More

    ವಿದ್ಯಾರ್ಥಿ ವೇತನ ಬಿಡುಗಡೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ

    ಶಿವಮೊಗ್ಗ/ಸಾಗರ: 2021-22ನೇ ಸಾಲಿನ ಶೈಕ್ಷಣಿಕ ವರ್ಷದ ಬಾಕಿ ಇರುವ ವಿದ್ಯಾರ್ಥಿ ವೇತನ ಕೂಡಲೆ ಬಿಡುಗಡೆ ಮಾಡಬೇಕು ಮತ್ತು ಯುಯುಸಿಎಂಎಸ್ ತಂತ್ರಾಂಶವನ್ನು ಸರಿಪಡಿಸಿ ಫಲಿತಾಂಶ ಪ್ರಕಟಿಸಬೇಕು ಎಂದು ಒತ್ತಾಯಿಸಿ ಗುರುವಾರ ಶಿವಮೊಗ್ಗ ಮತ್ತು ಸಾಗರದಲ್ಲಿ ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಪ್ರತಿಭಟನೆ ನಡೆಸಿದರು.
    ಶಿಕ್ಷಣ ಇಲಾಖೆ ತಂತ್ರಾಂಶದಲ್ಲಿ ವಿದ್ಯಾರ್ಥಿ ವೇತನ ಬಿಡುಗಡೆಯಾಗಿರುವುದಾಗಿ ತಿಳಿಸಲಾಗಿದೆ. ಆದರೆ ವಾಸ್ತವದಲ್ಲಿ ಅದು ವಿದ್ಯಾರ್ಥಿಗಳ ಖಾತೆಗೆ ಬಂದಿಲ್ಲ. ಹೀಗಾಗಿ ಅವ್ಯವಹಾರ ನಡೆದಿರುವ ಅನುಮಾನವೂ ಇದೆ. ಹೀಗಾಗಿ ಸಮರ್ಪಕ ತನಿಖೆ ನಡೆಸಬೇಕೆಂದು ಆಗ್ರಹಿಸಿದರು.
    ಪ್ರತಿವರ್ಷ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸುತ್ತಾರೆ. ಆದರೆ ವಿವಿಧ ಕಾರಣಗಳಿಂದ ವಿದ್ಯಾರ್ಥಿ ವೇತನ ಬಿಡುಗಡೆಯಾಗುತ್ತಿಲ್ಲ. ಇದರಿಂದ ಲಕ್ಷಾಂತರ ಬಡ ಮತ್ತು ಪ್ರತಿಭಾವಂತ ವಿದ್ಯಾರ್ಥಿಗಳಿಗೆ ತೊಂದರೆಯಾಗುತ್ತಿದೆ ಎಂದು ದೂರಿದರು.
    ತಂತ್ರಾಂಶದಲ್ಲಿ ಸಮಸ್ಯೆ: ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಯಾದ ಬಳಿಕ ಎಲ್ಲ ವಿವಿಗಳು ಯುಯುಸಿಎಂಎಸ್ ತಂತ್ರಾಂಶ ಬಳಸಿ ದಾಖಲಾತಿಯಿಂದ ಫಲಿತಾಂಶದವರೆಗೆ ಮಾಹಿತಿಗಳನ್ನು ತಂತ್ರಾಂಶದಲ್ಲಿ ನಮೂದಿಸಬೇಕು. ಆದರೆ ಈ ತಂತ್ರಾಂಶದಲ್ಲಿ ತಾಂತ್ರಿಕ ಸಮಸ್ಯೆ ಎದುರಾಗಿರುವುದರಿಂದ ಹಾಸ್ಟೆಲ್ ಪ್ರವೇಶಕ್ಕೆ ಅರ್ಜಿ ಸಲ್ಲಿಸಲು, ಬೇರೆ ಕಾಲೇಜಿಗೆ ವರ್ಗಾವಣೆ ಪಡೆಯಲು, ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಲು ತೊಂದರೆಯಾಗಿದೆ. ಈ ಸಮಸ್ಯೆಯನ್ನು ಕೂಡಲೇ ಬಗೆಹರಿಸಬೇಕೆಂದು ವಿದ್ಯಾರ್ಥಿಗಳು ಒತ್ತಾಯಿಸಿದರು. ಶಿವಮೊಗ್ಗದಲ್ಲಿ ಎಬಿವಿಪಿ ಜಿಲ್ಲಾ ಸಂಚಾಲಕ ಮನು ನಾಯಕ ಪ್ರತಿಭಟನೆ ನೇತೃತ್ವ ವಹಿಸಿದ್ದರು.
    ಸಾಗರದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು ಉಪವಿಭಾಗಾಧಿಕಾರಿಗೆ ಮನಿವ ಪತ್ರ ಸಲ್ಲಿಸಿದರು. ಲಕ್ಷಾಂತರ ಪ್ರತಿಭಾವಂತ ಬಡ ವಿದ್ಯಾರ್ಥಿಗಳು ವಿದ್ಯಾರ್ಥಿ ವೇತನದ ಮೂಲಕ ಶಿಕ್ಷಣ ಪಡೆಯುತ್ತಿದ್ದಾರೆ. ಈ ಬಾರಿ ವಿದ್ಯಾರ್ಥಿ ವೇತನದ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಿದ್ದು, ವಿದ್ಯಾರ್ಥಿ ವೇತನ ಬಿಡುಗಡೆಯಾಗಿದೆ ಎಂದು ಹೇಳಲಾಗುತ್ತಿದೆ. ಆದರೆ ಬಹುತೇಕ ವಿದ್ಯಾರ್ಥಿಗಳಿಗೆ ಈತನಕ ವಿದ್ಯಾರ್ಥಿ ವೇತನ ಬಂದಿದಿಲ್ಲ. ಇದರ ಜೊತೆಗೆ ವಿದ್ಯಾರ್ಥಿ ವೇತನ ಹಂಚಿಕೆಯಲ್ಲಿ ಅವ್ಯವಹಾರ ನಡೆದಿದೆ ಎನ್ನುವ ದೂರುಗಳು ಸಹ ಇವೆ. ಸರ್ಕಾರ ತಕ್ಷಣ ಬಾಕಿ ಇರುವ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿ ವೇತನ ಬಿಡುಗಡೆ ಮಾಡಬೇಕು. ಅವ್ಯವಹಾರದ ಕುರಿತು ಸೂಕ್ತ ತನಿಖೆ ನಡೆಸಬೇಕು ಎಂದು ಆಗ್ರಹಪಡಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts