More

    ಸಮಯ ವ್ಯರ್ಥ ಮಾಡದೆ ಗುರಿ ಸಾಧಿಸಿ, ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಾಕ್ಷರಿ ಸಲಹೆ

    ಬೆಂಗಳೂರು ಗ್ರಾಮಾಂತರ: ಉದ್ಯೋಗ ಕ್ಷೇತ್ರದಲ್ಲಿ ಸ್ಪರ್ಧೆ ಹೆಚ್ಚಾಗಿದ್ದು, ವಿದ್ಯಾರ್ಥಿಗಳು ವಿಚಲಿತರಾಗದೆ, ಸಮಯ ವ್ಯರ್ಥ ಮಾಡದೆ, ಗುರಿಯೆಡೆಗೆ ಗಮನಹರಿಸಬೇಕು ಎಂದು ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಾಕ್ಷರಿ ತಿಳಿಸಿದರು.

    ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಶಾಖೆ ಸಹಯೋಗದಲ್ಲಿ ದೇವನಹಳ್ಳಿ ತಾಲೂಕಿನ ಬೀರಸಂದ್ರದ ಜಿಲ್ಲಾಡಳಿತ ಭವನದಲ್ಲಿರುವ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ 2019-20ನೇ ಸಾಲಿನ ಎಸ್ಸೆಸ್ಸೆಲ್ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕಿ ಹೆಚ್ಚು ಅಂಕ ಪಡೆದ ಜಿಲ್ಲಾ ಸರ್ಕಾರಿ ನೌಕರರ ಪ್ರತಿಭಾವಂತ ಮಕ್ಕಳಿಗೆ ಜಿಲ್ಲಾಮಟ್ಟದ ಪ್ರತಿಭಾ ಪುರಸ್ಕಾರ ಸಮಾರಂಭವನ್ನು ಉದ್ಘಾಟಿಸಿ ಮಾತನಾಡಿದರು.

    ರಾಜ್ಯದಲ್ಲಿ ಮೊದಲ ಬಾರಿಗೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಸಮಾರಂಭ ಆಯೋಜಿಸಲಾಗಿದ್ದು, ಮುಂದಿನ ದಿನಗಳಲ್ಲಿ ಇತರ ಜಿಲ್ಲೆಗಳಲ್ಲಿಯೂ ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.

    ರಾಜ್ಯ ಸರ್ಕಾರ ಈಗಾಗಲೇ ನೌಕರರ ತುಟ್ಟಿಭತ್ಯೆ(ಡಿಎ) ಹೆಚ್ಚಳಗೊಳಿಸಿದ್ದು, ಸರ್ಕಾರಿ ನೌಕರರು ಹಾಗೂ ಅವರ ಅವಲಂಬಿತರಿಗೆ ಅನುಕೂಲವಾಗುವಂತೆ ಸರ್ಕಾರ ಆರೋಗ್ಯ ಯೋಜನೆ ರೂಪಿಸಿದ್ದು, ಶೇ.100 ಉಚಿತ ಚಿಕಿತ್ಸೆ ಲಭ್ಯವಾಗಲಿದೆ ಎಂದರು.
    ಜಿಲ್ಲಾಧಿಕಾರಿ ಕೆ.ಶ್ರೀನಿವಾಸ್ ಮಾತನಾಡಿ, ಪ್ರತಿಯೊಬ್ಬ ವಿದ್ಯಾರ್ಥಿಯೂ ಉನ್ನತ ಗುರಿ ಹೊಂದಬೇಕು. ಪರಿಶ್ರಮದಿಂದ ಗುರಿ ಸಾಧಿಸಲು ಪ್ರಯತ್ನಿಸುವುದರಿಂದ ಮುಂದಿನ ದಿನಗಳಲ್ಲಿ ಉನ್ನತ ಹುದ್ದೆ ಪಡೆಯಬಹುದು ಎಂದರು.

    ಬೆಂಗಳೂರು ಗ್ರಾಮಾಂತರ ಜಿಲ್ಲೆಯಿಂದ ಹಲವಾರು ಕಾರ್ಯಕ್ರಮಗಳನ್ನು ರಾಜ್ಯದಲ್ಲಿಯೇ ಮೊದಲ ಬಾರಿಗೆ ಆಯೋಜಿಸಿದ್ದೇವೆ. ವೈದ್ಯರ ನಡೆ ಹಳ್ಳಿ ಕಡೆ, ಮಕ್ಕಳ ತಜ್ಞರ ನಡೆ ಹಳ್ಳಿ ಕಡೆ, ದೇಶದಲ್ಲಿಯೇ ಕಡಿಮೆ ಅವಧಿಯಲ್ಲಿ ಮೊದಲ ಮೇಕ್‌ಶ್‌ಟಿ ಆಸ್ಪತ್ರೆ ನಿರ್ಮಾಣ, ದೇಶದಲ್ಲಿಯೇ ಮೊದಲ ಬಾರಿಗೆ ತಾಲೂಕುಮಟ್ಟದಲ್ಲಿ ಯಶಸ್ವಿ ಬ್ಲ್ಯಾಕ್ ಫಂಗಸ್ ಶಸ್ತ್ರಚಿಕಿತ್ಸೆ ಮಾಡಲಾಗಿದೆ ಎಂದರು.

    ಜಿಲ್ಲೆಯಲ್ಲಿ ಕೋವಿಡ್ ನಿಯಂತ್ರಣಕ್ಕಾಗಿ ಎಲ್ಲ ಇಲಾಖೆಗಳು ಶ್ರಮಿಸಿದ್ದು, ಈಗಾಗಲೇ ಕೋವಿಡ್ ಮೂರನೇ ಅಲೆ ಪ್ರಾರಂಭವಾಗಿದ್ದು, ಪ್ರತಿಯೊಬ್ಬರೂ ಮುಂಜಾಗ್ರತಾ ಕ್ರಮವಾಗಿ ಕೋವಿಡ್ ನಿಯಮ ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದರು.

    ಅಪರ ಜಿಲ್ಲಾಧಿಕಾರಿ ವಿಜಯಾ ಇ. ರವಿಕುಮಾರ್ ಮಾತನಾಡಿ, ದೇಶ ಕಟ್ಟುವಲ್ಲಿ ಯುವ ಜನತೆಯ ಪಾತ್ರ ಮಹತ್ತರವಾದದ್ದು, ವಿದ್ಯಾರ್ಥಿಗಳು ಉತ್ತಮ ಕನಸು ಕಾಣಬೇಕು ಹಾಗೂ ಅವುಗಳನ್ನು ನನಸು ಮಾಡಿಕೊಳ್ಳುವತ್ತ ಹೆಜ್ಜೆ ಹಾಕಬೇಕು ಎಂದರು.
    ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿಜಯ್ ಕುಮಾರ್ ಮಾತನಾಡಿ, ಸರ್ಕಾರಿ ನೌಕರರ ಮಕ್ಕಳಿಗೆ ಪ್ರೋತ್ಸಾಹ ನೀಡುವ ನಿಟ್ಟಿನಲ್ಲಿ ಪ್ರತಿಭಾ ಪುರಸ್ಕಾರ ನೀಡುತ್ತಿರುವುದು ಶ್ಲಾಘನೀಯ ಎಂದರು.

    ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯ ಖಜಾಂಚಿ ಶ್ರೀನಿವಾಸ್, ಬೆಂಗಳೂರು ಗ್ರಾಮಾಂತರ ಜಿಲ್ಲೆ ಗೌರವಾಧ್ಯಕ್ಷ ಹಾಗೂ ಹೊಸಕೋಟೆ ತಾಲ್ಲೂಕು ಅಧ್ಯಕ್ಷ ಆರ್.ಮುನಿಶಾಮಪ್ಪ, ದೇವನಹಳ್ಳಿ ತಾಲ್ಲೂಕು ಅಧ್ಯಕ್ಷ ಎಚ್.ಬಾಲಕೃಷ್ಣ, ದೊಡ್ಡಬಳ್ಳಾಪುರ ತಾಲ್ಲೂಕು ಅಧ್ಯಕ್ಷ ಎನ್. ಲಕ್ಷ್ಮೀನರಸಿಂಹಯ್ಯ, ನೆಲಮಂಗಲ ತಾಲೂಕು ಅಧ್ಯಕ್ಷ ವಾಸುದೇವ ಮೂರ್ತಿ, ಬೆಂಗಳೂರು ಗ್ರಾಮಾಂತರ ಜಿಲ್ಲಾ ಶಾಖೆ ಹಿರಿಯ ಉಪಾಧ್ಯಕ್ಷ ರವಿಶಂಕರ್, ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾ ಖಜಾಂಚಿ ಮಹಮದ್ ಮುಜಾಮಿಲ್, ಪ್ರಧಾನ ಕಾರ್ಯದರ್ಶಿ ಪಿ.ಗಂಗಾಧರಪ್ಪ ಇತರರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts