More

    ವಿದ್ಯುತ್ ವ್ಯತ್ಯಯವಾಗದಂತೆ ನೋಡಿಕೊಳ್ಳಿ

    ಯಲ್ಲಾಪುರ: ಮಳೆಗಾಲದ ಸಂದರ್ಭದಲ್ಲಿ ಜಿಲ್ಲಾದ್ಯಂತ ವಿದ್ಯುತ್ ವ್ಯವಸ್ಥೆಯಲ್ಲಿ ಲೋಪವಾಗದಂತೆ ನೋಡಿಕೊಳ್ಳಬೇಕು. ಅದಕ್ಕೆ ಅಗತ್ಯವಾದ ಎಲ್ಲ ಮುಂಜಾಗ್ರತೆ ಕ್ರಮ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ ಅಧಿಕಾರಿಗಳಿಗೆ ಸೂಚಿಸಿದರು.

    ಪಟ್ಟಣದ ಅರಣ್ಯ ಪರಿವೀಕ್ಷಣಾ ಮಂದಿರದಲ್ಲಿ ಶನಿವಾರ ಆಯೋಜಿಸಿದ್ದ ಹೆಸ್ಕಾಂ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

    ಮಳೆಗಾಲದಲ್ಲಿ ವಿದ್ಯುತ್ ಪೂರೈಕೆಯಲ್ಲಿ ಸಮಸ್ಯೆಯಾಗದಂತೆ ವಿದ್ಯುತ್ ಕಂಬಗಳು, ಸಾಮಗ್ರಿಗಳನ್ನು ಶೇಖರಿಸಿಟ್ಟುಕೊಳ್ಳಬೇಕು. ಹೆಚ್ಚಿನ ಸಂಖ್ಯೆಯಲ್ಲಿ ಗ್ಯಾಂಗ್​ವುನ್​ಗಳನ್ನು ನೇಮಿಸಿಕೊಳ್ಳುವ ಅಗತ್ಯವಿದೆ. ಕಳೆದ ಮಳೆಗಾಲದಲ್ಲಾದ ಅನುಭವವನ್ನು ಪಾಠವೆಂದು ಭಾವಿಸಿ ಈ ಮಳೆಗಾಲದಲ್ಲಿ ಮುಂಜಾಗ್ರತೆ ಕೈಗೊಳ್ಳಬೇಕು ಎಂದರು.

    ಉಪವಿಭಾಗಾಧಿಕಾರಿ ಈಶ್ವರ ಉಳ್ಳಾಗಡ್ಡಿ, ಹೆಸ್ಕಾಂ ಪ್ರಧಾನ ವ್ಯವಸ್ಥಾಪಕ ಮರಿಸ್ವಾಮಿ, ಶಿರಸಿ ವೃತ್ತದ ಅಧೀಕ್ಷಕ ಇಂಜಿನಿಯರ್ ಟಿ.ಪಿ. ಶೆಟ್ಟಿ, ವಿಭಾಗೀಯ ಕಾರ್ಯನಿರ್ವಾಹಕ ಇಂಜಿನಿಯರ್ ದೀಪಕ ಕಾಮತ್, ತಾ.ಪಂ. ಅಧ್ಯಕ್ಷೆ ಚಂದ್ರಕಲಾ ಭಟ್ಟ, ಉಪಾಧ್ಯಕ್ಷೆ ಸುಜಾತಾ ಸಿದ್ದಿ, ಸದಸ್ಯ ನಟರಾಜ ಗೌಡರ್, ವಿದ್ಯುತ್ ಗುತ್ತಿಗೆದಾರರ ಸಂಘದ ನ್ಯೂಸ್ ವಿಭಾಗದ ಚೇರ್ಮನ್ ವೇಣುಗೋಪಾಲ ಮದ್ಗುಣಿ, ಸಾಮಾಜಿಕ ಕಾರ್ಯಕರ್ತರಾದ ವಿಜಯ ಮಿರಾಶಿ, ಗಣಪತಿ ಮುದ್ದೆಪಾಲ, ಶ್ರೀಕಾಂತ ಶೆಟ್ಟಿ, ಯಲ್ಲಾಪುರ, ಶಿರಸಿ, ದಾಂಡೇಲಿ, ಕಾರವಾರ ಹಾಗೂ ಹೊನ್ನಾವರ ವೃತ್ತಗಳ ಕಾರ್ಯಪಾಲಕ ಇಂಜಿನಿಯರ್​ಗಳು ಭಾಗವಹಿಸಿದ್ದರು.

    ಪರೀಕ್ಷೆಗೆ ಸಿದ್ಧತೆ ಮಾಡಿಕೊಳ್ಳಿ
    ಜಿಲ್ಲೆಯ ಶಿಕ್ಷಣ ಇಲಾಖೆಯ ಪ್ರಮುಖರ ಸಭೆಯನ್ನು ಈ ವೇಳೆ ನಡೆಸಿದ ಜಿಲ್ಲಾ ಉಸ್ತುವಾರಿ ಸಚಿವ ಹೆಬ್ಬಾರ, ಪರೀಕ್ಷೆಗೆ ಹಾಜರಾಗಲು ಸಮಸ್ಯೆಯಾಗಿ ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ತೊಂದರೆಯಾದಲ್ಲಿ ಅಧಿಕಾರಿಗಳೇ ನೇರ ಹೊಣೆ ಎಂದು ಎಚ್ಚರಿಸಿದರು. ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಸಮರ್ಪಕ ಸಾರಿಗೆ ವ್ಯವಸ್ಥೆ ಮಾಡಬೇಕು. ಅವಶ್ಯಕತೆಯಿದ್ದಲ್ಲಿ ವಿವಿಧ ಇಲಾಖೆಯ ವಾಹನಗಳ ಮೂಲಕ ವಿದ್ಯಾರ್ಥಿಗಳನ್ನು ಕರೆತರಬೇಕು. ಇದನ್ನು ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ನಿರ್ವಹಿಸಬೇಕು ಎಂದರು.

    ವಿದ್ಯಾರ್ಥಿಗಳ ಆರೋಗ್ಯ ವಿಚಾರದಲ್ಲಿ ಯಾವುದೇ ಸಮಸ್ಯೆಯಾಗದಂತೆ ಕೋವಿಡ್-19 ನಿಯಮಾವಳಿಗಳನ್ನು ಪರಿಪಾಲಿಸಿ ಪರೀಕ್ಷೆ ಸುಸೂತ್ರವಾಗಿ ನಡೆಸಬೇಕು ಎಂದು ಸೂಚಿಸಿದರು. ಸಭೆಯಲ್ಲಿ ಕಾರವಾರ ಡಿಡಿಪಿಐ ಹರೀಶ ಗಾಂವ್ಕರ್, ಶಿರಸಿ ಡಿಡಿಪಿಐ ದಿವಾಕರ ಶೆಟ್ಟಿ, ತಹಸೀಲ್ದಾರ್ ಡಿ.ಜಿ.ಹೆಗಡೆ, ಮುಂಡಗೋಡ ತಹಸೀಲ್ದಾರ್ ಶ್ರೀಧರ ಮುಂದಲಮನಿ, ಯಲ್ಲಾಪುರ ಬಿಇಒ ಎನ್.ಆರ್. ಹೆಗಡೆ, ಮುಂಡಗೋಡ ಬಿಇಒ ವಿ.ಎಸ್. ಪಟಗಾರ ಇತರ ಅಧಿಕಾರಿಗಳು ಭಾಗವಹಿಸಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts