡೆದಿಲ್ಲ. ಉತ್ತರ ಕರ್ನಾಟಕದಲ್ಲಿ ಸಾಕಷ್ಟು ಸಮಸ್ಯೆಗಳಿದ್ದು, ಅವುಗಳ ಕುರಿತು ಚರ್ಚಿಸಲು ಬೆಳಗಾವಿಯಲ್ಲಿಯೇ ವಿಧಾನಮಂಡಲ ಅಧಿವೇಶನ ನಡೆಸಲು ಸಿಎಂಗೆ 15 ದಿನಗಳ ಹಿಂದೆ ಪತ್ರದ ಮೂಲಕ ಮನವಿ ಮಾಡಿದ್ದೇನೆ. ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ತೀರ್ಮಾನಿಸುವುದಾಗಿ ಸಿಎಂ ತಿಳಿಸಿದ್ದಾರೆ. ಆದರೆ, ಇಲ್ಲಿಯವರೆಗೂ ಯಾವಾಗ ಅಧಿವೇಶನ ನಡೆಸುತ್ತಾರೆ ಎಂಬ ಮಾಹಿತಿ ಇಲ್ಲ ಎಂದರು.

    ನಾನು ಉತ್ತರ ಕರ್ನಾಟಕದವನು. ವಿಧಾನಸಭೆ ಸಭಾಧ್ಯಕ್ಷ, ಉಪಸಭಾಧ್ಯಕ್ಷ, ಗೃಹ ಸಚಿವ ಬಸವರಾಜ ಬೊಮ್ಮಾಯಿ, ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹಾಗೂ ಪ್ರಮುಖ ಖಾತೆಗಳ ಸಚಿವರು ಉತ್ತರ ಕರ್ನಾಟಕದವರು. ಈ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಅಧಿವೇಶನ ನಡೆದರೆ ಉತ್ತರ ಕರ್ನಾಟಕದ ಸಮಸ್ಯೆ ಚರ್ಚಿಸಬೇಕೆಂಬ ಆಸೆ ನಮ್ಮದಿದೆ. ಅಧಿವೇಶನ ಮಾಡಿ ಎಂದು ನಿರ್ದೇಶನ ಕೊಡುವ ಅಧಿಕಾರ ನಮಗಿಲ್ಲ. ಸಂಪುಟ ಕೈಗೊಳ್ಳುವ ತೀರ್ಮಾನಕ್ಕೆ ನಾವು ಬದ್ಧ. ಸದ್ಯ ಜುಲೈ ಅಂತ್ಯದಲ್ಲಿ ಅಥವಾ ಆಗಸ್ಟ್ ಮೊದಲ ವಾರದಲ್ಲಿ ಅಧಿವೇಶನ ಕರೆಯಬಹುದು ಎಂದು ಸಲಹೆ ನೀಡಿದರು.

    ಬಿಎಸ್‌ವೈಗೆ ಮನವಿ ಮಾಡುವೆ: ಅತಿವೃಷ್ಟಿ, ಕೋವಿಡ್-19, ಲಾಕ್‌ಡೌನ್ ಇನ್ನಿತರ ಕಾರಣದಿಂದಾಗಿ ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ ಮೂರು ವರ್ಷದಿಂದ ಅಧಿವೇಶನ ನಡೆದಿಲ್ಲ. ಈಗಾಗಲೇ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಹಾಗೂ ಸಂಸದೀಯ ವ್ಯವಹಾರಗಳ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಬೆಳಗಾವಿಯಲ್ಲಿ ಅಧಿವೇಶನ ನಡೆಸುವಂತೆ ವಿನಂತಿ ಮಾಡಿರುವೆ. ಕರೊನಾ 2ನೇ ಅಲೆ ತಗ್ಗಿದ ಬಳಿಕ ಮಾಡೋಣ ಅಂತ ಹೇಳಿದ್ದಾರೆ.

    ಮುಂದಿನ ವಾರದಲ್ಲಿ ಮತ್ತೆ ಸಿಎಂ ಯಡಿಯೂರಪ್ಪ, ಬೊಮ್ಮಾಯಿ ಅವರನ್ನು ಭೇಟಿ ಮಾಡಿ ಅಧಿವೇಶನ ಮಾಡುವಂತೆ ಮನವಿ ಮಾಡಲಾಗುವುದು. ಕರೊನಾ ಇರುವುದರಿಂದ ಅಧಿಕಾರಿಗಳು ಹಿಂದೇಟು ಹಾಕುತ್ತಿದ್ದಾರೆ ಎಂದು ವಿಧಾನ ಪರಿಷತ್ ಆಡಳಿತ ಪಕ್ಷದ ಮುಖ್ಯ ಸಚೇತಕ ಮಹಾಂತೇಶ ಕವಟಗಿಮಠ ಹೇಳಿದರು.

    ಕೋವಿಡ್-19 ನೆಪದಲ್ಲಿ ಮಕ್ಕಳನ್ನು ಕಲಿಕೆಯಿಂದ ದೂರ ಮಾಡುವುದು ಸರಿ ಅಲ್ಲ. ಪ್ರಾಥಮಿಕ ಹಂತದಿಂದ ಪಿಯುಸಿವರೆಗೆ ಹಂತ ಹಂತವಾಗಿ ತರಗತಿ ನಡೆಸುವುದು ಸೂಕ್ತ. ಈ ಕುರಿತು ಸರ್ಕಾರಕ್ಕೆ ಪತ್ರದ ಮೂಲಕ ತಿಳಿಸಿದ್ದೇನೆ. ಅಧಿಕಾರಿಗಳು ಕಾಳಜಿ ವಹಿಸಿದರೆ ಮಕ್ಕಳಿಗೆ ಅನುಕೂಲವಾಗುತ್ತದೆ. ಆನ್‌ಲೈನ್ ತರಗತಿಗಳಿಂದ ಮಕ್ಕಳ ಶೈಕ್ಷಣಿಕ ಭವಿಷ್ಯ ಹಾಳಾಗುತ್ತದೆ.
    | ಬಸವರಾಜ ಹೊರಟ್ಟಿ, ವಿಧಾನ ಪರಿಷತ್ ಸಭಾಪತಿ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts