More

    ಯೋಜನೆಗಳ ನಿರ್ಲಕ್ಷಿಸಿದರೆ ಹುಷಾರ್

    ಬೆಳಗಾವಿ: ಕೇಂದ್ರ, ರಾಜ್ಯ ಸರ್ಕಾರದ ಯೋಜನೆಗಳು ಜನರಿಗೆ ಸುಲಭವಾಗಿ ತಲುಪಬೇಕು. ಈ ವಿಷಯದಲ್ಲಿ ಅಧಿಕಾರಿಗಳು ನಿರ್ಲಕ್ಷೃ ವಹಿಸಿದರೆ ಮುಲಾಜಿಲ್ಲದೆ ಕ್ರಮ ವಹಿಸಬೇಕಾಗುತ್ತದೆ ಎಂದು ರಾಜ್ಯಸಭಾ ಸದಸ್ಯ ಈರಣ್ಣ ಕಡಾಡಿ ಎಚ್ಚರಿಕೆ ನೀಡಿದರು.

    ನಗರದ ಜಿಪಂ ಸಭಾಂಗಣದಲ್ಲಿ ಗುರುವಾರ ಜರುಗಿದ 2022-23ನೇ ಸಾಲಿನ ನಾಲ್ಕನೇ ತ್ರೈಮಾಸಿಕ ಜಿಲ್ಲಾ ಮಟ್ಟದ (ದಿಶಾ) ಸಮಿತಿ ಸಭೆಯಲ್ಲಿ ಮಾತನಾಡಿದ ಅವರು, ಬಡವರಿಗೆ ಸರ್ಕಾರ ಕೋಟ್ಯಂತರ ರೂ. ವೆಚ್ಚದಲ್ಲಿ ಯೋಜನೆಗಳನ್ನು ಅನುಷ್ಠಾನಗೊಳಿಸಿದೆ. ಆದರೆ, ಅರ್ಹ ಫಲಾನುಭವಿಗಳಿಗೆ ನಿಗದಿತ ಸಮಯದಲ್ಲಿ ಸಿಗುತ್ತಿಲ್ಲ. ಅದಕ್ಕಾಗಿ ಯೋಜನೆಗಳನ್ನು ನಿರ್ಲಕ್ಷಿಸಿದರೆ ಸಂಬಂಧಿತ ಎಲ್ಲ ಇಲಾಖೆಯ ಅಧಿಕಾರಿಗಳು ಹುಷಾರಾಗಿರಬೇಕು ಎಂದರು.

    ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ವಿವಿಧ ಕಾಮಗಾರಿಗಳಿಗೆ ಬಳಕೆಯಾಗುವ ಅನುದಾನ ಹಾಗೂ ಹಂತವಾರು ಪ್ರಗತಿ ವರದಿಗಳನ್ನು ಜನಪ್ರತಿನಿಧಿಗಳಿಗೆ ಸಲ್ಲಿಸಬೇಕು. ಸರ್ಕಾರದ ಯೋಜನೆಗಳ ಅನುಷ್ಠಾನ ಕಾರ್ಯಕ್ರಮಗಳಿಗೆ ಜಿಲ್ಲೆಯ ಸಂಬಂಧಿತ ಜನಪ್ರತಿನಿಧಿಗಳನ್ನು ಕಡ್ಡಾಯವಾಗಿ ಆಹ್ವಾನಿಸಬೇಕು. ಇದರಿಂದ ಸಾರ್ವಜನಿಕರಿಗೆ ಯೋಜನೆಗಳ ಕುರಿತು ಸ್ಪಷ್ಟ ಮಾಹಿತಿ ದೊರೆಯುತ್ತದೆ ಹಾಗೂ ವ್ಯಾಪಕ ಪ್ರಚಾರವಾಗುತ್ತದೆ ಎಂದರು. ಜಿಪಂ ಸಿಇಒ ಹರ್ಷಲ್ ಭೋಯರ್ ಮಾತನಾಡಿ, ಸರ್ಕಾರದ ವಿವಿಧ ಯೋಜನೆಗಳಿಗೆ ರಾಷ್ಟ್ರೀಕೃತ ಬ್ಯಾಂಕ್ ಗಳು ಸಾಲ ಸೌಲಭ್ಯ ವಿತರಣೆ ಮಾಡಬೇಕು. ಈಗಾಗಲೇ ವಿವಿಧ ಯೋಜನೆಗಳಿಗೆ ಬಂದಿರುವ ಸಾಕಷ್ಟು ಅರ್ಜಿಗಳು ಬಾಕಿ ಉಳಿದಿವೆ. ಸರ್ಕಾರದ ಯೋಜನೆಗಳಿಗೆ ಬಂದಂತಹ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕು. ರಸ್ತೆ ಕಾಮಗಾರಿಗಳ ಪಟ್ಟಿಯನ್ನು ಸಂಬಂಧಿಸಿದ ಅಧಿಕಾರಿಗಳು ಕೂಡಲೇ ಸಲ್ಲಿಸಬೇಕು ಮತ್ತು ರಸ್ತೆ ಕಾಮಗಾರಿಗಳಿಗೆ ನಾಮಫಲಕ ಅಳವಡಿಸಿರುವ ಬಗ್ಗೆ ಫೋಟೋ ದಾಖಲೆಗಳನ್ನು ಸಲ್ಲಿಸಬೇಕು ಎಂದು ಸೂಚಿಸಿದರು.

    ಮಹಾನಗರ ಪಾಲಿಕೆ ಆಯುಕ್ತ ಡಾ.ರುದ್ರೇಶ ಘಾಳಿ ಮಾತನಾಡಿ, ಘನತ್ಯಾಜ್ಯ ವಿಲೇವಾರಿಗೆ ಈಗಾಗಲೇ ಘಟಕಗಳನ್ನು ಸ್ಥಾಪಿಸಲಾಗಿದೆ. ನಗರ ಹಾಗೂ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿ ಸ್ವಚ್ಚ ಭಾರತ ಮಿಷನ್ ಯೋಜನೆಯಡಿ, ವೆಸ್ಟ್ ಮ್ಯಾನೇಜ್ಮೆಂಟ್, ಮನೆ ಮನೆಗೆ ತೆರಳಿ ಕಸ ಸಂಗ್ರಹ ಮಾಡಲಾಗುತ್ತಿದೆ. ಕಮ್ಯೂನಿಟಿ ಶೌಚಗೃಹ, ವೈಯಕ್ತಿಕ ಶೌಚಗೃಹ, ರಸ್ತೆ ಚರಂಡಿ ನಿರ್ಮಾಣ ಕಾರ್ಯ ಪ್ರಗತಿಯಲ್ಲಿವೆ. ಮಹಿಳಾ ಸೊಸೈಟಿ, ಸಂಘಗಳ ಮೂಲಕ ಸ್ವಚ್ಛ ಭಾರತ ಅಭಿಯಾನದ ಜಾಗೃತಿ ಸಾರ್ವಜನಿಕರಿಗೆ ಮೂಡಿಸಲಾಗುತ್ತಿದೆ ಎಂದರು.

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಎಂ. ಬಸವರಾಜ, ಜಿಪಂ ಮುಖ್ಯ ಲೆಕ್ಕಾಧಿಕಾರಿ ಪರುಶರಾಮ ದುಡಗುಂಟಿ, ಆಹಾರ ಮತ್ತು ನಾಗರಿಕ ಸರಬರಾಜು ಪೂರೈಕೆ ಇಲಾಖೆಯ ಜಂಟಿ ನಿರ್ದೇಶಕ ಶ್ರೀಶೈಲ ಕಂಕಣವಾಡಿ, ತೋಟಗಾರಿಕೆ ಇಲಾಖೆಯ ಉಪ ನಿರ್ದೇಶಕ ಮಹಾಂತೇಶ ಮುರಗೋಡ ಇತರರಿದ್ದರು.
    ಜೆಜೆಎಂಗೆ ನೀರಿನ ಸಂಪರ್ಕ ಕಲ್ಪಿಸಿ: ಬೆಕ್ಕಿನಕೇರಿ, ಕಿಣೆಯೆ, ಸಾಂಬ್ರಾ ಗ್ರಾಮಗಳಿಗೆ ಕುಡಿಯುವ ನೀರಿನ ತೊಂದರೆಯಿದೆ, ಜಲ ಜೀವನ ಮಿಷನ್ ಯೋಜನೆಯ ಕಾಮಗಾರಿಗಳು ಬಾಕಿ ಇವೆ. ಕೂಡಲೇ ಕಾಮಗಾರಿ ಪೂರ್ಣಗೊಳಿಸಬೇಕು. ಕುಡಿಯುವ ನೀರಿನ ಸಮಸ್ಯೆ ಇರುವ ಗ್ರಾಮಗಳಿಗೆ ಕೂಡಲೇ ನೀರಿನ ಸಂಪರ್ಕ ಕಲ್ಪಿಸಿ, ನಿಗದಿತ ಅವಧಿಯಲ್ಲಿ ಕಾಮಗಾರಿಗಳನ್ನು ಪೂರ್ಣಗೊಳಿಸಬೇಕು ಸಂಸದೆ ಮಂಗಲ ಅಂಗಡಿ ಸೂಚಿಸಿದರು.

    ಸ್ಮಾರ್ಟ್ ಸಿಟಿಗೆ 815 ಕೋಟಿ ರೂ. ಖರ್ಚು

    ಬೆಳಗಾವಿ ಸ್ಮಾರ್ಟ್ ಸಿಟಿ ಯೋಜನೆ 2016ರಲ್ಲಿ ಪ್ರಾರಂಭಗೊಂಡಿದ್ದು, ಸ್ಮಾರ್ಟ್ ಸಿಟಿ ಮಿಷನ್ ಯೋಜನೆಯಡಿ ರೂ. 930 ಕೋಟಿ ಅನುದಾನ ಮೀಸಲಿಡಲಾಗಿದೆ. ಕೇಂದ್ರ ಸರ್ಕಾರದಿಂದ 441 ಕೋಟಿ ರೂ. ಹಾಗೂ ರಾಜ್ಯ ಸರ್ಕಾರದಿಂದ 413 ಕೋಟಿ ರೂ. ಸೇರಿ ಒಟ್ಟು 854 ಕೋಟಿ ರೂ.ಅನುದಾನ ಬಿಡುಗಡೆ ಮಾಡಲಾಗಿದೆ. ಈವರೆಗೆ ಸ್ಮಾರ್ಟ್ ಸಿಟಿ ಕಾಮಗಾರಿಗಳಿಗೆ ಒಟ್ಟು ರೂ. 815.02 ಕೋಟಿ ಅನುದಾನ ಖರ್ಚು ಮಾಡಲಾಗಿದೆ. ಸ್ಮಾರ್ಟ್‌ಸಿಟಿ ಯೋಜನೆಯಡಿ ಒಟ್ಟು 102 ಕಾಮಗಾರಿ ಕೈಗೆತ್ತಿಕೊಳ್ಳಲಾಗಿದೆ. ಇಲ್ಲಿಯವರೆಗೆ ಒಟ್ಟು 604.28 ಕೋಟಿ ರೂ. ಮೊತ್ತದ 87 ಕಾಮಗಾರಿ ಪೂರ್ಣಗೊಳಿಸಲಾಗಿದೆ. 325.72 ಕೋಟಿ ರೂ.ಮೊತ್ತದ 15 ಕಾಮಗಾರಿ ಪ್ರಗತಿಯಲ್ಲಿವೆ ಎಂದು ಸ್ಮಾರ್ಟ್‌ಸಿಟಿ ಅಧಿಕಾರಿಗಳು ತಿಳಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts