ಮಾಸ್ಕ್ ಧರಿಸದವರ ವಿರುದ್ಧ ಕ್ರಮಕ್ಕೆ ಅಧಿಕಾರಿಗಳ ತಂಡ ರಚಿಸಿ; ಸರ್ಕಾರಕ್ಕೆ ಹೈಕೋರ್ಟ್ ಆದೇಶ

Highcourt
Published on

ಬೆಂಗಳೂರು: ನಗರದಲ್ಲಿ ಮಾಸ್ಕ್ ಧರಿಸುವುದು ಹಾಗೂ ವ್ಯಕ್ತಿಗತ ಅಂತರ ಕಾಯ್ದುಕೊಳ್ಳುವುದು ಸೇರಿ ಸಾಂಕ್ರಾಮಿಕ ಕಾಯಿಲೆಗಳ ನಿಯಂತ್ರಣ ನಿಯಮಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ಅಧಿಕಾರಿಗಳ ತಂಡ ರಚಿಸುವಂತೆ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶಿಸಿದೆ.

ಕೋವಿಡ್ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡಲು ಬಿಬಿಎಂಪಿ ಹಾಗೂ ಸರ್ಕಾರಕ್ಕೆ ನಿರ್ದೇಶಿಸುವಂತೆ ಕೋರಿ ಸಲ್ಲಿಕೆಯಾಗಿರುವ ಹಲವು ಪಿಐಎಲ್‌ಗಳನ್ನು ಶುಕ್ರವಾರ ವಿಚಾರಣೆ ನಡೆಸಿದ ಸಿಜೆ ಎ.ಎಸ್. ಓಕ್ ನೇತೃತ್ವದ ವಿಭಾಗೀಯ ಪೀಠ, ನ.28ರೊಳಗೆ ಅಧಿಕಾರಿಗಳ ತಂಡ ರಚಿಸಿ ಆದೇಶ ಹೊರಡಿಸುವಂತೆ ಸರ್ಕಾರಕ್ಕೆ ನಿರ್ದೇಶಿಸಿತು.

ತಂಡದಲ್ಲಿ ವಿವಿಧ ಇಲಾಖೆಗಳ ಅಧಿಕಾರಿಗಳು ಸಾಕಷ್ಟು ಪ್ರಮಾಣದಲ್ಲಿರಬೇಕು. ಅವರಿಗೆ ಕರೊನಾ ಮಾರ್ಗಸೂಚಿಗಳನ್ನು ಕಟ್ಟುನಿಟ್ಟಾಗಿ ಜಾರಿ ಮಾಡುವ ಮುಖ್ಯವಾಗಿ ಮಾಸ್ಕ್ ಧರಿಸದ ಹಾಗೂ ವ್ಯಕ್ತಿಗತ ಅಂತರ ಪಾಲಿಸದವರ ವಿರುದ್ಧ ಕ್ರಮ ಜರುಗಿಸುವ ಜವಾಬ್ದಾರಿಯನ್ನಷ್ಟೇ ನಿಗದಿಪಡಿಸಬೇಕು. ಬೆಂಗಳೂರಿನ ಎಲ್ಲ ಪ್ರದೇಶಗಳನ್ನೂ ಮೇಲ್ವಿಚಾರಣೆ ನಡೆಸುವಂತೆ ತಂಡದ ಅಧಿಕಾರಿಗಳನ್ನು ನಿಯೋಜಿಸಬೇಕು ಎಂದು ಹೈಕೋರ್ಟ್ ಆದೇಶದಲ್ಲಿ ತಿಳಿಸಿದೆ.

ಅನುಮತಿ ನೀಡುವಾಗ ಷರತ್ತು ವಿಧಿಸಿ: ಕರ್ನಾಟಕ ಪೊಲೀಸ್ ಕಾಯ್ದೆಯ ಸೆಕ್ಷನ್ 31(1)(ಒ) ಅಡಿಯಲ್ಲಿ ‘ಸಾರ್ವಜನಿಕ ಸಭೆ ಮತ್ತು ಮೆರವಣಿಗೆಗಳಿಗೆ ಅನುಮತಿ ಹಾಗೂ ನಿಯಂತ್ರಣ (ಬೆಂಗಳೂರು ನಗರ) ಆದೇಶ-2008ರ ಅನುಸಾರ ರ‌್ಯಾಲಿ ಮತ್ತು ಮೆರವಣಿಗಳಿಗೆ ಅನುಮತಿ ನೀಡುವಾಗ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ವ್ಯಕ್ತಿಗತ ಅಂತರ ಕಾಯ್ದುಕೊಳ್ಳಬೇಕು ಎಂಬ ಷರತ್ತುಗಳನ್ನು ವಿಧಿಸಬೇಕು. ರ‌್ಯಾಲಿ ವೇಳೆ ನಿಯಮಗಳನ್ನು ಪಾಲನೆ ಮಾಡಲಾಗುತ್ತಿದೆಯೇ ಎಂಬ ಬಗ್ಗೆ ಮೇಲ್ವಿಚಾರಣೆ ನಡೆಸಲು ಸ್ಥಳದಲ್ಲಿ ಸಾಕಷ್ಟು ಪ್ರಮಾಣದಲ್ಲಿ ಪೋಲೀಸ್ ಸಿಬ್ಬಂದಿ ನಿಯೋಜಿಸಬೇಕು ಎಂದು ಸರ್ಕಾರಕ್ಕೆ ನ್ಯಾಯಪೀಠ ನಿರ್ದೇಶಿಸಿದೆ.

ವರದಿ ಕೇಳಿದ ಹೈಕೋರ್ಟ್: ಸಂಸದ ತೇಜಸ್ವಿ ಸೂರ್ಯ ಬಿಜೆಪಿ ಯುವ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷರಾಗಿ ನೇಮಕಗೊಂಡ ಹಿನ್ನೆಲೆಯಲ್ಲಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಿಂದ ಮಲ್ಲೇಶ್ವರದ ಬಿಜೆಪಿ ಕಚೇರಿ ವರೆಗೆ ನಡೆದ ಬೈಕ್ ರ‌್ಯಾಲಿ ವೇಳೆ ಕೋವಿಡ್ ಮಾರ್ಗಸೂಚಿಗಳ ಉಲ್ಲಂಘನೆ ಪ್ರಕರಣ ಕುರಿತು ಕೈಗೊಂಡ ಕ್ರಮಗಳ ಕುರಿತು ವರದಿ ಸಲ್ಲಿಸಲು ಸರ್ಕಾರಕ್ಕೆ ಕೊನೆಯದಾಗಿ ಕಾಲಾವಕಾಶ ನೀಡಿದ ಪೀಠ, ನ್ಯಾಯಾಲಯದ ಈ ಎಲ್ಲ ಆದೇಶಗಳ ಅನುಪಾಲನಾ ವರದಿಯನ್ನು ನ.4ರೊಳಗೆ ಸಲ್ಲಿಸಬೇಕೆಂದು ಸರ್ಕಾರಕ್ಕೆ ಸೂಚಿಸಿ ವಿಚಾರಣೆ ಮುಂದೂಡಿತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net