More

    ಲೈಂಗಿಕ ದೌರ್ಜನ್ಯ ಪ್ರಕರಣ ಉನ್ನತ ಮಟ್ಟದ ತನಿಖೆಗೆ ಆಗ್ರಹಿ:ಬಿಎಸ್ಪಿ ಪ್ರತಿಭಟನೆ

    ಹಾಸನ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳಾದ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ. ರೇವಣ್ಣ ಅವರನ್ನು ಬಂಧಿಸಿ ಸಿಬಿಐ ಅಥವಾ ಸುಪ್ರೀಂಕೋರ್ಟ್ ನ್ಯಾಯಮೂರ್ತಿಗಳ ನೇತೃತ್ವದಲ್ಲಿ ಉನ್ನತ ಮಟ್ಟದ ತನಿಖೆ ನಡೆಸಿ ಆರೋಪಿಗಳ ಮೇಲೆ ಕಠಿಣ ಕಾನೂನುಕ್ರಮ ಕೈಗೊಂಡು, ಸಂತ್ರಸ್ತ ಮಹಿಳೆಯರಿಗೆ ಸೂಕ್ತ ನ್ಯಾಯ ಮತ್ತು ರಕ್ಷಣೆ ನೀಡುವಂತೆ ಬಿಎಸ್‌ಪಿ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಿ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಲಾಯಿತು.
    ಬಳಿಕ ಬಿಎಸ್‌ಪಿ ರಾಜ್ಯ ಉಪಾಧ್ಯಕ್ಷ ಗಂಗಾಧರ್ ಬಹುಜನ್ ಮಾತನಾಡಿ, ಕಳೆದೆ ಕೆಲವು ದಿನಗಳಿಂದ ವಿವಿಧ ಮಾಧ್ಯಮಗಳಲ್ಲಿ ಬಿಜೆಪಿ -ಜೆಡಿಎಸ್ ಮೈತ್ರಿ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಅವರಿಗೆ ಸಂಬಂಧಿಸಿದ ಲೈಂಗಿಕ ಚಿತ್ರಗಳು ಮತ್ತು ವೀಡಿಯೋ ಬಿತ್ತರವಾಗಿತ್ತಿವೆ. ಆ ಲೈಂಗಿಕ ಚಿತ್ರಗಳು ಮತ್ತು ದೃಶ್ಯಗಳು ವಾಟ್ಸಾಪ್‌ನಲ್ಲಿ ಹರಿದಾಡುತ್ತಿವೆ. ಎಲ್ಲೆಡೆ ಈ ಕೃತ್ಯದ ಕುರಿತು ಸಾರ್ವಜನಿಕರಲ್ಲಿ ತೀವ್ರ ಆಕ್ರೋಶ ಮತ್ತು ಆತಂಕ ವ್ಯಕ್ತವಾಗುತ್ತಿದೆ. ಪ್ರತೀ ದಿನ ಹೊಸ ಹೊಸ ವೀಡಿಯೋಗಳು ಮತ್ತು ಫೋಟೋಗಳನ್ನು ಬಿಡುಗಡೆ ಮಾಡಲಾಗುತ್ತಿದೆ. ಈ ಚಿತ್ರಗಳು ಮತ್ತು ವೀಡಿಯೋಗಳಿಂದಾಗಿ ಸಂತ್ರಸ್ತ ಮಹಿಳೆಯರ ಖಾಸಗಿ ಮತ್ತು ಕೌಟುಂಬಿಕ ಬದುಕು ಛಿದ್ರವಾಗಿದೆ ಎಂದರು.
    ಯಾವ ಕ್ಷಣದಲ್ಲಿ ಯಾವಾಗ ಮತ್ತೊಂದು ವಿಡಿಯೋ ಹೊರ ಬರುತ್ತದೆಯೋ, ಅದರಲ್ಲಿ ಯಾವ ಮಹಿಳೆಯ ಖಾಸಗಿ ಪೋಟೋಗಳು ಮತ್ತು ದೃಶ್ಯಗಳು ಬಿತ್ತರಗೊಳ್ಳಲಿವೆಯೋ ಎಂಬ ಆತಂಕ ಮೂಡಿದೆ. ಇದೊಂದು ಗಂಭೀರ ಸ್ವರೂಪದ ಅಪರಾಧವಾಗಿದೆ. ಪ್ರಜೆಗಳು ತಮಗೆ ನೀಡಿರುವ ಅಧಿಕಾರ ದುರ್ಬಳಕೆ ಮಾಡಿಕೊಂಡು ಸಾವಿರಾರು ಮಹಿಳೆಯರ ಮೇಲೆ ಈ ರೀತಿ ಲೈಂಗಿಕ ದೌರ್ಜನ್ಯ ಎಸಗಿರುವುದು ಜಾಗತಿಕ ಮಟ್ಟದಲ್ಲಿ ಇಡೀ ದೇಶವೇ ತಲೆತಗ್ಗಿಸುವಂತಹ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
    ರಾಜಕೀಯ ಅಧಿಕಾರ, ಹಣ, ಆಸ್ತಿಯ ಮದದಿಂದ ಮೆರೆಯುತ್ತಿರುವ ಹಾಸನ ಜಿಲ್ಲೆಯ ಪ್ರಭಾವಿ ರಾಜಕೀಯ ಕುಟುಂಬದ ಕುಡಿ ಪ್ರಜ್ವಲ್ ರೇವಣ್ಣ ಅವರು ಮಹಿಳೆಯರನ್ನು ತನ್ನ ಕಾಮದಾಹಕ್ಕೆ ನಿರಂತರವಾಗಿ ಬಳಸಿಕೊಂಡಿರುವುದಲ್ಲದೆ ಆ ನಗ್ನ ದೃಶ್ಯಗಳನ್ನು ತನ್ನ ಮೊಬೈಲ್‌ನಲ್ಲಿ ಚಿತ್ರೀಕರಿಸಿಕೊಂಡಿದ್ದಾರೆ. ಮಹಿಳೆಯರನ್ನು ಈ ರೀತಿ ಕಾಮತೃಷೆಗೆ ಬಳಸಿಕೊಳ್ಳಲು ಅವನು ತನಗಿರುವ ರಾಜಕೀಯ ಅಧಿಕಾರವನ್ನು ದುರ್ಬಳಕೆ ಮಾಡಿಕೊಂಡಿರುವುದು ಸ್ಪಷ್ಟವಾಗಿದೆ. ಇಂತಹ ವಿಕೃತ ಮನಸ್ಸಿನ ವ್ಯಕ್ತಿ ಜನಪ್ರತಿನಿಧಿಯಾಗಿ ಇರುವುದಿರಲಿ ನಾಗರಿಕ ಸಮಾಜದಲ್ಲಿ ಮುಕ್ತವಾಗಿ ಓಡಾಡಿಕೊಂಡಿರುವುದು ಸಹ ಬಹಳ ಅಪಾಯಕಾರಿಯಾದ ಮತ್ತು ಆತಂಕಕಾರಿಯಾದ ಸಂಗತಿಯಾಗಿದೆ. ಆದ್ದರಿಂದ ಈಗ ದಾಖಲಾಗಿರುವ ಪ್ರಕರಣದ ಆರೋಪಿಗಳಾದ ಪ್ರಜ್ವಲ್ ರೇವಣ್ಣ ಮತ್ತು ಎಚ್.ಡಿ.ರೇವಣ್ಣ ಇವರನ್ನು ಕೂಡಲೇ ಬಂಧಿಸಿ ವಿಚಾರಣೆ ನಡೆಸುವ ಮೂಲಕ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.
    ಪ್ರತಿಭಟನೆಯಲ್ಲಿ ಪಕ್ಷದ ಜಿಲ್ಲಾಧ್ಯಕ್ಷ ಹರೀಶ್ ಅತ್ನಿ, ರಾಜ್ಯ ಪ್ರಧಾನ ಕಾರ್ಯದರ್ಶಿ ಶಿವಮ್ಮ, ಜಿಲ್ಲಾ ಸಂಯೋಜಕ ಮಲ್ಲಯ್ಯ, ಜಿಲ್ಲಾ ಉಪಾಧ್ಯಕ್ಷ ಲೋಹಿತ್ ಕಡೇಗರ್ಜೇ, ಕಿರಣ್ ಕುಮಾರ್, ಸಿ.ಜಿ. ಸೋಮಶೇಖರ್, ರೂಪಾ ಮೋಹನ್, ಬಿ.ವಿ. ಸುರೇಂದ್ರ, ರಾಜು, ಸಿದ್ದಲಿಂಗಯ್ಯ, ರಾಜು ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts