ವಿಜಯವಾಣಿ ಸುದ್ದಿಜಾಲ ಕೋಲಾರ
ಮಕ್ಕಳ ರಕ್ಷಣೆಗೆ ಸೂಕ್ತ ವಾತಾವರಣ ನಿರ್ಮಾಣ ಮಾಡಬೇಕಾದ ಕರ್ತವ್ಯ ನಮ್ಮೆಲ್ಲರ ಮೇಲಿದೆ ಎಂದು ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶಾರಾದ ಜಿ.ಎ. ಮಂಜುನಾಥ್ ತಿಳಿಸಿದರು.
ಮಕ್ಕಳ ರಕ್ಷಣಾ ನಿರ್ದೇಶನಾಲಾಯ, ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಜಿಲ್ಲಾ ಮಕ್ಕಳ ರಕ್ಷಣಾ ಘಟಕ ಕೋಲಾರ ಇವರ ಸಹಯೋಗದಲ್ಲಿ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ, ಬಾಲನ್ಯಾಯ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಮಕ್ಕಳ ಸಹಾಯವಾಣಿ ಸೇರಿದಂತೆ ವಿವಿಧ ಕಾಯ್ದೆಗಳ ಬಗ್ಗೆ ಜಿಲ್ಲಾ ಮಟ್ಟದ ಒಂದೂ ದಿನದ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದರು.
ಒಂದು ಮಗುವಿನ ಸರ್ವತೋಮುಖ ಬೆಳವಣಿಗೆಯಲ್ಲಿ ಶಾಲೆ ಹೊರತುಪಡಿಸಿ ಕುಟುಂಬದ ಪಾತ್ರ ದೊಡ್ಡದು. ಮನೆಯಿಂದಲೇ ಮೊದಲು ಮಗುವಿನ ರಕ್ಷಣೆ ಪ್ರಾರಂಭವಾಗಬೇಕು ಎಂದರು.
ಜಿಲ್ಲಾಧಿಕಾರಿ ಡಾ. ಎಂ.ಆರ್.ರವಿ ಅವರು ಮಾತನಾಡಿ, ಮಕ್ಕಳ ರಕ್ಷಣೆಗಾಗಿ ಮಾಡಿರುವ ಕಾಯ್ದೆಗಳ ಕುರಿತು ಅಧಿಕಾರಿಗಳು ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿ ಮೂಡಿಸಬೇಕು. ಆಯಾ ಕ್ಷೇತ್ರದಲ್ಲಿ ಕೆಲಸ ಮಾಡುವವರು ಅತ್ಯಂತ ಕ್ರಿಯಾಶೀಲರಾಗಿ ಕೆಲಸ ಮಾಡಬೇಕು ಎಂದು ತಿಳಿಸಿದರು.
ಮಕ್ಕಳ ರಕ್ಷಣಾ ನಿರ್ದೇಶನಾಲಯ ಕರ್ನಾಟಕ ರಾಜ್ಯದಲ್ಲೇ ಅಲ್ಲದೆ ದೇಶದ ಬೇರೆ ಯಾವ ರಾಜ್ಯಗಳಲ್ಲೂ ಸ್ಥಾಪನೆಯಗಿರುವುದಿಲ್ಲ. ೨೦೧೨ರಲ್ಲಿ ಈ ಸಂಸ್ಥೆ ಸ್ಥಾಪನೆಯಾಗಿದೆ. ಮಕ್ಕಳ ಮೇಲಿನ ವಿಶೇಷ ಕಾಳಜಿಯಿಂದ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಜಿಲ್ಲೆಯಲ್ಲಿ ಬಾಲಗರ್ಭಿಣಿಯರು, ಪೋಕ್ಸೋ ಪ್ರಕರಣ ಹಾಗೂ ಮಹಿಳಾ ದೌರ್ಜನ್ಯ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತಿರುವುದು ವಿಷಾದಕರ ಸಂಗತಿಯಾಗಿದೆ. ಬಾಲ್ಯ ವಿವಾಹ ತಡೆ, ಪೋಕ್ಸೋ ಪ್ರಕರಣಗಳ ತಡೆಗೆ ಕೆಳಮಟ್ಟದಲ್ಲಿ ಕೆಲಸ ಮಾಡುವ ಆಶಾ, ಅಂಗನವಾಡಿ ಕಾರ್ಯಕರ್ತೆ, ಗ್ರಾ.ಪಂ.ಅಭಿವೃದ್ಧಿ ಅಧಿಕಾರಿ ಹಾಗೂ ಶಿಕ್ಷಕರ ಪಾತ್ರ ಬಹುಮುಖ್ಯವಾಗಿದೆ. ಇವರ ಕಾರ್ಯವೈಖರಿ ಬದಲಾಗಬೇಕು ಎಂದರು.
ಬಾಲ್ಯವಿವಾಹಗಳು ತುರ್ತಾಗಿ ನಡೆಯುವುದಿಲ್ಲ ಹಾಗಾಗಿ ಗ್ರಾಮಗಳಲ್ಲಿ ಶಾಲೆ ಬಿಟ್ಟ ಮಕ್ಕಳ ಬಗ್ಗೆ ನಿಗಾವಹಿಸಬೇಕು. ಅವರನ್ನು ಮರಳಿ ಶಾಲೆಗೆ ದಾಖಲಿಸಲು ಪಾಲಕರ ಮನವೊಲಿಸಬೇಕು. ಜನರಿಗೆ ಕಾನೂನುಗಳ ಬಗ್ಗೆ ಮನದಟ್ಟು ಮಾಡಬೇಕು. ವಿವಿಧ ಕಾನೂನುಗಳ ಬಗ್ಗೆ ಜಾಗೃತಿ ಮೂಡಿಸುವ ಮೂಲಕ ಬಾಲ್ಯವಿವಾಹ ತಡೆಗೆ ಶ್ರಮಿಸಬೇಕು ಎಂದು ತಿಳಿಸಿ, ಎಲ್ಲಾ ಅಧಿಕಾರಿಗಳಿಗೆ ಕಾಯ್ದೆಗಳ ಪ್ರತಿಯನ್ನು ತಲುಪಿಸಲು ಸೂಚಿಸಿದರು.
ಜವಾಬ್ದಾರಿ ಅರಿತು ಕೆಲಸಮಾಡಿ:
ಜಿಲ್ಲೆಯಲ್ಲಿ ಬಾಲ್ಯ ವಿವಾಹ ತಡೆದ ಮಾತ್ರಕ್ಕೆ ಕರ್ತವ್ಯ ಮುಗಿಯುವುದಿಲ್ಲ. ನಿರಂತರ ಅವರ ಸಂಪರ್ಕದಲ್ಲಿರಬೇಕು. ತಮ್ಮ ಜವಾಬ್ದಾರಿ ಅರಿತು ಕೆಲಸಮಾಡಬೇಕು ಹಾಗೂ ಕಾನೂನುಗಳ ಉಲ್ಲಂಘನೆಯಾದಾಗ ವಿಧಿಸುವ ಶಿಕ್ಷೆಗಳ ಬಗ್ಗೆ ಸಾರ್ವಜನಿಕರಿಗೆ ಅರಿವು ಮೂಡಿಸಬೇಕು. ಎಲ್ಲರೂ ಸಮನ್ವಯದಿಂದ ಕಾರ್ಯನಿರ್ವಹಿಸುವ ಮೂಲಕ ಬಾಲ್ಯವಿಹಾಹ, ಬಾಲಗರ್ಭಿಣಿ, ದೌರ್ಜನ್ಯ ಸೇರಿದಂತೆ ಪ್ರಕರಣಗಳನ್ನು ತಡೆಯಲು ಸಾಧ್ಯ ಎಂದರು.
ಗ್ರಾಮಗಳಲ್ಲಿ ಕಾರ್ಯನಿರ್ವಹಿಸುವವರು ಇಂತಹ ಪ್ರಕರಣಗಳನ್ನು ಅತ್ಯಂತ ಸೂಕ್ಷ್ಮವಾಗಿ ಗಮನಿಸಬೇಕು. ಒಂದು ವೇಳೆ ಯಾರ ಗಮನಕ್ಕೆ ಬಾರದೇ ಬಾಲ್ಯವಿವಾಹಗಳು ನಡೆದರೆ ಯಾವುದೇ ಒತ್ತಡಕ್ಕೂ ಮಣಿಯದೇ ಪ್ರಕರಣ ದಾಖಲಿಸಿ, ತನಿಖೆ ನಡೆಸಬೇಕು ಎಂದು ಸಂಬAಧಪಟ್ಟ ಅಧಿಕಾರಿಗಳಿಗೆ ತಿಳಿಸಿದರು.
ಗ್ರಾಮಗಳಲ್ಲಿ ಶಾಲಾ ಮಕ್ಕಳಿಂದ ಜಾಥಾ ಸೇರಿದಂತೆ ವಿವಿಧ ಕಾರ್ಯಕ್ರಮಗಳ ಆಯೋಜನೆ ಮೂಲಕ ವಿವಿಧ ಕಾನೂನುಗಳ ಬಗ್ಗೆ ಅರಿವು ಮೂಡಿಸಬೇಕು. ಮಕ್ಕಳ ಗ್ರಾಮ ಸಭೆ ಮಾಡಬೇಕು ಎಂದು ತಿಳಿಸಿದರು.
ಹಿರಿಯ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳಾದ ಸುನಿಲ್ ಎಸ್ ಹೊಸಮನಿ ಮಾತನಾಡಿ, ಮಹಿಳಾ ಮತ್ತು ಮಕ್ಕಳ ರಕ್ಷಣೆಗಾಗಿ ಹಲವಾರು ಕಾನೂನುಗಳಿದ್ದರೂ ಅದರ ಅರಿವು ಇಲ್ಲದ ಕಾರಣ ಅವರುಗಳ ಮೇಲೆ ದೌರ್ಜನ್ಯ ಹೆಚ್ಚಾಗುತ್ತಿದೆ. ಅದರಲ್ಲೂ ಬುದ್ದಿಮಾಂದ್ಯ ಮಕ್ಕಳ ಮೇಲೆ ಹೆಚ್ಚಿನ ದೌರ್ಜನ್ಯ ನಡೆಯುತ್ತಿದೆ ಇಂತಹ ಪ್ರಕರಣಗಳನ್ನು ತಡೆಯುವ ಜವಾಬ್ದಾರಿ ನಮ್ಮ ನಿಮ್ಮೆಲ್ಲರ ಮೇಲಿದೆ. ಇದಕ್ಕಾಗಿ ನೀವು ಕಾನೂನುಗಳನ್ನು ಅರಿಯಬೇಕು ನಿಮ್ಮ ವ್ಯಾಪ್ತಿಯ ಎಲ್ಲರಿಗೂ ಕಾಯ್ದೆಗಳ ಕುರಿತು ತಿಳಿಸಬೇಕು ಎಂದರು.
ಕರ್ನಾಟಕ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯರಾದ ಎಸ್.ಮಂಜು ಅವರು ಮಾತನಾಡಿ ಬಾಲನ್ಯಾಯ ಪೋಷಣೆ ಮತ್ತು ಪಾಲನೆ ಕಾಯ್ದೆಯನ್ನು ೨೦೧೨ರ ಜಾರಿಗೆ ತಂದಿದ್ದರು. ನಂತರ ೨೦೧೫ ರಲ್ಲಿ ಭಾರತ ಸರ್ಕಾರವು ಈ ಕಾಯ್ದೆಗೆ ಸಹಿಯನ್ನು ಆಕಿದೆ. ೧೮ ವರ್ಷದ ಪ್ರತಿಯೊಂದು ಮಗುವು ಈ ಕಾಯ್ದೆಗೆ ಒಳಲ್ಪಟ್ಟಿರುತ್ತಾರೆ. ಮಗುವು ಜನ್ಮ ಪಡೆದ ನಂತರ ಸೂಕ್ತವಾದ ಪೋಷಣೆ ಮತ್ತು ಪಾಲನೆ ನೀಡುವುದು ಈ ಕಾಯ್ದೆಯ ಉದ್ದೇಶವಾಗಿದೆ. ಬಾಲ್ಯವಿವಾಹ ನಿಷೇಧ, ಪೋಕ್ಸೊ ಕಾಯ್ದೆ, ಬಾಲನ್ಯಾಯ ಪೋಷಣೆ ಮತ್ತು ಪಾಲನೆ ಕಾಯ್ದೆಗಳ ಬಗ್ಗೆ ವಿವರವಾಗಿ ಮಾಹಿತಿ ನೀಡಿದರು.
ಸಭೆಯಲ್ಲಿ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ. ಪ್ರವೀಣ್. ಪಿ. ಬಾಗೇವಾಡಿ, ಪೊಲೀಸ್ ತರಬೇತುದಾರರಾದ ರೋಹಿತ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ವಿ. ನಾಗರತ್ನ, ಆರೋಗ್ಯಧಿಕಾರಿ ಡಾ. ನಾರಾಯಣಸ್ವಾಮಿ, ಕುಟುಂಬ ಕಲ್ಯಾಣಾಧಿಕಾರಿ ಡಾ. ಚಂದನ್ ಕುಮಾರ್, ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು, ವಿವಿಧ ಸಮಿತಿ ಸದಸ್ಯರು, ವಿವಿಧ ಇಲಾಖೆಗಳ ಅಧಿಕಾರಿಗಳು ಉಪಸ್ಥಿತರಿದ್ದರು.
ಚಿತ್ರ ೦೩ ಕೆ.ಎಲ್.ಆರ್. ೦೩ : ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಸೋಮವಾರ ಆಯೋಜಿಸಲಾಗಿದ್ದ, ಬಾಲನ್ಯಾಯ ಕಾಯ್ದೆ, ಬಾಲ್ಯವಿವಾಹ ನಿಷೇಧ ಕಾಯ್ದೆ, ಪೋಕ್ಸೋ ಕಾಯ್ದೆ, ಬಾಲ ಕಾರ್ಮಿಕ ನಿಷೇಧ ಕಾಯ್ದೆ, ಮಕ್ಕಳ ಸಹಾಯವಾಣಿ ಸೇರಿದಂತೆ ವಿವಿಧ ಕಾಯ್ದೆಗಳ ಬಗ್ಗೆ ಜಿಲ್ಲಾ ಮಟ್ಟದ ಒಂದೂ ದಿನದ ಕಾರ್ಯಗಾರವನ್ನು ಉದ್ದೇಶಿಸಿ ಮಾತನಾಡಿದ ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧಿಶಾರಾದ ಜಿ.ಎ. ಮಂಜುನಾಥ್.