

ಗುಂಡ್ಲುಪೇಟೆ: ಕೆರೆಗಳಿಗೆ ನದಿ ಮೂಲದಿಂದ ನೀರು ತುಂಬಿಸುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತ ಸಂಘದ ವತಿಯಿಂದ ಬುಧವಾರ ಪ್ರತಿಭಟನೆ ನಡೆಸಲಾಯಿತು.
ಪಟ್ಟಣದ ಪ್ರವಾಸಿ ಮಂದಿರದಿಂದ ಮೆರವಣಿಗೆ ಹೊರಟ ಪ್ರತಿಭಟನಾಕಾರರು ರಾಷ್ಟ್ರೀಯ ಹೆದ್ದಾರಿಯಲ್ಲಿ ಸಾಗಿ ಸಾರಿಗೆ ಬಸ್ ನಿಲ್ದಾಣ ಬಳಿ ಮಾನವ ಸರಪಳಿ ನಿರ್ಮಿಸಿ ರಸ್ತೆ ತಡೆ ನಡೆಸಿದರು. ನಂತರ ತಾಲೂಕು ಕಚೇರಿ ಮುಂಭಾಗ ಸಮಾವೇಶಗೊಂಡು ಸರ್ಕಾರ ಹಾಗೂ ಜಿಲ್ಲಾಡಳಿತದ ವಿರುದ್ಧ ಘೋಷಣೆ ಕೂಗಿದರು.
ರೈತ ಸಂಘ ಹಾಗೂ ಹಸಿರು ಸೇನೆಯ ಜಿಲ್ಲಾ ಸಂಚಾಲಕ ಮಾಡ್ರಳ್ಳಿ ಮಹದೇವಪ್ಪ ಮಾತನಾಡಿ, ತಾಲೂಕಿನ ಗಣಿ ಸಂಪತ್ತು ಅಕ್ರಮವಾಗಿ ಕೇರಳ ಮತ್ತು ತಮಿಳುನಾಡು ಪಾಲಾಗುತ್ತಿದ್ದರೂ ಅಧಿಕಾರಿಗಳು ತಡೆಯುವಲ್ಲಿ ವಿಫಲರಾಗಿದ್ದಾರೆ. ತಾಲೂಕಿನ ಕೆರೆಗಳಿಗೆ ನೀರು ತುಂಬಿಸುವಲ್ಲಿ ಅಧಿಕಾರಿಗಳು ತಾರತಮ್ಯ ಮಾಡುತ್ತಿದ್ದಾರೆ. ವನ್ಯ ಪ್ರಾಣಿಗಳ ಹಾವಳಿಯನ್ನು ಆರಣ್ಯ ಇಲಾಖೆ ತಡೆಯುವಲ್ಲಿ ವಿಫಲವಾಗಿದೆ. ಬೇರೆ ರಾಜ್ಯಗಳಿಗೆ ಹೋಲಿಸಿದರೆ ರಾಜ್ಯದಲ್ಲಿ ಸ್ಮಾರ್ಟ್ ಮೀಟರ್ ದರ ಹೆಚ್ಚಳವಿದ್ದು ಇದನ್ನು ಯಾವುದೇ ಕಾರಣಕ್ಕೂ ಅಳವಡಿಸಬಾರದು ಹಾಗೂ ಯಥಾಸ್ಥಿತಿ ಮುಂದುವರಿಸಬೇಕು ಎಂದು ಒತ್ತಾಯಿಸಿದರು.
ರೈತ ಸಂಘದ ರಾಜ್ಯ ಉಪಾಧ್ಯಕ್ಷ ಡಾ.ಗುರುಪ್ರಸಾದ್ ಮಾತನಾಡಿ, ಸರ್ಕಾರದ ನಿಯಮದಂತೆ ದಿನಕ್ಕೆ ಸುಮಾರು 7 ಗಂಟೆಗಳ ಕಾಲ ವಿದ್ಯುತ್ ನೀಡಬೇಕು. ಆದರೆ ಪಂಪ್ಸೆಟ್ಗಳಿಗೆ ನಿಗದಿತ ಅವಧಿಯಲ್ಲಿ ಸರಿಯಾಗಿ ವಿದ್ಯುತ್ ನೀಡದೆ ಏಕಾಏಕಿ ವಿದ್ಯುತ್ ಸಂಪರ್ಕ ಕಡಿತ ಮಾಡಿರುವುದು ಖಂಡನೀಯ. ಲಘುವಾಗಿ ವರ್ತಿಸುತ್ತಿರುವ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಕೂಡಲೇ ರಾಜೀನಾಮೆ ನೀಡಬೇಕು. ರೈತರ ಬಳಿ ಕ್ಷಮೆ ಕೇಳಬೇಕು. ಬೊಮ್ಮಲಾಪುರ ಗ್ರಾಮದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳಿಗೆ ದಿಗ್ಬಂದನ ಹಾಕಿದ ರೈತರ ಮೇಲೆ ಪ್ರಕರಣ ದಾಖಲಿಸಿರುವುದು ಖಂಡನಿಯ ಎಂದು ಹೇಳಿದರು.
ಹಾಲಹಳ್ಳಿ ಮಹೇಶ್ ಇತರರಿದ್ದರು.