More

    ಭೂ ಸುಧಾರಣೆ ಕಾಯ್ದೆ ತಿದ್ದುಪಡಿಗೆ ಖಂಡನೆ

    ಹುಬ್ಬಳ್ಳಿ: ಭೂ ಸುಧಾರಣೆ ಕಾಯ್ದೆ ತಿದ್ದುಪಡಿ ಮಾಡುವ ಸರ್ಕಾರದ ಕ್ರಮ ಖಂಡಿಸಿ ಭಾರತೀಯ ಕಿಸಾನ್ ಸಂಘದ ವತಿಯಿಂದ ನಗರದಲ್ಲಿ ಸೋಮವಾರ ಪ್ರತಿಭಟನೆ ನಡೆಸಲಾಯಿತು.

    ಇಲ್ಲಿನ ಮಿನಿ ವಿಧಾನಸೌಧ ಎದುರು ಜಮಾಯಿಸಿದ ಪ್ರತಿಭಟನಾಕಾರರು ಸರ್ಕಾರದ ಆದೇಶ ಪ್ರತಿಗಳನ್ನು ಸುಟ್ಟು ಆಕ್ರೋಶ ವ್ಯಕ್ತಪಡಿಸಿದರು. ಆದೇಶ ವಾಪಸ್ ಪಡೆಯುವಂತೆ ಆಗ್ರಹಿಸಿ ತಹಸೀಲ್ದಾರ್ ಮೂಲಕ ರಾಷ್ಟ್ರಪತಿಗೆ ಮನವಿ ಪತ್ರ ಸಲ್ಲಿಸಿದರು. ವಿದೇಶಿ ಬಂಡವಾಳಶಾಹಿ ಮತ್ತು ದೇಶದ ಬೃಹತ್ ಕಾರ್ಪೆರೇಟ್ ಕಂಪನಿಗಳ ಹಿತಾಸಕ್ತಿಗೆ ಮಣಿದು ರೈತರ ಜಮೀನನ್ನು ಕಬಳಿಸಲು ರತ್ನಗಂಬಳಿ ಹಾಕುವ ಸಲುವಾಗಿ 1961ರ ಭೂ ಸುಧಾರಣೆ ಕಾಯ್ದೆಯಲ್ಲಿನ 79 ಎಬಿಸಿ ಮತ್ತು 80ನೇ ಕಲಂಗಳನ್ನು ರದ್ದುಗೊಳಿಸಿ ಕೃಷಿ ಭೂಮಿ ಖರೀದಿ ಮಿತಿ ಹೆಚ್ಚುಗೊಳಿಸಲು ಕಲಂ 63ಕ್ಕೂ ಬದಲಾವಣೆ ತಂದಿರುವ ರಾಜ್ಯ ಸರ್ಕಾರದ ಇತ್ತೀಚಿನ ತೀರ್ವನವನ್ನು ಸಂಘ ಖಂಡಿಸುತ್ತದೆ. ಸರ್ಕಾರದ ಈ ನಿರ್ಧಾರದಿಂದ ಕೃಷಿ ಕ್ಷೇತ್ರ ವಿನಾಶದ ಅಂಚಿನತ್ತ ತಲುಪುತ್ತದೆ. ಕೃಷಿ ತಜ್ಞರು, ಪರಿಣತರು, ರೈತ ಸಂಘಟನೆಗಳು ಹಾಗೂ ಸಾಮಾಜಿಕ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೇ ಸದನದ ಕಲಾಪಗಳೂ ಇಲ್ಲದ ಸಂಕಷ್ಟದ ಕಾಲದಲ್ಲಿ ಏಕಾಏಕಿ ಕಾಯ್ದೆ ತರಲು ಹೊರಟಿರುವುದು ಸರಿಯಲ್ಲ. ಕೂಡಲೆ ಸರ್ಕಾರ ರೈತ ವಿರೋಧಿ ಕ್ರಮ ಕೈಬಿಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದ್ದಾರೆ. ಸಂಘದ ಉತ್ತರ ಪ್ರಾಂತ ಸಂಘಟನೆ ಕಾರ್ಯದರ್ಶಿ ಪುಟ್ಟಸ್ವಾಮಿ, ಜಿಲ್ಲಾ ಘಟಕದ ಅಧ್ಯಕ್ಷ ವಿವೇಕ ಮೋರೆ, ಕಾರ್ಯದರ್ಶಿ ಡಿ.ಸಿ ರಂಗಾರೆಡ್ಡಿ, ಗೋಪಾಲ ದಿವಟೆ, ಇತರರಿದ್ದರು.

    ಅನಿರ್ದಿಷ್ಟಾವಧಿ ಧರಣಿ ಎಚ್ಚರಿಕೆ: ಧಾರವಾಡದ ಕರ್ನಾಟಕ ನೀರಾವರಿ ನಿಗಮದ ಕಚೇರಿಯನ್ನು ಬೆಳಗಾವಿ ಸುವರ್ಣ ಸೌಧಕ್ಕೆ ಸ್ಥಳಾಂತರಿಸಿ ಮಹದಾಯಿ ಯೋಜನೆಯ ಕೆಲಸವನ್ನು ಹತ್ತಿಕ್ಕಲು ನೀರಾವರಿ ಇಲಾಖೆ ಅಧಿಕಾರಿಗಳು ಪ್ರಯತ್ನಿಸುತ್ತಿದ್ದಾರೆ. ಈ ಕುತಂತ್ರವನ್ನು ಕೈ ಬಿಡದಿದ್ದಲ್ಲಿ ನಿಗಮದ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ನಡೆಸಲಾಗುವುದು ಎಂದು ಕರ್ನಾಟಕ ರೈತ ಸೇನಾ ಅಧ್ಯಕ್ಷ ವೀರೇಶ ಸೊಬರದಮಠ ತಿಳಿಸಿದರು.

    ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಹದಾಯಿ ಹೋರಾಟಗಾರರ ಛಲವನ್ನು ಪ್ರಶ್ನಿಸುವಂತೆ ನಿಗಮದ ಕಚೇರಿಯನ್ನು ಸ್ಥಳಾಂತರಿಸಲು ಮುಂದಾಗಿದ್ದಾರೆ. ಬೆಂಗಳೂರಿನಲ್ಲಿರುವ ನಿಗಮದ ವ್ಯವಸ್ಥಾಪಕ ನಿರ್ದೇಶಕರ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸಿದರೆ ಅನುಕೂಲವಾಗುತ್ತದೆ. ಪ್ರತಿಯೊಂದು ಚಿಕ್ಕ ಕೆಲಸಕ್ಕೂ ಈ ಭಾಗದ ಜನರು ಬೆಂಗಳೂರಿಗೆ ಅಲೆಯುವುದು ತಪ್ಪುತ್ತದೆ ಎಂದರು. ಜೆಡಿಎಸ್-ಕಾಂಗ್ರೆಸ್ ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಡಾ. ಡಿ.ಎಂ. ನಂಜುಂಡಪ್ಪ ವರದಿ ಅನ್ವಯ 9 ಕಚೇರಿಗಳನ್ನು ಬೆಳಗಾವಿ ಸುವರ್ಣ ಸೌಧಕ್ಕೆ ಸ್ಥಳಾಂತರಿಸಲು ನಿರ್ಧರಿಸಲಾಗಿತ್ತು. ನೀರಾವರಿ ನಿಗಮದ ಬೆಂಗಳೂರು ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸಿದಲ್ಲಿ ಪ್ರತ್ಯಕ್ಷ-ಪರೋಕ್ಷವಾಗಿ ಉದ್ಯೋಗಾವಕಾಶಗಳು ಸೃಷ್ಟಿಯಾಗಲಿವೆ. ಧಾರವಾಡದ ಕಚೇರಿಯನ್ನು ಬೆಳಗಾವಿಗೆ ಸ್ಥಳಾಂತರಿಸಿದಲ್ಲಿ ಹೊರಗುತ್ತಿಗೆ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬ್ಬಂದಿ ಬೀದಿಗೆ ಬರಲಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

    ಸುದ್ದಿಗೋಷ್ಠಿಯಲ್ಲಿ ಗುರು ರಾಯನಗೌಡ್ರ, ಬಸವರಾಜ ಗುಡ್ಡಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts