More

    ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯಲು ಒತ್ತಾಯ

    ಹಾವೇರಿ: ಜಿಲ್ಲೆಯ ಎಲ್ಲ ತಾಲೂಕಿನಲ್ಲಿ ಬೆಂಬಲ ಬೆಲೆ ಯೋಜನೆಯಡಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಉತ್ತರ ಕರ್ನಾಟಕ ರೈತ ಸಂಘದಿಂದ ಗುರುವಾರ ನಗರದ ಜಿಲ್ಲಾಡಳಿತ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

    ಜಿಲ್ಲೆಯಲ್ಲಿ ಅತಿ ಹೆಚ್ಚು ರೈತರು ಮೆಕ್ಕೆಜೋಳ ಬೆಳೆದಿದ್ದಾರೆ. ಆದರೆ, ಮಾರುಕಟ್ಟೆಯಲ್ಲಿ ಉತ್ತಮ ದರವಿಲ್ಲದೇ ಸಂಕಷ್ಟಕ್ಕೆ ತುತ್ತಾಗಿದ್ದಾರೆ. ಮೆಕ್ಕೆಜೋಳ ಬೆಳೆಯಲು ಖರ್ಚು ಮಾಡಿದ ಹಣವೂ ಕೈ ಸೇರದಂತಾಗಿದ್ದು, ಸಾಲ ಮಾಡಿದ ರೈತರು ಮತ್ತಷ್ಟು ಸಂಕಷ್ಟ ಎದುರಿಸುವಂತಾಗಿದೆ. ಕೂಡಲೆ ಜಿಲ್ಲೆಯ ಎಲ್ಲ ತಾಲೂಕುಗಳಲ್ಲಿ ಬೆಂಬಲ ಬೆಲೆಯಲ್ಲಿ ಮೆಕ್ಕೆಜೋಳ ಖರೀದಿ ಕೇಂದ್ರ ತೆರೆಯುವ ಮೂಲಕ ರೈತರಿಗೆ ಅನುಕೂಲ ಕಲ್ಪಿಸಿಕೊಡಬೇಕು ಎಂದು ಒತ್ತಾಯಿಸಿದರು.

    ಜಿಲ್ಲೆಯ ಗ್ರಾಮೀಣ ಭಾಗದಲ್ಲಿ ಮದ್ಯ ಅಕ್ರಮ ಮಾರಾಟ ಹೆಚ್ಚಾಗಿದೆ. ಚಹಾದಂಗಡಿ, ಕಿರಾಣಿ ಅಂಗಡಿಗಳಲ್ಲಿ ಮಾರಾಟ ಮಾಡುತ್ತಿದ್ದಾರೆ. ಮದ್ಯದ ಚಟಕ್ಕೆ ಅಂಟಿಕೊಂಡ ಅನೇಕ ಬಡ ಕುಟುಂಬಗಳು ಬೀದಿ ಪಾಲಾಗುತ್ತಿವೆ. ಆದ್ದರಿಂದ ಗ್ರಾಮೀಣ ಪ್ರದೇಶದಲ್ಲಿ ಮದ್ಯ ಮಾರಾಟ ತಡೆಗಟ್ಟಿ ಸಂಪೂರ್ಣ ಮದ್ಯ ಮುಕ್ತ ಗ್ರಾಮಗಳನ್ನಾಗಿ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

    ಜಿಲ್ಲೆಯಲ್ಲಿ 2019ರಲ್ಲಿ ಉಂಟಾದ ನೆರೆ ಹಾವಳಿಯಿಂದ ಸಾವಿರಾರು ಮನೆಗಳ ಹಾನಿಯಾಗಿತ್ತು. ಹಾನಿಗೀಡಾದ ಮನೆಗಳ ದುರಸ್ತಿಗೆ ಸಂಬಂಧಿಸಿದಂತೆ ಪರಿಹಾರ ನೀಡುವಲ್ಲಿ ತಾರತಮ್ಯ ಎಸಗಲಾಗಿದೆ. ಕೂಡಲೆ ಹಾನಿಗೀಡಾದ ಎಲ್ಲ ಮನೆಗಳಿಗೆ ಜಿಪಿಎಸ್ ಮಾಡಿ ಪರಿಹಾರ ಹಣ ನೀಡುವ ಮೂಲಕ ಮನೆಕಟ್ಟಿಕೊಳ್ಳಲು ಅವಕಾಶ ಮಾಡಿಕೊಡಬೇಕು. ಬೆಳೆ ಹಾನಿ ಪರಿಹಾರದ ಹಣವನ್ನು ರೈತರ ಖಾತೆಗೆ ಜಮೆ ಮಾಡಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

    ಉತ್ತರ ಕರ್ನಾಟಕ ರೈತ ಸಂಘದ ಜಿಲ್ಲಾಧ್ಯಕ್ಷ ಹನುಮಂತಪ್ಪ ದೀವಿಗಿಹಳ್ಳಿ, ಚಂದ್ರಶೇಖರ ಉಪ್ಪಿನ, ಫಕೀರೇಶ ಕಾಳಿ, ಮಲ್ಲೇಶ ಲಮಾಣಿ, ಫಕೀರಗೌಡ ಗಾಜಿಗೌಡ್ರ, ಜಗದೀಶ ಕುಸನೂರ, ಚಂದ್ರಶೇಖರ ಸುಣಗಾರ, ಕಾಳಪ್ಪ ಲಮಾಣಿ, ಶಿವಾನಂದಪ್ಪ ಮತ್ತಿಹಳ್ಳಿ, ಷಣ್ಮುಕಪ್ಪ ಗಿರ್ಜಿ, ಬಸಣ್ಣ ಮೂಲಿಮನಿ, ಶಿವಪುತ್ರಪ್ಪ ಬಣಕಾರ ಸೇರಿ ಅನೇಕರು ಪಾಲ್ಗೊಂಡಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts