More

    ಸಮುದಾಯಭವನ ನಿರ್ಮಾಣಕ್ಕೆ ಆದ್ಯತೆ


    ಹನೂರು: ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 140ಕ್ಕೂ ಹೆಚ್ಚು ಸಮುದಾಯ ಭವನಗಳನ್ನು ನಿರ್ಮಿಸಲಾಗಿದೆ. ಇದರಲ್ಲಿ ಆದಿಜಾಂಬವ ಸಮುದಾಯಕ್ಕೆ 45 ಭವನ ನಿರ್ಮಿಸಿಕೊಡಲಾಗಿದೆ ಎಂದು ಶಾಸಕ ಆರ್.ನರೇಂದ್ರ ಹೇಳಿದರು.
    ತಾಲೂಕಿನ ಬೂದುಗುಪ್ಪೆ ಗ್ರಾಮದಲ್ಲಿ ಸಮಾಜ ಕಲ್ಯಾಣ ಇಲಾಖೆ ವತಿಯಿಂದ 12 ಲಕ್ಷ ರೂ. ವೆಚ್ಚದಲ್ಲಿ ನಿರ್ಮಿಸಿರುವ ಡಾ.ಬಾಬು ಜಗಜೀವನರಾಮ್ ಸಮುದಾಯ ಭವನವನ್ನು ಬುಧವಾರ ಉದ್ಘಾಟಿಸಿ ಮಾತನಾಡಿದರು.
    ಸರ್ಕಾರ ಕ್ಷೇತ್ರಕ್ಕೆ ನೀಡಿದ್ದ 3.5 ಸಾವಿರ ಕೋಟಿ ರೂ. ಅನುದಾನದಲ್ಲಿ ರಸ್ತೆ ಅಭಿವೃದ್ಧಿ, ಸೇತುವೆಗಳ ನಿರ್ಮಾಣ, ಅಂಗನವಾಡಿ, ಶಾಲೆ ಹಾಗೂ ವಿದ್ಯಾರ್ಥಿ ನಿಲಯ ಸೇರಿದಂತೆ ಅನೇಕ ಅಭಿವೃದ್ಧಿ ಕಾರ್ಯಗಳು ನಡೆದಿದೆ. ಈವರೆಗೆ 139 ಸಮುದಾಯ ಭವನಗಳನ್ನು ಉದ್ಘಾಟನೆಗೊಳಿಸಲಾಗಿದೆ ಎಂದರು.
    ಕ್ಷೇತ್ರದ ಅಭಿವೃದ್ಧಿಗೆ ಒತ್ತು ನೀಡಿದ್ದೇನೆ. ಜನತೆಗೆ ಅನುಕೂಲ ಕಲ್ಪಿಸಿದ್ದೇನೆ. ಈ ಬಗ್ಗೆ ಪ್ರತಿಯೊಬ್ಬರೂ ಮನಗಾಣಬೇಕು. ಮುಂದಿನ ಚುನಾವಣೆಯಲ್ಲೂ ಹನೂರು ಕ್ಷೇತ್ರ ಕಾಂಗ್ರೆಸ್ ಭದ್ರಕೋಟೆ ಎಂಬುದನ್ನು ಸಾಬೀತು ಪಡಿಸಬೇಕು ಎಂದು ಮನವಿ ಮಾಡಿದರು.
    ಮೈಮುಲ್ ನಿರ್ದೇಶಕ ನಂಜುಂಡಸ್ವಾಮಿ ಮಾತನಾಡಿ, ಜಿಲ್ಲೆಯಲ್ಲಿಯೇ ಹನೂರು ವಿಧಾನಸಭಾ ಕ್ಷೇತ್ರದಲ್ಲಿ ಅದಿ ಜಾಂಬವ ಜನಾಂಗಕ್ಕೆ ಹೆಚ್ಚಿನ ಸಮುದಾಯ ಭವನಗಳು ನಿರ್ಮಾಣವಾಗಿರುವುದು ಮೆಚ್ಚುಗೆಯ ಸಂಗತಿ. ಜನರು ಇದರ ಪ್ರಯೋಜನ ಪಡೆದುಕೊಳ್ಳುವ ಮೂಲಕ ಅಭಿವೃದ್ಧಿಯ ಕಡೆ ಗಮನಹರಿಸಬೇಕು. ಭವನವನ್ನು ಮದುವೆ, ಸಭೆ ಸಮಾರಂಭಗಳಿಗೆ ಮಾತ್ರ ಬಳಕೆ ಮಾಡಿಕೊಳ್ಳುವುದರ ಜತೆಗೆ ಮಕ್ಕಳ ಶೈಕ್ಷಣಿಕ ಚಟುವಟಿಕೆಯ ಕೇಂದ್ರವಾಗಿಸಬೇಕು. ಆದಾಗ ಮಾತ್ರ ಸಮುದಾಯಗಳು ಅಭಿವೃದ್ಧಿ ಹೊಂದಲು ಸಾಧ್ಯ ಎಂದು ಸಲಹೆ ನೀಡಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts