More

    ಸಕಾಲಕ್ಕೆ ಸಂತ್ರಸ್ತರ ಕೈ ಸೇರಲಿ ಪರಿಹಾರ

    ನರಗುಂದ: ತಾಲೂಕಿನಲ್ಲಿ ಅತಿವೃಷ್ಟಿ ಹಾಗೂ ಪ್ರವಾಹದಿಂದಾದ ಹಾನಿ ಕುರಿತು ನಿಖರ ಸಮೀಕ್ಷೆ ಕೈಗೊಳ್ಳುವ ಮೂಲಕ ಸಂತ್ರಸ್ತರಿಗೆ ಸಕಾಲಕ್ಕೆ ಸರ್ಕಾರದ ಸಹಾಯ ಧನ ತಲುಪಿಸಬೇಕು ಎಂದು ತಾಲೂಕು ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.

    ಪಟ್ಟಣದ ತಹಸೀಲ್ದಾರ್ ಕಚೇರಿಯಲ್ಲಿ ಮಂಗಳವಾರ ತಾಲೂಕು ಮಟ್ಟದ ಅಧಿಕಾರಿಗಳ ಸಭೆಯಲ್ಲಿ ಅವರು ಮಾತನಾಡಿದರು.

    ಅತಿವೃಷ್ಟಿ ಮತ್ತು ಪ್ರವಾಹದಿಂದಾದ ಹಾನಿ ಸಮೀಕ್ಷೆ ಕೈಗಳ್ಳುವಾಗ ಅಧಿಕಾರಿಗಳು ಯಾರಿಗೂ ಅನ್ಯಾಯವಾಗದಂತೆ ಸರ್ಕಾರದ ಉದ್ದೇಶವನ್ನು ಗಮನದಲ್ಲಿಟ್ಟುಕೊಂಡು ನಿಖರವಾದ ಸಮೀಕ್ಷೆ ಕೈಗೊಳ್ಳಬೇಕು. ಜಂಟಿ ಸಮೀಕ್ಷೆ ಕೈಗೊಳ್ಳುವಾಗ ವಿವಿಧ ಇಲಾಖೆಗಳ ಮಧ್ಯೆ ಸಮನ್ವಯದಿಂದ ಕಾರ್ಯನಿರ್ವಹಿಸಬೇಕು. ಪ್ರವಾಹೋತ್ತರ ಪರಿಸ್ಥಿತಿಯನ್ನು ಸರಿಯಾಗಿ ನಿರ್ವಹಿಸಬೇಕು ಎಂದರು.

    ನಗರ ಪ್ರದೇಶದಲ್ಲಿ ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸ್ವಚ್ಛ, ಶುದ್ಧ ಪರಿಸರಕ್ಕೆ ಆದ್ಯತೆ ನೀಡಬೇಕು. ಕೊಳಚೆ ಪ್ರದೇಶಗಳಲ್ಲಿ ಅಗತ್ಯ ಮೂಲ ಸೌಲಭ್ಯಗಳನ್ನು ಒದಗಿಸಿ ಸಾಂಕ್ರಾಮಿಕ ರೋಗ ತಡೆಗೆ ಕ್ರಮ ಕೈಗೊಳ್ಳಬೇಕು. ಮಳೆ ನೀರು ಸರಾಗವಾಗಿ ಮುಂದೆ ಸಾಗಲು ಚರಂಡಿಗಳ ಸ್ವಚ್ಛತೆಗೆ ವಿಶೇಷ ಗಮನ ಹರಿಸಬೇಕು ಎಂದು ಮುಖ್ಯಾಧಿಕಾರಿ ಅಮಿತ ತಾರದಾಳೆ ಅವರಿಗೆ ಸೂಚಿಸಿದರು.

    ಕಚೇರಿಗಳಲ್ಲಿನ ಬಾಕಿ ಇರುವ ಎಲ್ಲ ಹಂತದ ಅರ್ಜಿಗಳನ್ನು ತಕ್ಷಣ ವಿಲೇವಾರಿ ಮಾಡಬೇಕು. ಸರ್ಕಾರದಿಂದ ನೀಡಲಾದ ಗುರಿ ಸಾಧನೆಗೆ ಗಮನ ಹರಿಸಬೇಕು. ಕಂಪ್ಯೂಟರ್ ಆಪರೇಟರ್, ಗ್ರಾಮ ಲೆಕ್ಕಾಧಿಕಾರಿಗಳು, ಕಂದಾಯ ನಿರೀಕ್ಷಕರು, ಶಿರಸ್ತೆದಾರ್, ತಹಸೀಲ್ದಾರರ ಹಂತದಲ್ಲಿ ಬಾಕಿ ಇರುವ ಎಲ್ಲ ಕಡತಗಳ ವಿಲೇವಾರಿಗೆ ಕ್ರಮ ಕೈಗೊಳ್ಳಬೇಕು ಎಂದು ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಸೂಚಿಸಿದರು.

    ಉಪ ವಿಭಾಗಾಧಿಕಾರಿ ಅನ್ನಪೂರ್ಣ ಮುದಕಮ್ಮನವರ ಮಾತನಾಡಿ, ಸರ್ಕಾರಿ ಕಚೇರಿಗೆ ಆಗಮಿಸುವ ಸಾರ್ವಜನಿಕರೊಂದಿಗೆ ಅಧಿಕಾರಿಗಳು ಸೌಜನ್ಯದೊಂದಿಗೆ ವರ್ತಿಸಿ, ಕಾಲಮಿತಿಯೊಳಗೆ ಸರಿಯಾದ ಸಮಯಕ್ಕೆ ಕಚೇರಿಗೆ ಹಾಜರಾಗಿ ಕರ್ತವ್ಯ ನಿರ್ವಹಿಸಬೇಕು. ಮಾಸಾಶನ ಕುರಿತು ಸ್ವೀಕರಿಸಲಾಗುವ ಅರ್ಜಿಗಳನ್ನು ಆದ್ಯತೆ ಮೇರೆಗೆ ಸಾಧ್ಯವಾದಷ್ಟು ಶೀಘ್ರವೇ ಮಂಜೂರಾತಿ ನೀಡಲು ಗಮನ ಹರಿಸಬೇಕು ಎಂದು ತಿಳಿಸಿದರು.

    ಸಭೆಯ ನಂತರ ಜಿಲ್ಲಾಧಿಕಾರಿ ವೈಶಾಲಿ ಎಂ.ಎಲ್. ಅವರು ಪಟ್ಟಣದ ಸವದತ್ತಿ ರಸ್ತೆಯಲ್ಲಿರುವ ಘನ ತ್ಯಾಜ್ಯ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಇದಕ್ಕೂ ಮುನ್ನ ಸಾರ್ವಜನಿಕರಿಂದ ಕುಂದುಕೊರತೆಗಳ ಅಹವಾಲು ಸ್ವೀಕರಿಸಿದರು. ತಹಸೀಲ್ದಾರ್ ಎ.ಡಿ. ಅಮರಾವದಗಿ, ಎಸ್.ಎಲ್. ಪಾಟೀಲ, ಬಿ.ಎಂ. ಬಡಿಗೇರ, ರೂಪಾ ಗಂಧದ, ಆನಂದ ಭೋವಿ, ಸುನಂದ ಎಸ್, ಸಂಗಮೇಶ ಬ್ಯಾಳಿ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts