More

    ಮಹಾರಾಣಿ, ಯುವರಾಜ ಕಾಲೇಜು ವಿದ್ಯಾರ್ಥಿಗಳ ಪ್ರತಿಭಟನೆ

    ಮೈಸೂರು: ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಪೂರ್ಣಪ್ರವೇಶ ಶುಲ್ಕ ಪಾವತಿಗೆ ಒತ್ತಡ ಹೇರುತ್ತಿರುವ ಕ್ರಮವನ್ನು ಖಂಡಿಸಿ ಮಹಾರಾಣಿ ಮಹಿಳಾ ಕಾಲೇಜು ಮತ್ತು ಯುವರಾಜ ಕಾಲೇಜು ವಿದ್ಯಾರ್ಥಿಗಳು ನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಿದರು.


    ಎಐಡಿಎಸ್‌ಒ ಮತ್ತು ಕರ್ನಾಟಕ ರಾಜ್ಯ ಸಂಶೋಧಕರ ಸಂಘದ ನೇತೃತ್ವದಲ್ಲಿ ಪ್ರತಿಭಟನಾಕಾರರು, ನಗರದ ಕ್ರಾಫರ್ಡ್ ಭವನದ ಎದುರು ಜಮಾವಣೆಗೊಂಡು ಆಕ್ರೋಶ ವ್ಯಕ್ತಪಡಿಸಿದರು.


    ಈಗಾಗಲೇ ಕಾಲೇಜುಗಳ ಪ್ರವೇಶಾತಿ ಪ್ರಾರಂಭವಾಗಿದೆ. ಎಸ್ಸಿ-ಎಸ್ಟಿ ವಿದ್ಯಾರ್ಥಿಗಳಿಗೆ ಶುಲ್ಕ ರಹಿತ ಪ್ರವೇಶಾತಿ ನೀಡಿ, ಬಳಿಕ ವಿದ್ಯಾರ್ಥಿ ವೇತನದಲ್ಲಿ ಶುಲ್ಕದ ಮೊತ್ತವನ್ನು ಪಾವತಿಸಿಕೊಳ್ಳಬೇಕು ಎಂಬ ನಿಯಮವಿದೆ. ಆದರೆ, ಕಾಲೇಜುಗಳಲ್ಲಿ ಏಕಾಏಕಿ ಶುಲ್ಕ ಪಾವತಿಸುವಂತೆ ಆದೇಶ ಹೊರಡಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.


    ಮಹಾರಾಣಿ ಕಾಲೇಜಿನಲ್ಲಿ ಒಬ್ಬ ವಿದ್ಯಾರ್ಥಿಗೆ 16 ಸಾವಿರ ರೂ., ಮಹಾರಾಜ ಕಾಲೇಜಿನಲ್ಲಿ 30 ಸಾವಿರ ರೂ., ಯುವರಾಜ ಕಾಲೇಜಿನಲ್ಲಿ 30-60 ಸಾವಿರ ರೂ. ಶುಲ್ಕ ಕಟ್ಟಬೇಕೆಂದು ಆದೇಶ ಹೊರಡಿಸಿದ್ದಾರೆ. ಏಕಾಏಕಿ ಶುಲ್ಕ ಕಟ್ಟಲು ಆದೇಶಿಸಿರುವುದು ಸರಿಯಲ್ಲ. ವಿದ್ಯಾರ್ಥಿವೇತನ ಬಂದ ಬಳಿಕ ಶುಲ್ಕ ಪಾವತಿ ಮಾಡಲಾಗುತ್ತದೆ. ಅಲ್ಲಿಯವರೆಗೆ ಕಾಲಾವಕಾಶ ನೀಡಬೇಕು ಎಂದು ಆಗ್ರಹಿಸಿದರು.


    ಎಐಡಿಎಸ್‌ಒ ಜಿಲ್ಲಾಧ್ಯಕ್ಷ ಸುಭಾಷ್ ಮಾತನಾಡಿ, ಎಷ್ಟೋ ವಿದ್ಯಾರ್ಥಿಗಳಿಗೆ ಸರಿಯಾಗಿ ವಿದ್ಯಾರ್ಥಿ ವೇತನ ಬಂದಿಲ್ಲ. ಈ ಹಿನ್ನೆಲೆಯಲ್ಲಿ ಏಕಾಏಕಿ ಸಾವಿರಾರು ರೂ. ಪ್ರವೇಶ ಶುಲ್ಕ ಕಟ್ಟಿ ಎಂದು ಒತ್ತಡ ಹೇರುತ್ತಿರುವುದು ವಿದ್ಯಾರ್ಥಿ ವಿರೋಧಿ ನಿಲುವು. ಸರ್ಕಾರಿ ಶಾಲಾ ಕಾಲೇಜಿನಲ್ಲಿ ಓದುತ್ತಿರುವ ಬಹುತೇಕ ವಿದ್ಯಾರ್ಥಿಗಳು ಬಡವರು. ಆದ್ದರಿಂದ ಈ ಕ್ರಮವನ್ನು ಕೈಬಿಡಬೇಕು.

    ಸರ್ಕಾರ ಹಾಗೂ ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಈ ಕೂಡಲೇ ಮಧ್ಯ ಪ್ರವೇಶಿಸಿ ಸಮಸ್ಯೆ ಬಗೆಹರಿಸಬೇಕೆಂದು ಒತ್ತಾಯಿಸಿದರು.
    ಸಂಶೋಧಕರ ಸಂಘದ ಅಧ್ಯಕ್ಷ ಮರಿದೇವಯ್ಯ, ಸಂಘಟನೆಯ ಪದಾಧಿಕಾರಿಗಳಾದ ನಿತಿನ್ ಸೇರಿದಂತೆ ಕಾಲೇಜು ವಿದ್ಯಾರ್ಥಿಗಳು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts