More

    ಮಾದಪ್ಪನಿಗೆ ಎಣ್ಣಮಜ್ಜನ ಸೇವೆ

    ಹನೂರು: ತಾಲೂಕಿನ ಮಲೆ ಮಹದೇಶ್ವರ ಬೆಟ್ಟದ ಮಾದಪ್ಪನ ಸನ್ನಿಧಿಯಲ್ಲಿ ಗುರುವಾರ ಸಂಜೆ ಬಾದಾಮಿ ಅಮಾವಾಸ್ಯೆಯ ಅಂಗವಾಗಿ ಸ್ವಾಮಿಗೆ ಎಣ್ಣೆಮಜ್ಜನ ಸೇವೆ ಹಾಗೂ ಶುಕ್ರವಾರ ವಿಶೇಷ ಪೂಜಾ ಕೈಂಕರ್ಯಗಳು ಜರುಗಿದ್ದು, ಸಾವಿರಾರು ಭಕ್ತರು ಭೇಟಿ ನೀಡಿ ದೇವರ ದರ್ಶನ ಪಡೆದರು.


    ಅಮಾವಾಸ್ಯೆಯ ಹಿನ್ನೆಲೆಯಲ್ಲಿ ದೇಗುಲವನ್ನು ವಿವಿಧ ಪುಷ್ಪ ಹಾಗೂ ತಳೀರು ತೋರಣದಿಂದ ಸಿಂಗಾರ ಮಾಡಲಾಗಿತ್ತು. ಸ್ವಾಮಿಯ ಮೂರ್ತಿಯನ್ನು ವಿವಿಧ ಪುಷ್ಪಗಳಿಂದ ಅಲಂಕರಿಸಲಾಗಿತ್ತು. ಗುರುವಾರ ಸಂಜೆ 6.30 ರಿಂದ 8.30 ರವರೆಗೆ ಸ್ವಾಮಿಗೆ ಬೇಡಗಂಪಣ ಸರದಿ ಅರ್ಚಕರಿಂದ ವಿಶೇಷ ಪೂಜೆ ಹಾಗೂ ಎಣ್ಣೆಮಜ್ಜನ ಸೇವೆಯು ಸಂಪ್ರದಾಯದಂತೆ ನೆರವೇರಿತು.


    ಅಮಾವಾಸ್ಯೆ ವಿಶೇಷ ಪೂಜೆ: ಅಮಾವಾಸ್ಯೆಯ ಹಿನ್ನೆಲೆಯಲ್ಲಿ ಶುಕ್ರವಾರ ಬೆಳಗಿನ ಜಾವ 3 ಗಂಟೆಯಿಂದ 6.30 ರವರೆಗೆ ಸ್ವಾಮಿಗೆ ಪ್ರಥಮ ಹಾಗೂ ದ್ವಿತೀಯ ವಿಶೇಷ ಪೂಜೆಯನ್ನು ನೆರವೇರಿಸಲಾಯಿತು. ಉಪವಾಸವಿದ್ದ ಬೇಡಗಂಪಣ ಸರದಿ ಅರ್ಚಕರು ಛತ್ರಿ ಚಾಮರ ವಾದ್ಯಮೇಳದೊಂದಿಗೆ ದೇಗುಲ ಸಮೀಪದ ನಂದನವನದ ಮಜ್ಜನ ಬಾವಿಗೆ ತೆರಳಿ ಆಗ್ರೋದಕ ಹಾಗೂ ಬಾಯಿಗೆ ಬಟ್ಟೆ ಕಟ್ಟಿಕೊಂಡು ಕರೆದ ಹಾಲನ್ನು ಮೆರವಣಿಗೆಯ ಮೂಲಕ ದೇಗುಲಕ್ಕೆ ತಂದರು.

    ಸ್ವಾಮಿಗೆ ಸಂಕಲ್ಪಾಧಿ, ಗಣಪತಿ ಪೂಜೆ, ಪಂಚಕಳಸ ಪೂಜೆ, ಏಕವಾರು ರುದ್ರಾಭಿಷೇಕ, ಪಂಚಾಮೃತ ಅಭಿಷೇಕ, ಎಳನೀರು, ಜೇನುತುಪ್ಪ, ಮೊಸರು, ಸಕ್ಕರೆ, ಖರ್ಜೂರ, ದ್ರಾಕ್ಷಿಯ ಮೂಲಕ ಹಾಲಿನ ಅಭಿಷೇಕ ನೆರವೇರಿಸಿದರು. ಬಳಿಕ 2ನೇ ಅಭಿಷೇಕದ ವಿಶೇಷ ಪೂಜೆಯಲ್ಲಿ ಮಾದಪ್ಪನಿಗೆ ಅಭಿಷೇಕ ಅರ್ಚನೆ, ಏಕವಾರು ರುದ್ರಾಭಿಷೇಕ, ಸಂಕಲ್ಪ ಬಿಲ್ವಾರ್ಚನೆ, ನವರತ್ನ ಕೀರಿಟಧಾರಣೆ, ಧೂಪಧಾರತಿ ಹಾಗೂ ಮಹಾ ಮಂಗಳಾರತಿ ಬೆಳಗಿಸಿದ ನಂತರ ಭಕ್ತರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಲಾಯಿತು.


    ಉತ್ಸವದಲ್ಲಿ ಭಾಗಿಯಾದ ಭಕ್ತರು: ಆಗಮಿಸಿದ್ದ ಭಕ್ತರು ಹುಲಿವಾಹನ, ರುದ್ರಾಕ್ಷಿವಾಹನ ಹಾಗೂ ಬಸವ ವಾಹನವನ್ನು ದೇಗುಲದ ಸುತ್ತ ಪ್ರದಕ್ಷಿಣೆ ಹಾಕಿಸುವುದರ ಮೂಲಕ ಉತ್ಸವದಲ್ಲಿ ಪಾಲ್ಗೊಂಡಿದ್ದರು. ಈ ಉತ್ಸವಗಳು ಬೆಳಗ್ಗೆಯಿಂದ ಸಂಜೆಯವರೆಗೆ ಜರುಗಿತು. ಈ ವೇಳೆ ಹರಕೆ ಹೊತ್ತ ಭಕ್ತರು ದಂಡಿನ ಕೋಲನ್ನು ಹೊತ್ತು ಉತ್ಸವ ಮೂರ್ತಿಗಳಿಗೆ ಧನ, ಧಾನ್ಯ ಸೇರಿದಂತೆ ಇನ್ನಿತರ ವಸ್ತುಗಳನ್ನು ಎಸೆದು ದೇವರ ಕೃಪೆಗೆ ಪಾತ್ರರಾದರಲ್ಲದೇ ಉಘೇ ಮಾದಪ್ಪ ಉಘೇ.. ಜೈ ಮಹತ್ ಮಲೆಯಾ ಎಂಬಿತ್ಯಾದಿ ಘೋಷಣೆಗಳನ್ನು ಕೂಗಿ ಭಕ್ತಿ ಭಾವವನ್ನು ಮೆರೆದರು.


    ಸೇವೆಗಳಲ್ಲಿ ಭಾಗಿ: ಮ.ಬೆಟ್ಟಕ್ಕೆ ಆಗಮಿಸಿದ ಹರಕೆಹೊತ್ತ ಭಕ್ತರು ಮುಡಿಸೇವೆ, ಉರುಳುಸೇವೆ, ಪಂಜಿನಸೇವೆ ಹಾಗೂ ರಜಾ ಹೊಡೆಯುವ ಸೇವೆ (ದೇವಸ್ಥಾನದ ಸುತ್ತ ಕಸ ತೆಗೆಯುವ ಕಾರ್ಯ) ಕೈಗೊಳ್ಳುವುದರ ಮೂಲಕ ತಮ್ಮ ಹರಕೆಯನ್ನು ತೀರಿಸಿದರು. ಚಾಮರಾಜನಗರ ಸೇರಿದಂತೆ ಮೈಸೂರು, ಬೆಂಗಳೂರು, ಬಿಡದಿ, ರಾಮನಗರ, ಕನಕಪುರ, ಚನ್ನಪಟ್ಟಣ, ಮದ್ದೂರು, ಮಳವಳ್ಳಿ ಹಾಗೂ ಮಂಡ್ಯ ಕಡೆಗಳಿಂದ ಹೆಚ್ಚಿನ ಭಕ್ತರು ಆಗಮಿಸಿದ್ದರು.


    ಭಕ್ತರ ಸಂಖ್ಯೆ ಹೆಚ್ಚಳ: ಅಮಾವಾಸ್ಯೆ ಹಿನ್ನಲೆಯಲ್ಲಿ ಶುಕ್ರವಾರ ಮ.ಬೆಟ್ಟಕ್ಕೆ ಸಾವಿರಾರು ಭಕ್ತರು ಆಗಮಿಸಿದ್ದರು. ಇದರಿಂದ ದೇವರ ದರ್ಶನ ಪಡೆಯಲು ಸರದಿ ಸಾಲಿನಲ್ಲಿ ಗಂಟೆಗಟ್ಟಲೇ ಕಾದು ನಿಲ್ಲುವಂತಾಗಿತ್ತು. ನೂಕುನುಗ್ಗಲಿನಲ್ಲಿ ತೆರಳಿ ದೇವರ ಪಡೆಯಲಾಯಿತು. ಈ ವೇಳೆ ಭಕ್ತರು ಅದರಲ್ಲೂ ಮಹಿಳೆಯರು, ಮಕ್ಕಳು ಹಾಗೂ ವಯೋವೃದ್ಧರು ಹೆಚ್ಚಿನ ತೊಂದರೆ ಅನುಭವಿಸಿದರು. ಪ್ರಾಧಿಕಾರದ ಕಾರ್ಯವೈಖರಿಯ ಬಗ್ಗೆ ಭಕ್ತರಿಂದ ಆಕ್ಷೇಪದ ಮಾತುಗಳು ಕೇಳಿ ಬಂದವು. ಕೆಲ ಭಕ್ತರು 250 ಹಾಗೂ 500 ರೂ ಟಿಕೆಟ್ ಪಡೆದು ವಿಶೇಷ ದ್ವಾರದ ಮೂಲಕ ತೆರಳಿ ದೇವರ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಹಾಗಾಗಿ ಮಾದಪ್ಪನ ಸನ್ನಿಧಿಗೆ ಶುಕ್ರವಾರ ಭೇಟಿ ನೀಡಿದ್ದ ಭಕ್ತರ ಸಂಖ್ಯೆ ಹೆಚ್ಚಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts