More

    ಮಕ್ಕಳಿಗೆ ಪೌಷ್ಟಿಕಯುಕ್ತ ಆಹಾರ ನೀಡಿ

    ಗದಗ: ಜಿಲ್ಲೆಯಲ್ಲಿ ಅಪೌಷ್ಟಿಕತೆಯಿಂದ ಬಳಲುತ್ತಿರುವ ಮಕ್ಕಳಿಗೆ ಪೌಷ್ಟಿಕಯುಕ್ತ ಆಹಾರ ನೀಡಬೇಕು. ಅಂತಹ ಮಕ್ಕಳ ಆರೋಗ್ಯದ ಬಗ್ಗೆ ನಿರಂತರ ಕಾಳಜಿ ವಹಿಸುವ ಮೂಲಕ ಸದೃಢ ಮಗು ಸದೃಢ ರಾಷ್ಟ್ರ ನಿರ್ವಿುಸಬೇಕು ಎಂದು ಜಿಲ್ಲಾಧಿಕಾರಿ ಸುಂದರೇಶ ಬಾಬು ಹೇಳಿದರು.

    ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಜಿಲ್ಲೆಯಲ್ಲಿ ಸಾಧಾರಣ ಅಪೌಷ್ಟಿಕ 19,043 ಹಾಗೂ ತೀವ್ರ ಅಪೌಷ್ಟಿಕತೆಯಿಂದ 345 ಮಕ್ಕಳು ಬಳಲುತ್ತಿವೆ. ಅವರ ಬಗ್ಗೆ ಹೆಚ್ಚು ನಿಗಾ ವಹಿಸಬೇಕು. ಈಗಾಗಲೇ ತಲಾ 5ರಂತೆ ದತ್ತು ಪಡೆದಿರುವ ಮಕ್ಕಳನ್ನು ಮನೆಯ ಮಕ್ಕಳಂತೆ ನೋಡಿಕೊಳ್ಳಬೇಕು. ಅಪೌಷ್ಟಿಕತೆಯಿಂದ ಮಕ್ಕಳ ಮೇಲಾಗುವ ದುಷ್ಪರಿಣಾಮದ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸಬೇಕು ಎಂದರು.

    ಬಾಡಿಗೆ ಕಟ್ಟಡದಲ್ಲಿರುವ ಅಂಗನವಾಡಿ ಕೇಂದ್ರಗಳಿಗೆ ಸ್ಥಳೀಯ ಸರ್ಕಾರಿ ಸಂಸ್ಥೆ, ಕಂದಾಯ ಇಲಾಖೆಗೆ ಸಂಬಂಧಿಸಿರುವ ಸೂಕ್ತ ನಿವೇಶನ ಗುರುತಿಸಿ ಪ್ರಸ್ತಾವನೆ ಸಲ್ಲಿಸಬೇಕು. ಅಲ್ಲದೆ, ನಿರ್ಮಾಣ ಹಂತದಲ್ಲಿರುವ ಕಟ್ಟಡ ಕಾಮಗಾರಿಗಳು ಶೀಘ್ರದಲ್ಲೇ ಪೂರ್ಣಗೊಳ್ಳುವಂತೆ ಕ್ರಮ ಕೈಗೊಳ್ಳಬೇಕು. ಪ್ರತಿ ಅಂಗನವಾಡಿ ಕೇಂದ್ರಗಳಲ್ಲಿ ಶುದ್ಧ ಕುಡಿಯುವ ನೀರು, ಶೌಚಗೃಹ, ಮೂಲಸೌಕರ್ಯ ಕಡ್ಡಾಯವಾಗಿ ಇರಬೇಕು. ಮಕ್ಕಳ ದಾಖಲಾತಿ ವಿವರ ಸರಿಯಾಗಿ ದಾಖಲಿಸಬೇಕು. ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯ ಬಗ್ಗೆ ಅರಿವು ಮೂಡಿಸಬೇಕು ಎಂದು ಹೇಳಿದರು.

    ಜಿಪಂ ಸಿಇಒ ಡಾ. ಆನಂದ್ ಕೆ. ಮಾತನಾಡಿ, ಅಂಗನವಾಡಿ ಕೇಂದ್ರಗಳಿಗೆ ಕಲ್ಪಿಸಲಾಗಿರುವ ಮೂಲಸೌಲಭ್ಯಗಳನ್ನು ಸುಸ್ಥಿತಿಯಲ್ಲಿ ಇಟ್ಟುಕೊಳ್ಳಬೇಕು. ಬಹುಗ್ರಾಮ ಕುಡಿಯುವ ನೀರು (ಡಿಬಿಒಟಿ) ಯೋಜನೆಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ನಿರಂತರ ನೀರು ಒದಗಿಸಲಾಗುತ್ತಿದ್ದು, ಪೈಪ್​ಲೈನ್ ಅಳವಡಿಸಿಕೊಳ್ಳಬೇಕು ಎಂದರು.

    ಮಾತೃವಂದನಾ ಯೋಜನೆಯಡಿ ನೀಡಲಾಗುತ್ತಿರುವ 5 ಸಾವಿರ ರೂ. ಸಹಾಯಧನವನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸಬೇಕು. ಪ್ರತಿ ತಿಂಗಳು ಮಿಷನ್ ಬೋರ್ಡ್​ನಡಿ ಕಾರ್ಯಕ್ರಮ ಹಮ್ಮಿಕೊಳ್ಳಬೇಕು. ಜನರು ಸಮಸ್ಯೆ ಹೇಳಿಕೊಂಡು ಅಲೆದಾಡದಂತೆ ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಡಾ. ಎಚ್.ಎಚ್. ಕುಕನೂರ ಮಾತನಾಡಿ, ಜಿಲ್ಲೆಯಲ್ಲಿ ಒಟ್ಟು 1,166 ಅಂಗನವಾಡಿ ಕೇಂದ್ರಗಳಲ್ಲಿ ಒಟ್ಟು 83,680 ಮಕ್ಕಳು ದಾಖಲಾಗಿವೆ. ಅದರಲ್ಲಿ 865 ಸ್ವಂತ, 188 ಬಾಡಿಗೆ ಕಟ್ಟಡದಲ್ಲಿದ್ದು, 26 ಕಟ್ಟಡ ಕಾಮಗಾರಿಗಳು ನಿರ್ಮಾಣ ಹಂತದಲ್ಲಿವೆ. ತೀವ್ರ ಅಪೌಷ್ಟಿಕತೆಯಿಂದ ಬಳಲುತ್ತಿರುವ 92 ಮಕ್ಕಳನ್ನು ಎನ್​ಆರ್​ಸಿಗೆ ದಾಖಲು ಮಾಡಲಾಗಿದೆ. ಮಾತೃವಂದನಾ ಕಾರ್ಯಕ್ರಮ ಅನುಷ್ಠಾನದಲ್ಲಿ ರಾಜ್ಯದಲ್ಲಿಯೇ ಜಿಲ್ಲೆ 6ನೇ ಸ್ಥಾನದಲ್ಲಿದೆ ಎಂದು ಹೇಳಿದರು.

    ಇದೇ ವೇಳೆ ತೀವ್ರ ಅಪೌಷ್ಟಿಕತೆ ಹೊಂದಿದ ಮಕ್ಕಳಿಗೆ ಔಷಧ, ಬೇಟಿ ಬಚಾವೋ ಬೇಟಿ ಪಡಾವೋ ಯೋಜನೆಯಡಿ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿನಿಯರಿಗೆ 5 ಸಾವಿರ ರೂ. ಪ್ರೋತ್ಸಾಹ ಧನ ಚೆಕ್, ಮಾತೃವಂದನಾ ಯೋಜನೆ ಯಶಸ್ವಿ ಅನುಷ್ಠಾನಕ್ಕಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿ ಹಾಗೂ ಮೇಲ್ವಿಚಾರಕಿಯರಿಗೆ ಅಭಿನಂದನಾ ಪತ್ರ ವಿತರಿಸಲಾಯಿತು. ಆರ್​ಸಿಎಚ್ ಅಧಿಕಾರಿ ಡಾ. ಗೊಜನೂರ, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ಅಂಗನವಾಡಿ ಮೇಲ್ವಿಚಾರಕಿಯರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts