More

    ಮಹಾನಗರದಲ್ಲಿ ಬಿಜೆಪಿ ಧ್ವಜ ಹಾರಿಸಿ

    ಹುಬ್ಬಳ್ಳಿ: ಮಹಾನಗರ ಪಾಲಿಕೆ ಚುನಾವಣೆಗಾಗಿ ಹುಬ್ಬಳ್ಳಿ-ಧಾರವಾಡಕ್ಕೆ ಬಂದಿರುವ ಗ್ರಾಮೀಣ ಪ್ರದೇಶದ ಕಾರ್ಯಕರ್ತರು ಬಿಜೆಪಿ ಧ್ವಜ ಹಾರಿಸಿಯೇ ಮರಳಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

    ಇಲ್ಲಿನ ದೇಶಪಾಂಡೆ ನಗರದ ಬಿಜೆಪಿ ಕಚೇರಿಯಲ್ಲಿ ಮಂಗಳವಾರ ಆಯೋಜಿಸಿದ್ದ ಧಾರವಾಡ ಜಿಲ್ಲಾ ಗ್ರಾಮಾಂತರ ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.

    ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯಲ್ಲಿ ಪಕ್ಷ ಈಗಾಗಲೇ 2 ಬಾರಿ ಅಧಿಕಾರದ ಚುಕ್ಕಾಣಿ ಹಿಡಿದಿದೆ. 3ನೇ ಬಾರಿಯೂ ಪಾಲಿಕೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತರಬೇಕಿದೆ. ಪಕ್ಷಕ್ಕೆ ಹ್ಯಾಟ್ರಿಕ್ ಜಯ ದೊರಕಿಸಿಕೊಡುವ ಜವಾಬ್ದಾರಿ ಕಾರ್ಯಕರ್ತರ ಮೇಲಿದೆ ಎಂದರು.

    ಮಹಾನಗರದ ಕಾರ್ಯಕರ್ತರೊಂದಿಗೆ ಗ್ರಾಮೀಣ ಕಾರ್ಯಕರ್ತರೂ ಪ್ರಚಾರ ಕಾರ್ಯದಲ್ಲಿ ತೊಡಗಬೇಕು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸಾಧನೆಗಳನ್ನು ಪ್ರತಿ ಮನೆಗೆ ತಲುಪಿಸಬೇಕು. ಕಳೆದ 2 ಅವಧಿಯಲ್ಲಿ ಪಾಲಿಕೆಯಲ್ಲಿ ಅಧಿಕಾರದಲ್ಲಿದ್ದ ಬಿಜೆಪಿಯ ಸಾಧನೆಗಳನ್ನೂ ಮತದಾರರಿಗೆ ಮನದಟ್ಟು ಮಾಡಬೇಕು ಎಂದು ತಿಳಿಸಿದರು.

    ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಜಿಲ್ಲಾ ಗ್ರಾಮೀಣ ಅಧ್ಯಕ್ಷ ಬಸವರಾಜ ಕುಂದಗೋಳಮಠ ಹಾಗೂ ಇತರರಿದ್ದರು.

    ಶೀಘ್ರ ಪ್ರಣಾಳಿಕೆ ಬಿಡುಗಡೆ

    ಹುಬ್ಬಳ್ಳಿ: ಈ ಬಾರಿಯೂ ಬಿಜೆಪಿ ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುಕ್ಕಾಣಿ ಹಿಡಿದು ಹ್ಯಾಟ್ರಿಕ್ ಸಾಧನೆ ಮಾಡುವುದು ಖಚಿತ ಎಂದು ಜಿಲ್ಲಾ ಉಸ್ತುವಾರಿ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

    ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಗೆಲ್ಲುವ ವಿಶ್ವಾಸವಿದೆ. ಸಾಮಾಜಿಕ ನ್ಯಾಯದ ಆಧಾರದಡಿ ಟಿಕೆಟ್​ಗಳನ್ನು ಹಂಚಿದ್ದೇವೆ ಎಂದರು.

    ಅವಳಿ ನಗರದ ಅಭಿವೃದ್ಧಿ ಬಗ್ಗೆ ಯೋಜನೆಗಳನ್ನು ರೂಪಿಸಲಾಗುವುದು. ಈ ಕುರಿತ ವಿವರಗಳುಳ್ಳ ಪ್ರಣಾಳಿಕೆಯನ್ನು ಶೀಘ್ರ ಬಿಡುಗಡೆಗೊಳಿಸಲಾಗುವುದು ಎಂದು ಹೇಳಿದರು.

    ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮಹೇಶ ಟೆಂಗಿನಕಾಯಿ, ಧಾರವಾಡ ಗ್ರಾಮಾಂತರ ಜಿಲ್ಲಾ ಅಧ್ಯಕ್ಷ ಬಸವರಾಜ ಕುಂದಗೋಳಮಠ, ಎಂ.ಆರ್. ಪಾಟೀಲ ಹಾಗೂ ಇತರರು ಇದ್ದರು.

    ಎಚ್​ಡಿಕೆ ಮಹದಾಯಿಗೆ ಹಣ ನೀಡಲಿಲ್ಲ

    ಹುಬ್ಬಳ್ಳಿ: ಎಚ್.ಡಿ. ಕುಮಾರಸ್ವಾಮಿ ಅವರು 2 ಬಾರಿ ಮುಖ್ಯಮಂತ್ರಿಯಾಗಿದ್ದರೂ ಮಹದಾಯಿ ಯೋಜನೆ ಅನುಷ್ಠಾನಕ್ಕೆ ಬಜೆಟ್​ನಲ್ಲಿ ಹಣ ಮೀಸಲಿಡಲಿಲ್ಲ ಎಂದು ಕೈಮಗ್ಗ ಮತ್ತು ಜವಳಿ ಖಾತೆ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಹೇಳಿದರು.

    ನಗರದಲ್ಲಿ ಮಂಗಳವಾರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, ಕುಮಾರಸ್ವಾಮಿ ಅವರು ಮಾಜಿ ಪ್ರಧಾನಿಯ ಪುತ್ರ. ಅವರ ಬಗ್ಗೆ ಹೆಚ್ಚಿಗೆ ಮಾತನಾಡುವುದಿಲ್ಲ ಎಂದರು.

    ಬಿ.ಎಸ್. ಯಡಿಯೂರಪ್ಪ ಮುಖ್ಯಮಂತ್ರಿ ಆಗಿದ್ದಾಗ ಮಹದಾಯಿ ಯೋಜನೆ ಅನುಷ್ಠಾನಕ್ಕೆ 1,677 ಕೋಟಿ ರೂ. ಅನ್ನು ಬಜೆಟ್​ನಲ್ಲಿ ಮೀಸಲಿಟ್ಟಿದ್ದರು. ಎಚ್.ಡಿ. ಕುಮಾರಸ್ವಾಮಿ ಅವರು ಎಷ್ಟು ಹಣ ಮಹದಾಯಿಗೆ ನೀಡಿದ್ದಾರೆ ಹೇಳಲಿ ಎಂದು ಸವಾಲು ಹಾಕಿದರು.

    ಮಹದಾಯಿ ಹೋರಾಟದಲ್ಲಿ ಕರ್ನಾಟಕ ಒಂದು ಹೆಜ್ಜೆ ಮುಂದೆ ಇದೆ. ಯೋಜನೆ ಅನುಷ್ಠಾನಕ್ಕೆ ಸರ್ಕಾರ ಎಲ್ಲ ರೀತಿಯ ಕ್ರಮ ಕೈಗೊಳ್ಳಲಿದೆ ಎಂದು ಹೇಳಿದರು.

    ಹೆಸರು ಖರೀದಿ ಕೇಂದ್ರ ಶೀಘ್ರ ಪ್ರಾರಂಭಿಸಲಾಗುವುದು. ಕೇಂದ್ರ ಸರ್ಕಾರದ ಬೆಲೆ ನಿಗದಿ ಆಧಾರದಡಿ ಕಳೆದ ಬಾರಿಗಿಂತ ಹೆಚ್ಚಿನ ಖರೀದಿ ಕೇಂದ್ರ ತೆರೆಯುತ್ತೇವೆ ಎಂದು ತಿಳಿಸಿದರು.

    ಆನಂದ ಸಿಂಗ್ ರಾಜೀನಾಮೆ ಅವರ ವೈಯಕ್ತಿಕ ವಿಚಾರ. ಖಾತೆಗಳ ಹಂಚಿಕೆ, ರಾಜೀನಾಮೆ ಬಗ್ಗೆ ಪಕ್ಷದ ಹಿರಿಯರು ತೀರ್ಮಾನ ತೆಗೆದುಕೊಳ್ಳುತ್ತಾರೆ ಎಂದು ಹೇಳಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts