ಶಿಕ್ಷಣದಿಂದ ಸ್ವಾಲಂಬಿ ಬದುಕು ಲಭ್ಯ

CTD D.SUDAKRA....
Published on

ಚಿತ್ರದುರ್ಗ: ಬದುಕಿನಲ್ಲಿ ಶಿಕ್ಷಣ ಬಹಳ ದೊಡ್ಡ ಪಾತ್ರ ವಹಿಸಲಿದ್ದು, ಶಿಕ್ಷಣದಿಂದ ಸ್ವಾವಲಂಬನೆ ಜೀವನ ರೂಪಿಸಿಕೊಳ್ಳಲು ಸಾಧ್ಯ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹೇಳಿದರು.
ಶಿವಮೊಗ್ಗ ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಹಿರಿಯೂರು ತೋಟಗಾರಿಕೆ ಮಹಾ ವಿದ್ಯಾಲಯ ಹಾಗೂ ಪದವಿ ಪೂರ್ವ ಶಿಕ್ಷಣ ಇಲಾಖೆ ಸಹಯೋಗದೊಂದಿಗೆ ನಗರದ ತರಾಸು ರಂಗಮಂದಿರದಲ್ಲಿ ಶನಿವಾರ ಹಮ್ಮಿಕೊಂಡಿದ್ದ ಕೃಷಿ ಶಿಕ್ಷಣ ಸುಗ್ಗಿ ’ಕಾರ‌್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಜಿಲ್ಲೆಯ ಗ್ರಾಮೀಣ ವಿದ್ಯಾರ್ಥಿಗಳಿಗೆ ಕೃಷಿ ಶಿಕ್ಷಣದ ಮಾಹಿತಿ ಕೊಡುವ ಉದ್ದೇಶದಿಂದ ಕಾರ‌್ಯಕ್ರಮ ಆಯೋಜಿಸಲಾಗಿದೆ. ಪಿಯುಸಿ ನಂತರ ಕೃಷಿ ಪದವಿಗಳು ಹಾಗೂ ಅವುಗಳಲ್ಲಿರುವ ಅವಕಾಶಗಳು, ಆಯ್ಕೆ ಅರಿವು, ರಾಜ್ಯದಲ್ಲಿರುವ ಕೃಷಿ ಶೈಕ್ಷಣಿಕ ಸಂಸ್ಥೆಗಳು ಮತ್ತು ಪದವಿಗಳು ಹಾಗೂ ಪ್ರವೇಶ ಪ್ರಕ್ರಿಯೆ ಕುರಿತಂತೆ ಮಾಹಿತಿ ದೊರೆಯುವ ಈ ಕಾರ್ಯಕ್ರಮದ ಸದುಪಯೋಗ ಪಡೆಯುವಂತೆ ವಿದ್ಯಾರ್ಥಿಗಳಿಗೆ ಸಚಿವರು ಸಲಹೆ ನೀಡಿದರು.
ದೇಶದ ಶಿಕ್ಷಣ ಕ್ಷೇತ್ರದಲ್ಲಿ ಬಹಳಷ್ಟು ಬದಲಾವಣೆಗಳಾಗುತ್ತಿವೆ. ಈ ಕ್ಷೇತ್ರದ ಅಭಿವೃದ್ಧಿಗೆ ಸರ್ಕಾರಗಳು ಕೋಟ್ಯಂತರ ರೂಪಾಯಿ ವೆಚ್ಚ ಮಾಡುತ್ತಿದೆ. ಸರ್ವರಿಗೂ ಶಿಕ್ಷಣ ದೊರೆಯಬೇಕು ಎಂಬ ಉದ್ದೇಶದಿಂದ ಶಾಲಾ-ಕಾಲೇಜು, ವಿಶ್ವವಿದ್ಯಾಲಯ, ಶೈಕ್ಷಣಿ ಸಂಸ್ಥೆಗಳನ್ನು ಸ್ಥಾಪಿಸಿ ಗ್ರಾಮೀಣ ವಿದ್ಯಾರ್ಥಿಗಳ ಬಳಿಗೆ ಶಿಕ್ಷಣವನ್ನು ಕೊಂಡ್ಯೂಯುವ ಕೆಲಸವಾಗುತ್ತಿದೆ ಎಂದರು.
ವಿದ್ಯಾರ್ಥಿಗಳ ಬೌದ್ಧಿಕ ಶಕ್ತಿ ಹೆಚ್ಚಳ ನಮ್ಮ ಮುಂದಿರುವ ದೊಡ್ಡ ಸವಾಲು. ಜ್ಞಾನ ಯಾರ ಸ್ವತ್ತೂ ಅಲ್ಲ. ವಿದ್ಯಾರ್ಥಿಗಳು ಬದ್ಧತೆ ಹಾಗೂ ಏಕಾಗ್ರತೆಯಿಂದ ಅಧ್ಯಯನಶೀಲರಾಗಿ ಉಜ್ವಲ ಭವಿಷ್ಯ ರೂಪಿಸಿಕೊಳ್ಳಬೇಕು ಎಂದು ತಿಳಿಸಿದರು.
ಕೆಳದಿಯ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಮಾತನಾಡಿ, ಪ್ರಪಂಚದಲ್ಲಿಯೇ ಅತಿ ಕಡಿಮೆ ಖರ್ಚಿನಲ್ಲಿ ಶಿಕ್ಷಣ ನೀಡುವ ಪದವಿ ಎಂದರೆ ಅದು ಕೃಷಿ ವಿಜ್ಞಾನ ಪದವಿಯಾಗಿದೆ. ಶೈಕ್ಷಣಿಕವಾಗಿ ಸಿಗುವ ಅವಕಾಶಗಳನ್ನು ಬಳಸಿಕೊಂಡು ವಿದ್ಯಾಭ್ಯಾಸ ಪಡೆಯಬೇಕು ಎಂದು ಹೇಳಿದರು.
ಚಿತ್ರದುರ್ಗ ಜಿಲ್ಲೆ ಆರ್ಥಿಕವಾಗಿ ಹಿಂದುಳಿದಿರಬಹುದು. ಆದರೆ, ಶೈಕ್ಷಣಿಕವಾಗಿ ಅಭಿವೃದ್ಧಿಯಾಗಿದೆ. ಹೊಳಲ್ಕೆರೆ ತಾಲೂಕಿನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಕೃಷಿ ಪದವೀಧರರು ಇದ್ದಾರೆ. ಹಲವರು ದೇಶ-ವಿದೇಶಗಲ್ಲಿ ಕಾರ್ಯನಿರ್ವಹಿಸುತ್ತಿದ್ದಾರೆ ಎಂದರು.
ಹರಿಯಬ್ಬೆ ಸರ್ಕಾರಿ ಪಪೂ ಕಾಲೇಜು ಉಪನ್ಯಾಸಕ ದತ್ತಾತ್ರೇಯ ಮಾತನಾಡಿದರು. ರಂಗಮಂದಿರದ ಆವರಣದಲ್ಲಿ ಕೃಷಿ ಯಂತ್ರೋಪಕರಣಗಳು, ಬೆಳೆಗಳು, ಕೃಷಿ ಉತ್ಪನ್ನ ಮೌಲ್ಯವರ್ಧಿತ ಉತ್ಪನ್ನದ ಆಹಾರದ ತಿನಿಸುಗಳನ್ನು ಪ್ರದರ್ಶನಗಳನ್ನು ಮಳಿಗೆಗಳನ್ನು ಸ್ಥಾಪಿಸಲಾಗಿತ್ತು.
ವಿಶ್ವವಿದ್ಯಾಲಯದ ಆಡಳಿತ ಮಂಡಳಿ ಸದಸ್ಯರಾದ ಡಾ.ಪಿ.ಕೆ.ಬಸವರಾಜ್, ಡಾ.ಬಿ.ಕೆ.ಕುಮಾರಸ್ವಾಮಿ, ಕುಲಸಚಿವ ಡಾ.ಕೆ.ಸಿ.ಶಶಿಧರ್, ತೋಟಗಾರಿಕೆ ಮಹಾವಿದ್ಯಾಲಯ ಡೀನ್ ಡಾ.ಕೆ.ಮಂಜಪ್ಪ, ಪಪೂ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಆರ್.ಪುಟ್ಟಸ್ವಾಮಿ ಇತರರಿದ್ದರು.

*ಕೋಟ್
ಈ ಕಾರ‌್ಯಕ್ರಮ ಜಿಲ್ಲೆಯಲ್ಲಿನ ಪದವಿಪೂರ್ವ ವಿಜ್ಞಾನ ವಿದ್ಯಾರ್ಥಿಗಳಿಗೆ ಅಗತ್ಯವಾಗಿದ್ದು, ಪಿಯು ನಂತರದಲ್ಲಿ ಕೃಷಿ ಸಂಬಂಧಿತ ವಿಷಯಗಳ ಕುರಿತಂತೆ ಉಪಯುಕ್ತವಾಗಿದೆ.
ಶಾಂತಕುಮಾರಿ, ಉಪನ್ಯಾಸಕಿ, ಚಳ್ಳಕೆರೆ

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net