More

    ಮತಗಟ್ಟೆ ಸೌಲಭ್ಯಗಳ ಬಗ್ಗೆ ಅರಿವು ಅಗತ್ಯ

    ಬಾಗಲಕೋಟೆ: ಪ್ರಸಕ್ತ ಚುನಾವಣೆಯಲ್ಲಿ ಮತಗಟ್ಟೆಗಳಲ್ಲಿ ಕಲ್ಪಿಸಿರುವ ಅಗತ್ಯ ಸೌಲಭ್ಯಗಳ ಬಗ್ಗೆ ಮತದಾರರಲ್ಲಿ ಅರಿವು ಮೂಡಿಸುವುದು ಅಗತ್ಯವಾಗಿದೆ ಎಂದು ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ಪಿ.ಎಸ್.ವಸ್ತ್ರದ ತಿಳಿಸಿದರು.

    ಜಿಲ್ಲಾ ಪಂಚಾಯತ ಸ್ಥಾಯಿ ಸಮಿತಿ ಸಭಾಂಗಣದಲ್ಲಿ ಗುರುವಾರ ಜಿಲ್ಲಾ ಸ್ವೀಪ್ ಸಮಿತಿಯ ಸದಸ್ಯರೊಂದಿಗೆ ಜರುಗಿದ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು ಪ್ರತಿಯೊಂದು ಮತಗಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ, ರ‍್ಯಾಂಪ್, ವಿಶ್ರಾಂತಿ ಕೊಠಡಿ, ಶಾಮಿಯಾನ ವ್ಯವಸ್ಥೆ, ವೈದ್ಯಕೀಯ ಸೌಲಭ್ಯ ಸೇರಿದಂತೆ ಇತರೆ ಸೌಲಭ್ಯಗಳ ಮಾಹಿತಿಯನ್ನು ಮತದಾರರಿಗೆ ಮನವರಿಕೆ ಮಾಡಿಕೊಡುವುದು ಅಗತ್ಯವಾಗಿದೆ ಎಂದು ತಿಳಿಸಿದರು.
    ಮುಖ್ಯವಾಗಿ ವಿಶೇಷ ಚೇತನರಿಗೆ, ಹಿರಿಯ ನಾಗರಿಕರಿಗೆ ಹಾಗೂ ತೃತೀಯ ಲಿಂಗ ಮತದಾರರು ಮತಗಟ್ಟೆಗೆ ತೆರಳಿ ಸುಸೂತ್ರವಾಗಿ ಮತದಾನ ಮಾಡಲು ಎಲ್ಲ ರೀತಿಯ ಸೌಲಭ್ಯ ಕಲ್ಪಿಸಬೇಕು. ಅಂಬುಲೆನ್ಸ ವ್ಯವಸ್ಥೆ, ವೈದ್ಯಕೀಯ ಸಿಬ್ಬಂದಿ ನಿಯೋಜನೆ ಹಾಗೂ ಓ.ಆರ್.ಎಸ್ ಪಾಕೀಟ ಕಲ್ಪಿಸಿರುವ ಬಗ್ಗೆ ಮನವರಿಕೆ ಮಾಡಿಕೊಡಬೇಕು. ಜಿಲ್ಲಾ ಸ್ವೀಪ್ ಸಮಿತಿ ವತಿಯಿಂದ ಆಯೋಜಿಸಲಾದ ವಿವಿಧ ಚಟುವಟಿಕೆಗನ್ನು ಕಂಡು ಪ್ರಶಂಸೆ ವ್ಯಕ್ತಪಡಿಸಿದರು. ಇನ್ನು ಮುಂದುವರೆದು ಐಕಾನ್ ಬಳಕೆ ಮಾಡಿಕೊಂಡು ಮತದಾರರಲ್ಲಿ ಜಾಗೃತಿ ಮೂಡಿಸಲು ಮುಂದಾಗಬೇಕು ಎಂದು ತಿಳಿಸಿದರು.

    ಕಡಿಮೆ ಮತದಾನವಾಗಿರುವ ಜಿಲ್ಲೆಯ ಬೀಳಗಿ ಮತ್ತು ಬಾಗಲಕೋಟೆ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಮತಗಟ್ಟೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಮತಗಟ್ಟೆಗಳಲ್ಲಿ ಕಲ್ಪಿಸಿರುವ ಸೌಲಭ್ಯ, ರಂಗು ರಂಗಿನ ಚಿತ್ತಾರ ಕಂಡು ಮೆಚ್ಚುಗೆ ವ್ಯಕ್ತಪಡಿಸಿದರು. ಕಳೆದ ಚುನಾವಣೆಯಲ್ಲಿ ಕಡಿಮೆ ಮತದಾನವಾಗಿದ್ದು, ಈ ಬಾರಿ ಹೆಚ್ಚಿನ ಮತದಾನಕ್ಕೆ ಕ್ರಮವಹಿಸಲಾಗಿದೆ. ಈ ನಿಟ್ಟಿನಲ್ಲಿ ವಿಶೇಷ ಮತಗಟ್ಟೆಗಳಂತೆ ಕಡಿಮೆ ಮತದಾನವಾಗಿರುವ ಮತಗಟ್ಟೆಗಳಲ್ಲಿ ವರ್ಲಿ ಕಲೆಯ ಬಿಡಿಸುವ ಮೂಲಕ ಮತದಾರರನ್ನು ಆಕರ್ಷಿಸುವಂತೆ ಮಾಡಲಾಗಿದೆ ಎಂದು ಜಿಲ್ಲಾ ಸ್ವೀಪ್ ಸಮಿತಿಯ ಅಧ್ಯಕ್ಷ ಶಶಿಧರ ಕುರೇರ ತಿಳಿಸಿದರು.

    ಜಿಲ್ಲೆಯಲ್ಲಿರುವ ಪ್ರತಿಯೊಂದು ಮತಕ್ಷೇತ್ರಗಳಲ್ಲಿ ಕಡಿಮೆ ಮತದಾನವಾಗುತ್ತಿರುವ ಮತಗಟ್ಟೆಗಳನ್ನು ಗುರುತಿಸಲಾಗಿದ್ದು, ಆ ವ್ಯಾಪ್ತಿಯಲ್ಲಿ ಹೆಚ್ಚಿನ ಜಾಗೃತಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುತ್ತಿದೆ. ಈ ಬಾರಿ ಚುನಾವಣೆಯಲ್ಲಿ ಹೆಚ್ಚಿನ ಮತದಾನಕ್ಕೆ ಶ್ರಮಿಸಲಾಗುತ್ತಿದೆ. ಪೌರಕಾರ್ಮಿಕರ ಮೂಲಕ, ರಂಗೋಲಿ, ಬೈಕ್ರ‍್ಯಾಲಿ, ಕ್ಯಾಂಡಲ್ ಬೆಳೆಗಿಸುವುದು, ಸೈಕಲ್ ಜಾಥಾ ಹಾಗೂ ಮನೆ ಮನೆ ತೆರಳಿ ಮತದಾನ ಜಾಗೃತಿ ಮೂಡಿಸಲಾಗುತ್ತಿದೆ ಶಶಿಧರ ಕುರೇರ ತಿಳಿಸಿದರು.

    ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ ಮಾತನಾಡಿ ಜಿಲ್ಲೆಯಲ್ಲಿ ಬಿಸಿಲಿನ ತಾಪ ಹೆಚ್ಚಾದ ಹಿನ್ನಲೆಯಲ್ಲಿ ಮತದಾನಕ್ಕೆ ತೊಂದರೆಯಾಗದಂತೆ ಮತಗಟ್ಟೆಗಳಲ್ಲಿ ವಿಶ್ರಾಂತಿ ಕೊಠಡಿ ವ್ಯವಸ್ಥೆ ಕಲ್ಪಿಸಲಾಗುತ್ತಿದ್ದು, ವಿಶ್ರಾಂತಿ ಕೊಠಡಿ ಲಭ್ಯವಿರದಿದ್ದಲ್ಲಿ ಶಾಮಿಯಾನ ವ್ಯವಸ್ಥೆಗೆ ಕ್ರಮಕೈಗೊಳ್ಳಲಾಗುತ್ತಿದೆ. ವೈದ್ಯಕೀಯ ಸೌಲಭ್ಯ ಹಾಗೂ ಓ.ಆರ್.ಎಸ್ ವಿತರಣೆಗೆ ಆರೋಗ್ಯ ಇಲಾಖೆಗೆ ಸೂಚಿಸಲಾಗಿದೆ ಎಂದು ಸಭೆಗೆ ತಿಳಿಸಿದರು.

    ಸಭೆಯಲ್ಲಿ ಜಿಲ್ಲಾಧಿಕಾರಿ ಆಗಿರುವ ಜಿಲ್ಲಾ ಚುನಾವಣಾಧಿಕಾರಿ ಜಾನಕಿ ಕೆ.ಎಂ, ಜಿ.ಪಂ ಉಪಕಾರ್ಯದರ್ಶಿ ಅಮರೇಶ ನಾಯಕ, ಯೋಜನಾ ನಿರ್ದೇಶಕ ಶಶಿಕಾಂತ ಶಿವಪೂರೆ, ಜಿಲ್ಲಾ ಸ್ವೀಪ್ ಸಮಿತಿಯ ಸದಸ್ಯರಾದ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಬಿ.ಕೆ.ನಂದನೂರ, ವಿಕಲಚೇತನರ ಕಲ್ಯಾಣಾಧಿಕಾರಿ ಸವಿತಾ ಕಾಳೆ, ಸಮಾಜ ಕಲ್ಯಾಣ ಇಲಾಖೆಯ ಉಪನಿರ್ದೇಶಕಿ ನಂದಾ ಹಣಮರಟ್ಟಿ ಸೇರಿದಂತೆ ಇತರೆ ಅಧಿಕಾರಿಗಳು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts