More

    ಮತದಾನ ಶಕ್ತಿಯುತ ಅಸ್ತ್ರ

    ಹುಣಸೂರು: ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನ ಶಕ್ತಿಯುತ ಅಸ್ತ್ರ ಎಂದು ಉಪವಿಭಾಗಾಧಿಕಾರಿ ರುಚಿ ಬಿಂದಾಲ್ ಅಭಿಪ್ರಾಯಪಟ್ಟರು.

    ನಗರದ ಡಿ.ದೇವರಾಜ ಅರಸು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ತಾಲೂಕು ಆಡಳಿತದ ಸಹಯೋಗದಲ್ಲಿ ಬುಧವಾರ ಆಯೋಜಿಸಿದ್ದ ರಾಷ್ಟ್ರೀಯ ಮತದಾರರ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು. 1950ರಲ್ಲಿ ಚುನಾವಣಾ ಆಯೋಗ ಸ್ಥಾಪನೆಗೊಂಡ ನಂತರ ದೇಶದಲ್ಲಿ ಮತದಾನದ ಪ್ರಮಾಣವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಮತದಾರರ ದಿನಾಚರಣೆ ಆಚರಿಸಲಾಗುತ್ತಿದೆ. ಪ್ರಸ್ತುತ ಸರಾಸರಿ ಮತದಾನದ ಪ್ರಮಾಣ ಶೇ.67ರಷ್ಟಿದ್ದು, ಶೇ. ನೂರು ಪ್ರಮಾಣದಲ್ಲಿ ಮತದಾನ ಮಾಡುವ ಉದ್ದೇಶವನ್ನು ಚುನಾವಣಾ ಆಯೋಗ ಹೊಂದಿದೆ. ಅರ್ಹ ಅಭ್ಯರ್ಥಿಗಳನ್ನು ಆರಿಸಲು ಮತದಾನ ಮಾಡುವ ಪ್ರಕ್ರಿಯೆಯಲ್ಲಿ ಪ್ರತಿ ಮತದಾರನೂ ಒಳಗೊಳ್ಳಬೇಕು ಎಂದು ಹೇಳಿದರು.

    ಪ್ರಧಾನ ಹಿರಿಯ ಸಿವಿಲ್ ನ್ಯಾಯಾಧೀಶೆ ಶಿರಿನ್ ಜಾವಿದ್ ಅನ್ಸಾರಿಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ದೇಶದ ಪ್ರತಿಯೊಬ್ಬರೂ ಈ ನೆಲದ ಕಾನೂನಿನ ಕನಿಷ್ಠ ಅರಿವನ್ನು ಹೊಂದಿರುವುದು ಅಗತ್ಯ. ಲೋಕ ಅದಾಲತ್ ಮೂಲಕ ಜನರಿಗೆ ನ್ಯಾಯ ದೊರಕಿಸಿಕೊಡಲು ನ್ಯಾಯಾಲಯ ಮುಂದಾಗಿದೆ ಎಂದು ತಿಳಿಸಿದರು.

    ತಹಸೀಲ್ದಾರ್ ಡಾ.ಎಸ್.ಯು.ಅಶೋಕ್ ಮಾತನಾಡಿ, ತಾಲೂಕಿನಲ್ಲಿ 4500 ಹೊಸ ಮತದಾರರು ಮತದಾರರ ಗುರುತಿನ ಚೀಟಿ(ಎಪಿಕ್‌ಕಾರ್ಡ್)ಗಾಗಿ ನೋಂದಾಯಿಸಕೊಂಡಿದ್ದಾರೆ. ಕಾರ್ಡ್ ವಿತರಿಸುವ ಕಾರ್ ಪ್ರಗತಿಯಲ್ಲಿದೆ. ವರ್ಷಕ್ಕೆ ನಾಲ್ಕು ಬಾರಿ (ಜನವರಿ, ಏಪ್ರಿಲ್, ಜುಲೈ ಮತ್ತು ಅಕ್ಟೋಬರ್) ನೋಂದಾಯಿಸಿಕೊಳ್ಳಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದರು.

    ಪ್ರಧಾನ ಸಿವಿಲ್ ನ್ಯಾಯಾಧೀಶ ಬಿ.ವೈ.ಮನು ಪಟೇಲ್, ತಾಲೂಕು ಪಂಚಾಯಿತಿ ಕಾರ್ಯ ನಿರ್ವಹಣಾಧಿಕಾರಿ ಬಿ.ಕೆ.ಮನು, ತಾಲೂಕು ವಕೀಲರ ಸಂಘದ ಅಧ್ಯಕ್ಷ ಯೋಗಣ್ಣೇಗೌಡ, ಉಪಾಧ್ಯಕ್ಷ ಬಿ.ಸಿ.ಸುಂದರೇಶ್, ಕಾರ್ಯದರ್ಶಿ ಟಿ.ಶ್ರೀನಿವಾಸ್, ಕಾಲೇಜಿನ ಪ್ರಾಂಶುಪಾಲ ಡಾ.ವೆಂಕಟೇಶಯ್ಯ ಹಾಜರಿದ್ದರು. ರಾಷ್ಟೀಯ ಮತದಾರರ ದಿನಾಚರಣೆ ಅಂಗವಾಗಿ ಕಾಲೇಜಿನಲ್ಲಿ ಆಯೋಜಿಸಿದ್ದ ವಿವಿಧ ಸ್ಪರ್ಧೆಗಳ ವಿಜೇತ ವಿದ್ಯಾರ್ಥಿಗಳಿಗೆ ಗಣ್ಯರು ಬಹುಮಾನ ವಿತರಿಸಿದರು. ಕಡ್ಡಾಯ ಮತದಾನ ಮಾಡುವ ಕುರಿತು ವಿದ್ಯಾರ್ಥಿಗಳು ಪ್ರತಿಜ್ಞಾವಿಧಿ ಸ್ವೀಕರಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts