More

    ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ: ಕಾಂಗ್ರೆಸ್ ಟಿಕೆಟ್‌ಗೆ ಹೆಚ್ಚಿದ ಪೈಪೋಟಿ

    ಸದೇಶ್ ಕಾರ್ಮಾಡ್ ಮೈಸೂರು
    ಬಿಜೆಪಿಯ ಭದ್ರಕೋಟೆಯಾಗಿರುವ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಲ್ಲಿ ಗೆಲುವು ಸಾಧಿಸಲು ಪಣತೊಟ್ಟಿರುವ ಕಾಂಗ್ರೆಸ್ ಸಮರ್ಥ ಅಭ್ಯರ್ಥಿಯ ಹುಡುಕಾಟದಲ್ಲಿ ತೊಡಗಿದೆ.

    ಈ ಬಾರಿಯ ಲೋಕಸಭಾ ಚುನಾವಣೆಗೆ ಬಿಜೆಪಿ ಮತ್ತು ಜೆಡಿಎಸ್ ಮೈತ್ರಿ ಮಾಡಿಕೊಂಡಿದ್ದು, ಮೈತ್ರಿಕೂಟದಲ್ಲಿ ಟಿಕೆಟ್‌ಗಾಗಿ ಹೆಚ್ಚಿನ ಪೈಪೋಟಿ ಕಂಡುಬರುತ್ತಿಲ್ಲ. ಬಿಜೆಪಿ ಸಂಸದ ಪ್ರತಾಪ್ ಸಿಂಹ ಅವರೇ ಬಹುತೇಕ ಮೈತ್ರಿಕೂಟದ ಅಭ್ಯರ್ಥಿಯಾಗಿ ಕಣಕ್ಕಿಳಿಯುವ ಎಲ್ಲ ಸಾಧ್ಯತೆಗಳು ಇವೆ. ಆದರೆ, ಕಾಂಗ್ರೆಸ್‌ನಲ್ಲಿ ಟಿಕೆಟ್‌ಗೆ ಪೈಪೋಟಿ ಏರ್ಪಟ್ಟಿದೆ.

    ಯಾರೆಲ್ಲ ಆಕಾಂಕ್ಷಿಗಳು?:

    ಕಾಂಗ್ರೆಸ್ ಟಿಕೆಟ್‌ನಿಂದ ಟಿಕೆಟ್ ಬಯಸಿ ವಿಧಾನ ಪರಿಷತ್ ಸದಸ್ಯ ಎಚ್.ವಿಶ್ವನಾಥ್, ಮಾಜಿ ಸಚಿವ ಎಂ.ಕೆ. ಸೋಮಶೇಖರ್, ಮಾಜಿ ಶಾಸಕ ವಾಸು, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಡಾ.ಬಿ.ಜೆ. ವಿಜಯಕುಮಾರ್, ಕೆಪಿಸಿಸಿ ವಕ್ತಾರ ಎಂ. ಲಕ್ಷ್ಮಣ್, ಉಪಾಧ್ಯಕ್ಷ ಸೂರಜ್ ಹೆಗಡೆ ಮುಡಾ ಮಾಜಿ ಅಧ್ಯಕ್ಷ ಸಿ.ಬಸವೇಗೌಡ, ಕೆಪಿಸಿಸಿ ಕಾರ್ಯದರ್ಶಿ ಗುರುಪಾದಸ್ವಾಮಿ, ವಕೀಲ ಚಂದ್ರಮೌಳಿ, ಪಕ್ಷದ ಮುಖಂಡರಾದ ಜೆ.ಜೆ. ಆನಂದ್, ವರುಣ ಮಹೇಶ್, ಡಾ.ಶುಶ್ರುತ್ ಗೌಡ, ಗುರುಮಲ್ಲೇಶ ಅರ್ಜಿ ಸಲ್ಲಿಸಿದ್ದಾರೆ. ಕೊಡಗು ಜಿಲ್ಲೆಯ ಕಾಂಗ್ರೆಸ್ ಮುಖಂಡ, ಕೆಪಿಸಿಸಿ ವಕ್ತಾರ ಚಂದ್ರಮೌಳಿ ಸಹ ಪ್ರಬಲ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಈ ಆಕಾಂಕ್ಷಿಗಳನ್ನು ಹೊರತು ಪಡಿಸಿ ಅಚ್ಚರಿ ಅಭ್ಯರ್ಥಿಯನ್ನು ಪಕ್ಷದ ಹೈಕಮಾಂಡ್ ಕಣಕ್ಕಿಳಿಸಿದರೂ ಅಚ್ಚರಿ ಪಡುವಂತಿಲ್ಲ.

    ಎಸ್.ಟಿ.ಸೋಮಶೇಖರ್ ಕಣಕ್ಕೆ?:

    ತವರು ಜಿಲ್ಲೆ ಮೈಸೂರಿನಲ್ಲಿ ಈ ಬಾರಿ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಲೇ ಬೇಕೆಂಬ ಪಣವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ತೊಟ್ಟಿದ್ದು, ಈ ನಿಟ್ಟಿನಲ್ಲಿ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಲು ಚಿಂತನೆ ನಡೆಸುತ್ತಿದ್ದಾರೆ. ಮಾಜಿ ಶಾಸಕ ಡಾ. ಯತೀಂದ್ರ ಸಿದ್ದರಾಮಯ್ಯ ಸ್ಪರ್ಧೆಗೆ ಅವಕಾಶ ಕೋರಿ ಅರ್ಜಿ ಸಲ್ಲಿಸದೆ ಇದ್ದರೂ ಅಂತಿಮ ಕ್ಷಣದಲ್ಲಿ ಇವರು ಅಭ್ಯರ್ಥಿಯಾಗಿ ಕಣಕ್ಕಿಳಿದರೂ ಅಚ್ಚರಿ ಇಲ್ಲ. ಯತೀಂದ್ರ ಸಿದ್ದರಾಮಯ್ಯ ಅವರನ್ನು ಅಭ್ಯರ್ಥಿಯನ್ನಾಗಿ ಘೋಷಿಸಬೇಕು ಎಂದು ಅವರ ಬೆಂಬಲಿಗರ ಒತ್ತಾಯವಾಗಿದೆ. ಮತ್ತೊಂದೆಡೆ ಬಿಜೆಪಿಯಲ್ಲಿ ಅಸಮಾಧಾನಗೊಂಡಿರುವ ಯಶವಂತಪುರ ಬಿಜೆಪಿ ಶಾಸಕ, ಮಾಜಿ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಎಸ್.ಟಿ. ಸೋಮಶೇಖರ್ ಅವರನ್ನು ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿಸಲು ಚಿಂತನೆ ನಡೆಸಲಾಗಿದೆ.

    ಎಸ್.ಟಿ. ಸೋಮಶೇಖರ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ದ ಸಂದರ್ಭ ಜಿಲ್ಲೆಯ ಹಲವು ಬಿಜೆಪಿ ಮುಖಂಡರೊಂದಿಗೆ ಉತ್ತಮ ಒಡನಾಟ ಹೊಂದಿದ್ದರು. ಕೆಲವು ಬಿಜೆಪಿ ನಾಯಕರೊಂದಿಗೆ ಹೆಚ್ಚಿನ ಆತ್ಮೀಯತೆಯನ್ನು ಹೊಂದಿದ್ದಾರೆ. ಹೀಗಾಗಿ ಎಸ್.ಟಿ. ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಬಿಜೆಪಿಯ ಪ್ರಮುಖ ನಾಯಕರನ್ನು ಸೆಳೆಯಬಹುದು ಎಂಬ ಲೆಕ್ಕಾಚಾ ರವನ್ನು ಕಾಂಗ್ರೆಸ್ ನಾಯಕರು ಹೊಂದಿದ್ದಾರೆ. ಒಂದುವೇಳೆ ಎಸ್.ಟಿ. ಸೋಮಶೇಖರ್ ಕಾಂಗ್ರೆಸ್ ಅಭ್ಯರ್ಥಿಯಾಗಿ ಕಣಕ್ಕಿಳಿದರೆ ಅವರಿಗೆ ಕ್ಷೇತ್ರ ಹೊಸತೇನು ಅಲ್ಲ, ಜಿಲ್ಲೆಯಲ್ಲಿ ಎಲ್ಲರೂ ಅವರಿಗೆ ಚಿರಪರಿಚಿತರೇ ಆಗಿದ್ದಾರೆ. ಅಲ್ಲದೆ, ಸೋಮಶೇಖರ್ ಹೊರಗಿನವರು ಎಂಬ ಮಾತು ಸಹ ಕೇಳಿ ಬರುವುದಿಲ್ಲ. ಏಕೆಂದರೆ ಬಿಜೆಪಿ ಸಂಸದ ಪ್ರತಾಪ್ ಸಿಂಹ ಹಾಸನ ಜಿಲ್ಲೆಯವರಾಗಿದ್ದಾರೆ.

    ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ಪ್ರಾಬಲ್ಯ ಕಳೆದುಕೊಂಡಿದ್ದ ಕಾಂಗ್ರೆಸ್ ವಿಧಾನಸಭಾ ಚುನಾವಣೆಯಲ್ಲಿ ತನ್ನ ಪ್ರಾಬಲ್ಯ ಹೆಚ್ಚಿಸಿಕೊಂಡಿದ್ದು, ಇದು ಕಾರ್ಯಕರ್ತರಲ್ಲಿ ಹೊಸ ಉತ್ಸಾಹ ತಂದಿದೆ. ಬಿಜೆಪಿಯ ಭದ್ರಕೋಟೆಯಾಗಿದ್ದ ಕೊಡಗು ಜಿಲ್ಲೆಯ ಎರಡು ಕ್ಷೇತ್ರಗಳಲ್ಲೂ ಕಾಂಗ್ರೆಸ್ ಗೆಲುವು ಸಾಧಿಸಿರುವುದು ಕಾಂಗ್ರೆಸ್‌ನಲ್ಲಿ ಹೊಸ ಭರವಸೆ ಮೂಡುವಂತೆ ಮಾಡಿದೆ. ಇದೇ ಉತ್ಸಾಹದಲ್ಲಿ ಈ ಬಾರಿ ಲೋಕಸಭಾ ಚುನಾವಣೆಗೆ ಸಮರ್ಥ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಗೆಲುವು ಸಾಧಿಸಲು ಕಾಂಗ್ರೆಸ್ ರಾಜಕೀಯ ತಂತ್ರಗಾರಿಕೆಯನ್ನು ನಡೆಸುತ್ತಿದೆ.

    ಮೈತ್ರಿಕೂಟ ಅಭ್ಯರ್ಥಿ ಯಾರು?

    ಬಿಜೆಪಿ-ಜೆಡಿಎಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಹಾಲಿ ಸಂಸದ ಪ್ರತಾಪ್ ಸಿಂಹ ಕಣಕ್ಕಿಳಿಯುವ ಸಾಧ್ಯತೆ ಹೆಚ್ಚಿದೆ. ಈ ನಡುವೆ ಮೈಸೂರು-ಕೊಡಗು ಕ್ಷೇತ್ರವನ್ನು ತಮಗೆ ಬಿಟ್ಟುಕೊಡಬೇಕು ಎಂಬ ಬೇಡಿಕೆಯನ್ನು ಜೆಡಿಎಸ್ ಮುಂದಿಟ್ಟಿದೆ. ಒಂದುವೇಳೆ ಈ ಕ್ಷೇತ್ರ ಜೆಡಿಎಸ್ ಪಾಲಾದರೆ ಕೆ.ಆರ್. ನಗರ ಮಾಜಿ ಶಾಸಕ ಸಾ.ರಾ. ಮಹೇಶ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಬಿಜೆಪಿ ಹಾಗೂ ಜೆಡಿಎಸ್‌ನಲ್ಲಿ ಟಿಕೆಟ್‌ಗೆ ಹೆಚ್ಚಿನ ಪೈಪೋಟಿ ಕಂಡುಬರುತ್ತಿಲ್ಲ. ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ ಮಾಜಿ ಅಧ್ಯಕ್ಷ ಕೌಟಿಲ್ಯ ರಘು ಬಿಜೆಪಿ ಟಿಕೆಟ್ ಬಯಸಿದ್ದು, ಈ ಕುರಿತು ಬಹಿರಂಗ ಹೇಳಿಕೆಯನ್ನು ನೀಡಿದ್ದಾರೆ. ಕೊಡಗು ಜಿಲ್ಲೆಯಲ್ಲಿ ಬಿಜೆಪಿಗೆ ಭದ್ರವಾದ ಅಡಿಪಾಯ ಹಾಕಿದವರಲ್ಲಿ ಒಬ್ಬರಾದ ಮಾಜಿ ಸಚಿವ ಎಂ.ಪಿ. ಅಪ್ಪಚ್ಚು ರಂಜನ್ ಟಿಕೆಟ್ ಬಯಸಿದ್ದಾರೆ. ‘ಪ್ರತಿ ಬಾರಿ ಬಿಜೆಪಿಯಿಂದ ಮೈಸೂರು ಭಾಗದವರಿಗೆ ಟಿಕೆಟ್ ನೀಡಲಾಗುತ್ತಿದ್ದು, ಈ ಬಾರಿ ಕೊಡಗು ಜಿಲ್ಲೆಯವರಿಗೆ ಅವಕಾಶ ಮಾಡಿಕೊಡಬೇಕು. ಈ ನಿಟ್ಟಿನಲ್ಲಿ ಪಕ್ಷದ ವರಿಷ್ಠರ ಗಮನ ಸೆಳೆಯಲಾಗಿದೆ’ ಎಂದು ಅಪ್ಪಚ್ಚು ರಂಜನ್ ಹೇಳಿಕೆ ನೀಡುವ ಮೂಲಕ ತಾನು ಪ್ರಬಲ ಟಿಕೆಟ್ ಆಕಾಂಕ್ಷಿ ಎಂಬ ಸಂದೇಶವನ್ನು ರವಾನಿಸಿದ್ದಾರೆ. ಅಂತಿಮವಾಗಿ ಬಿಜೆಪಿ ವರಿಷ್ಠರು ಯಾರನ್ನು ಅಭ್ಯರ್ಥಿಯಾಗಿ ಕಣಕ್ಕಿಳಿಸಲಿದ್ದಾರೆ ಎಂದು ಕಾದು ನೋಡಬೇಕಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts